ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾರ್ಕಿಂಗ್‌ ನಿರ್ಮಾಣಕ್ಕೆ ಟೆಂಡರ್‌ ಕರೆಯಿರಿ’

ಹೆದ್ದಾರಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್
Last Updated 12 ಸೆಪ್ಟೆಂಬರ್ 2020, 15:11 IST
ಅಕ್ಷರ ಗಾತ್ರ

ಉಡುಪಿ: ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ ಜಿಲ್ಲಾ ರಸ್ತೆ ಸುರಕ್ಷತಾ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಂತೆ ಸಾರಿಗೆ, ಪೊಲೀಸ್, ಆರೋಗ್ಯ, ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ , ಪಂಚಾಯತ್‌ ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ನಗರಸಭೆಯಿಂದ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅಂದಾಜು ವೆಚ್ಚದ ವಿವರವನ್ನು ವಾರದಲ್ಲಿ ಸಲ್ಲಿಸಬೇಕು ಎಂದರು.

ಉಡುಪಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದ ಡಿಸಿ, ನಗರದಲ್ಲಿ ಝೀಬ್ರಾ ಕ್ರಾಸ್ ಹಾಗೂ ವೈಜ್ಞಾನಿಕ ರೀತಿಯಲ್ಲಿ ಹಂಪ್‌ಗಳನ್ನು ಅಳವಡಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಮಾಣ ಹೆಚ್ಚಾಗಿದ್ದು, ಕಳೆದ ವರ್ಷ 260 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ರಸ್ತೆ ಸುರಕ್ಷತಾ ನಿಯಮಗಳಂತೆ ಅಪಘಾತ ಪ್ರಮಾಣ ಶೇ 10ಕ್ಕಿಂತ ಕಡಿಮೆ ಇರುವಂತೆ ಕ್ರಮ ಕೈಗೊಳ್ಳಬೇಕಿದ್ದು ಹೆದ್ದಾರಿಯಲ್ಲಿನ ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದರು.

ಬ್ಲಾಕ್ ಸ್ಪಾಟ್‌ಗಳಲ್ಲಿ ಕಾಮಗಾರಿ ಕೈಗೊಳ್ಳುವ ಕುರಿತ ಅನುಮೋದನೆಗೆ ಪ್ರಸ್ತಾವ ಕಳುಹಿಸಲಾಗಿದ್ದು, ಅನುಮತಿ ಸಿಕ್ಕಬಳಿಕ ಕಾಮಗಾರಿ ನಡೆಸಲಾಗುವುದು ಎಂದು ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕರು ತಿಳಿಸಿದರು.

ಇಂದ್ರಾಳಿಯಿಂದ ಟೈಗರ್ ಸರ್ಕಲ್‌ವರೆಗೆ ರಸ್ತೆ ವಿಭಜಕ ಇಲ್ಲದಿರುವುದರಿಂದ ರಸ್ತೆಯ ಎರಡೂ ಬದಿ ವಾಸವಿರುವ ನಿವಾಸಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಹೆಚ್ಚು ದೂರುಗಳು ಬರುತ್ತಿದ್ದು, ಲಕ್ಷ್ಮೀಂದ್ರ ನಗರ ಅಥವಾ ಅದಕ್ಕಿಂತ ಸ್ವಲ್ಪ ಮುಂದೆ ರಸ್ತೆ ವಿಭಜಕ ನಿರ್ಮಿಸುವ ಅಗತ್ಯವಿದೆ ಎಂದು ಎಸ್‌ಪಿ ವಿಷ್ಣುವರ್ಧನ್ ತಿಳಿಸಿದರು.

ಈ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ 169 ‘ಎ’ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಗುಂಡಿಬೈಲು–ದೊಡ್ಡಣಗುಡ್ಡೆ ರಸ್ತೆಯಲ್ಲಿ ಹಂಪ್ಸ್‌ ಅಳವಡಿಕೆ, ಅಜ್ಜರಕಾಡಿನ ಲಾಲ್ ಬಹದ್ದೂರ್ ಶಾಸ್ತ್ರಿ ಜಂಕ್ಷನ್ ಸಂಧಿಸುವ ರಸ್ತೆಯಲ್ಲಿ 4 ಕಡೆ ಹಂಪ್ಸ್ ಅಳವಡಿಕೆ, ಕರಂಬಳ್ಳಿ ನೇಕಾರರ ಕಾಲೊನಿ ಬಸ್ ನಿಲ್ದಾಣದ ಬಳಿ ಹೊಸ ರಿಕ್ಷಾ ನಿಲ್ದಾಣಕ್ಕೆ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT