ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಳೆ ಹಾನಿ ಪರಿಶೀಲಿಸಿದ ಶೋಭಾ ಕರಂದ್ಲಾಜೆ

ಕೇಂದ್ರದಲ್ಲಿ ಬಾಕಿ ಇರುವ ಯೋಜನೆಗಳು ಶೀಘ್ರ ಪೂರ್ಣ
Last Updated 16 ಜುಲೈ 2021, 12:46 IST
ಅಕ್ಷರ ಗಾತ್ರ

ಉಡುಪಿ: ಕೇಂದ್ರ ಸರ್ಕಾರದಿಂದ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಗೆ ಸಂಬಂಧಪಟ್ಟ ಯೋಜನೆಗಳು ಹಾಗೂ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸಿದರೆ, ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಶೀಘ್ರ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಶುಕ್ರವಾರ ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಳೆ ಹಾನಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರ ಸಲ್ಲಿಸಬೇಕು. ಉಪ್ಪುಂದದಲ್ಲಿ ₹ 130 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡುವ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಹೊಸ ಮೀನುಗಾರಿಕಾ ಮಸೂದೆಯೂ ಸಿದ್ಧವಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಪಾಲನೆ, ಕಾರ್ಮಿಕರು ಕೆಲಸ ನಿರ್ವಹಿಸುವ ಕಡೆಗಳಲ್ಲಿ ಅಂತರ ಪಾಲನೆಯಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಆರಂಭವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕಗಳು ಶೀಘ್ರ ಕಾರ್ಯಾರಂಭ ಮಾಡಬೇಕು. ದುರ್ಬಲ ವರ್ಗದವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ಹಾಕಬೇಕು. ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಠಿಕ ಆಹಾರ ನೀಡಬೇಕು. ಗ್ರಾಮೀಣ ಪ್ರದೇಶಗಳಿಗೆ ‌‌ಸೋಂಕು ಹರಡದಂತೆ ಈ ಬಾರಿ ಎಚ್ಚರವಹಿಸಬೇಕು ಎಂದು ಸೂಚಿಸಿದರು.

ಮಳೆಗಾಲದಲ್ಲಿ ನೆರೆ ಹಾನಿಗೊಳಗಾಗುವ ಸಂತ್ರಸ್ತರಿಗೆ ತಕ್ಷಣದಲ್ಲಿ ಪರಿಹಾರ ವಿತರಿಸಬೇಕು. ನೀರು ಆವೃತವಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿ, ತುರ್ತು ನೆರವು ನೀಡಲು ಸಜ್ಜಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ ₹ 110 ಕೋಟಿ ಹಾನಿಯಾಗಿದ್ದು, ಇದರಲ್ಲಿ ಕಡಲ್ಕೊರೆತದಿಂದ ₹ 99 ಕೋಟಿ ಹಾನಿ ಸಂಭವಿಸಿದೆ. ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೋವಿಡ್ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 50 ಮಕ್ಕಳ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ನಡೆಯುತ್ತಿದೆ ಎಂದರು.

ಎಂಡೋಸಲ್ಫಾನ್ ಪೀಡಿತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಲಸಿಕೆ ನೀಡಲಾಗುತ್ತಿದೆ. ನೆರೆ ಪರಿಹಾರಕ್ಕಾಗಿ ₹ 11 ಕೋಟಿ ಲಭ್ಯವಿದ್ದು, ಅನುದಾನದ ಕೊರೆತೆ ಇಲ್ಲ. ವಿಕೋಪ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT