ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ ಕಾರ್ಮಿಕರ,ಸಮೀಕ್ಷೆ ನ.1ರಿಂದ

ನವೆಂಬರ್ ಅಂತ್ಯಕ್ಕೆ ಸಮಗ್ರ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚನೆ.
Last Updated 23 ಅಕ್ಟೋಬರ್ 2021, 16:19 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ನ.1ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲಕಾರ್ಮಿಕರು ಕೆಲಸದಲ್ಲಿ ತೊಡಗಿಸಿಕೊಂಡರೆ ಮಕ್ಕಳ ವಿಕಸನಕ್ಕೆ ಹಾಗೂ ಬೆಳವಣಿಗೆಗೆ ತೊಡಕಾಗುತ್ತದೆ. ಜತೆಗೆ ಮಕ್ಕಳು ಶಿಕ್ಷಣ ವಂಚಿತರಾಗುತ್ತಾರೆ. ಅನಿಷ್ಠ ಪದ್ಧತಿಯಾಗಿರುವ ಬಾಲಕಾರ್ಮಿಕ ಪದ್ಧತಿಯನ್ನು ಸಮಾಜದಿಂದ ತೊಡೆದು ಹಾಕಲು ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಕೈಗಾರಿಕೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು, ಕಲ್ಲು ಕ್ವಾರಿಗಳು, ಜಲ್ಲಿ ಕ್ರಷರ್‌ಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಬಳಸಿಕೊಳ್ಳುವ ಸಾಧ್ಯತೆಗಳಿದ್ದು, ಎಲ್ಲ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನ.1ರಿಂದ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಸಮೀಕ್ಷೆ ಆರಂಭಿಸಿ ತಿಂಗಳ ಅಂತ್ಯದೊಳಗೆ ಮುಕ್ತಾಯಗೊಳಿಸಿ ಸಮಗ್ರ ವರದಿ ಸಲ್ಲಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದರು.

ನವೆಂಬರ್ ತಿಂಗಳಲ್ಲಿ ಮಕ್ಕಳ ಗ್ರಾಮಸಭೆಗಳು ನಡೆಯಲಿದ್ದು, ಸಭೆಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲು ಹಾಗೂ ಪುರ್ನವಸತಿ ಕಲ್ಪಿಸಲು ತಾಲ್ಲೂಕುವಾರು ಅಧಿಕಾರಿಗಳನ್ನು ನಿಯೋಜಿಸಿದ್ದು ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ ಕಾರ್ಮಿಕರು ಕಂಡುಬಂದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಅಪಾಯಕಾರಿ ಹಾಗೂ ಅಪಾಯಕಾರಿಯಲ್ಲದ ಉದ್ದಿಮೆಗಳು ಸೇರಿದಂತೆ ಯಾವುದೇ ವಲಯಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಬಳಕೆಯನ್ನು ಸಂಪೂರ್ಣ ನಿಷೇಧಿಸಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT