ಸೋಮವಾರ, ಮೇ 16, 2022
24 °C
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್

ಬಾಲಕಾರ್ಮಿಕರನ್ನು ನೇಮಿಸಿಕೊಂಡರೆ 2 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ ದುಡಿಸಿಕೊಳ್ಳುವುದು ಕಾನೂನಿನಡಿ ಅಪರಾಧವಾಗಿದ್ದು, ಉಲ್ಲಂಘಿಸಿದರೆ ದಂಡದ ಜತೆಗೆ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಮಂಗಳವಾರ ಮಣಿಪಾಲದ ರಜತಾದ್ರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳದೆ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು. ನಿಯಮ ಉಲ್ಲಂಘಿಸಿದರೆ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಎರಡು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹ 20,000ದಿಂದ ₹ 50,000ದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.‌

ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಉದ್ಯೋಗ ಅರಸಿ ಬರುವ ಕಾರ್ಮಿಕರು ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಿರುವ ಪ್ರಕರಣಗಳು ಪತ್ತೆಯಾಗುತ್ತಿವೆ. ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿದ್ದ 2 ಪ್ರಕರಣಗಳು ಈಚೆಗೆ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಮುಂದೆ ಬಾಲ ಕಾರ್ಮಿಕ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ರಕ್ಷಿಸಿ ಶಾಲೆಗೆ ಹೋಗುವಂತೆ ಮಾಡಿ, ಶಿಕ್ಷಣವಂತರನ್ನಾಗಿಸಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿ ಕಾರ್ಮಿಕರು ಕೆಲಸ ಮಾಡುತ್ತಿರುವ ಕಡೆ ತಂಗಲು ವಸತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆಯನ್ನು ಮಾಲೀಕರು ಮಾಡಬೇಕು ಎಂದು ಸೂಚಿಸಿದರು.

ಸರ್ಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಮಾತನಾಡಿ, ಸಾಮಾನ್ಯವಾಗಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಬಾಲ ಕಾರ್ಮಿಕರಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಈ ನಿಟ್ಟಿನಲ್ಲಿ ಜಾಗ್ರತೆ ವಹಿಸಬೇಕು. ಸಂವಿಧಾನದಲ್ಲಿ ಮಕ್ಕಳ ರಕ್ಷಣೆಗಾಗಿ ಅನೇಕ ಕಾನೂನುಗಳಿದ್ದು, ಅವುಗಳನ್ನು ಅಧಿಕಾರಿಗಳು ಪಾಲಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಕಾವೇರಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆಯ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಮಾರಕವಾಗಿದ್ದು, ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ ಹಾಗೂ ಮಾನಸಿಕವಾಗಿ ಶೋಷಣೆಗೊಳಪಡಿಸುವುದರ ಜತೆಗೆ ಶಿಕ್ಷಣ ವಂಚಿತರನ್ನಾಗಿಸುತ್ತದೆ. ಅನಿಷ್ಠ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು. 

ಕಾರ್ಮಿಕ ಅಧಿಕಾರಿ ಬಿ.ಆರ್‌. ಕುಮಾರ್ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸ್ವತಂತ್ರ ಪೂರ್ವದಲ್ಲಿಯೇ ಕಾನೂನು ಜಾರಿಗೊಳಿಸಲಾಗಿದೆ. 1996ರ ಬಳಿಕ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದೆ ಬಾಲ ಕಾರ್ಮಿಕ ಮುಕ್ತ ದೇಶವನ್ನಾಗಿಸುವ ಗುರಿ ಹೊಂದಲಾಗಿದೆ ಎಂದರು

ಡಿಡಿಪಿಐ ಎನ್.ಎಚ್.ನಾಗೂರ್ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್. ಶೇಷಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು