ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ‘ಜನಧ್ವನಿ’ ಪಾದಯಾತ್ರೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾಗಿ

108 ಕಿ.ಮೀ ಪಾದಯಾತ್ರೆ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾಗಿ
Last Updated 19 ಫೆಬ್ರುವರಿ 2021, 11:38 IST
ಅಕ್ಷರ ಗಾತ್ರ

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಫೆ.22ರಿಂದ 27ರವರೆಗೆ ಜನಧ್ವನಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ವಿನಯ್‌ ಕುಮಾರ್ ಸೊರಕೆ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 22ರಂದು ಬೆಳಿಗ್ಗೆ 11.30ಕ್ಕೆ ಕಾಪುವಿನ ಹೆಜಮಾಡಿ ಟೋಲ್‌ಗೇಟ್ ಬಳಿಯಿಂದ ಆರಂಭವಾಗುವ ಪಾದಯಾತ್ರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 27ರಂದು ಪಾದಯಾತ್ರೆ ಸಮಾಪನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಹೆಜಮಾಡಿಯಿಂದ ಆರಂಭವಾಗುವ ಪಾದಯಾತ್ರೆ, ಕಾಪು, ಹಿರಿಯಡ್ಕ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರುವರೆಗೂ ಸಾಗಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಸಮಾಪನಗೊಳ್ಳಲಿದೆ. ಪ್ರತಿದಿನ ಪಾದಯಾತ್ರೆಯಲ್ಲಿ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಸಾಥ್ ನೀಡಲಿದ್ದಾರೆ. ಒಟ್ಟು 108 ಕಿ.ಮೀ ಪಾದಯಾತ್ರೆ ಸಾಗಲಿದೆ ಎಂದು ಮಾಹಿತಿ ನೀಡಿದರು.

ಪಾದಯಾತ್ರೆಯ ಉದ್ದೇಶವನ್ನು ತಿಳಿಸಿದ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಹಾಗೂ ರೈತ ವಿರೋಧಿ ಕಾಯ್ದೆಗಳ ಜಾರಿ ವಿರುದ್ಧ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿ ವಿರೋಧಿಸಿ ಹಾಗೂ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಪಾದಯಾತ್ರೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

1974ರಲ್ಲಿ ಭೂಸುಧಾರಣಾ ಕಾಯ್ದೆ ಜಾರಿಗೆ ತಂದು ಬಡ ರೈತರ ಪರವಾದ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈಗ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ನಿಷ್ಕೃಿಯಗೊಳಿಸಲಾಗಿದೆ. ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಉಳ್ಳವರನ್ನು ಹೊಲದೊಡೆಯನನ್ನಾಗಿ ಮಾಡಲಾಗುತ್ತಿದೆ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಪೊರೆಟ್‌ ಕಂಪೆನಿಗಳಿಗೆ ಲಾಭ ಮಾಡಿಕೊಡಲಾಗಿದೆ. ದೇಶದ 7000 ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಹಂತಹಂತವಾಗಿ ಮುಚ್ಚುವ ಹುನ್ನಾರ ನಡೆಯುತ್ತಿದೆ. ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಬ್ಯಾರೆಲ್‌ಗೆ 50 ಡಾಲರ್‌ ಆಸುಪಾಸಿನಲ್ಲಿದ್ದರೂ ತೈಲ ದರ ಶತಕದ ಗಡಿಯತ್ತ ಏರಿಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ದಿನೇಶ್‌ ಪುತ್ರನ್‌, ನವೀನ್‌ಚಂದ್ರ ಸುವರ್ಣ, ದಿನಕರ ಹೆರೂರು, ಸದಾಶಿವ ದೇವಾಡಿಗ, ಶಂಕರ್ ಕುಂದರ್, ಮಂಜುನಾಥ್ ಭಂಡಾರಿ, ಬಿ.ನರಸಿಂಹಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಕುಶಲ ಶೆಟ್ಟಿ, ಹಬಿದ್ ಅಲಿ, ಗೀತಾ ವಾಗ್ಳೆ, ರೋಶನಿ ಒಲಿವರಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT