ಬಾಲ್ಯ ವಿವಾಹದ ನಿಷೇಧಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ. ವನಿತಾ ಎನ್. ತೊರವಿ

7
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ

ಬಾಲ್ಯ ವಿವಾಹದ ನಿಷೇಧಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ. ವನಿತಾ ಎನ್. ತೊರವಿ

Published:
Updated:
Deccan Herald

ಉಡುಪಿ: ‘ದೇಶಕ್ಕೆ ಅಂಟಿರುವ ಬಾಲ್ಯ ವಿವಾಹದ ಪಿಡುಗನ್ನು ತಳಮಟ್ಟದಿಂದ ಹೋಗಲಾಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ಎನ್. ತೊರವಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಅಭಿಯೋಗ ಇಲಾಖೆ ಉಡುಪಿ, ಪೊಲೀಸ್‌ ಇಲಾಖೆ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಸಹಯೋಗದಲ್ಲಿ ಭಾನುವಾರ ‘ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯ್ದೆ 2016 ಮತ್ತು ಬಾಲ್ಯ ವಿವಾಹ ನಿಷೇಧ ಕರ್ನಾಟಕ ನಿಯಮಾವಳಿಗಳು 2014’ರ ಕುರಿತು ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ನಡೆದ ಒಂದು ದಿನದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ತಡೆಗೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಸಹ ಈ ಬಗ್ಗೆ ತರಬೇತಿ ನೀಡಲಾಗಿದೆ. ಬಾಲ್ಯ ವಿವಾಹ ನಿಷೇಧಿಸುವುದು ಕೇವಲ ಒಂದು ಇಲಾಖೆಯ ಕರ್ತವ್ಯ ಮಾತ್ರವಲ್ಲದೇ ಎಲ್ಲಾ ಇಲಾಖೆಗಳು ಮತ್ತು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ಹೇಳಿದರು.

ಬಾಲ್ಯ ವಿವಾಹ ನಿಯಂತ್ರಣಕ್ಕೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದಿಂದ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಸಿದ್ದು, ಸುಮಾರು 1,75,000 ಮಕ್ಕಳನ್ನು ಗುರುತಿಸಲಾಗಿದೆ. ಈ ಮಕ್ಕಳಲ್ಲಿ ಬಾಲ್ಯ ವಿವಾಹ ಸಹ ಶಾಲೆ ಬಿಡಲು ಪ್ರಮುಖ ಕಾರಣವಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲಿ ಮದುವೆಯಾದ ಹೆಣ್ಣು ಮಕ್ಕಳ ಮಾನಸಿಕ ಸ್ಥಿತಿಗತಿ ಹಾಗೂ ಆರೋಗ್ಯದ ಬಗ್ಗೆ ನಡೆಸಿದ ಅಧ್ಯಯನದಲ್ಲಿ ಬಾಲ್ಯ ವಿವಾಹವಾಗುವ ಹೆಣ್ಣು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ತಾಯಿ ಮತ್ತು ಶಿಶು ಮರಣ ಅಧಿಕವಾಗುತ್ತಿದೆ. ಸಂಸಾರದಲ್ಲಿ ಹೊಂದಾಣಿಕೆಯ ಸಮಸ್ಯೆ ಕಂಡುಬಂದು ಹೆಣ್ಣುಮಕ್ಕಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಲೈಂಗಿಕ ದೌರ್ಜನ್ಯ, ಗರ್ಭಪಾತ ಹಾಗೂ ಮಾರ‌ಣಾಂತಿಕ ಕಾಯಿಲೆಗಳಿಗೂ ಬಲಿಯಾಗುತ್ತಿರುವುದು ತಿಳಿದು ಬಂದಿದೆ ಎಂದರು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ವೆಂಕಟೇಶ ನಾಯ್ಕ್ ಮಾತನಾಡಿ, ಭಾರತದಲ್ಲಿ ಬಾಲ್ಯ ವಿವಾಹವು ಹಿಂದಿನಿಂದಲೂ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಯಾಗಿದ್ದು, ಪ್ರಸ್ತುತ ಸಹ ಆಚರಣೆಯಲ್ಲಿದೆ. ಬಡತನ, ಅನಕ್ಷರತೆ, ಆರ್ಥಿಕ ಸಮಸ್ಯೆಗಳು ಮತ್ತು ಮೂಢನಂಬಿಕೆಗಳು ಬಾಲ್ಯ ವಿವಾಹಕ್ಕೆ ಪ್ರಮುಖ ಕಾರಣಗಳಾಗಿದ್ದು, ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗುತ್ತಿದೆ. ಶಾಲೆ ಬಿಡುವ ಮಕ್ಕಳ ಸಂಖ್ಯೆ ಅಧಿಕವಾಗಿದ್ದು, ಅವರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್‌ಪಿ ಕುಮಾರ ಚಂದ್ರ, ಉಡುಪಿ ಜಿಲ್ಲಾ ಸರ್ಕಾರಿ ಅಭಿಯೋಜಕಿ ಶಾಂತಿ ಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಸ್ವಾಗತಿಸಿದರು. ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !