ಶುಕ್ರವಾರ, ಸೆಪ್ಟೆಂಬರ್ 17, 2021
22 °C
ಬಿ.ಆರ್.ಶೆಟ್ಟಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎದುರು ಕಾಂಗ್ರೆಸ್ ಪ್ರತಿಭಟನೆ

ಬಡವರಿಗೆ ಸಿಗದ ಚಿಕಿತ್ಸೆ, ಸರ್ಕಾರ ಮಧ್ಯೆ ಪ್ರವೇಶಿಸಲಿ: ವೆರೊನಿಕಾ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಹೆರಿಗೆಗೆ ಬರುವ ಬಡ ಮಹಿಳೆಯರನ್ನು ಚಿಕಿತ್ಸೆ ನೀಡದೆ ವಾಪಸ್ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ಶುಕ್ರವಾರ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು.

ಸುಸಜ್ಜಿತವಾಗಿರುವ ಖಾಸಗಿ ಹಾಗೂ ಸರ್ಕಾರಿ ಮಾದರಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ದುಸ್ಥಿತಿ ತಲುಪಿರುವುದು ವಿಷಾಧನೀಯ. ಸರ್ಕಾರ ಕೂಡಲೇ ಸಮಸ್ಯೆಗಳನ್ನು ಬಗೆಹರಿಸಿ, ಬಡವರಿಗೆ ಚಿಕಿತ್ಸೆ ಸಿಗವ ವ್ಯವಸ್ಥೆ ಮಾಡಬೇಕು ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೊನಿಕಾ ಕರ್ನೆಲಿಯೋ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹುದ್ದೆಗೇರಿದ್ದಾರೆ. ಆದರೂ ಆಸ್ಪತ್ರೆ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಕೂಡಲೇ ಆಸ್ಪತ್ರೆಯ ಸಿಬ್ಬಂದಿಗೆ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು. ಸರ್ಕಾರ ಆಸ್ಪತ್ರೆಯನ್ನು ನಡೆಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದರು.

ಕೋವಿಡ್‌ ಸಂಕಷ್ಟದ ಕಾಲದಲ್ಲಿ ಬಡವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಸಾಧ್ಯವಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಸಿಗದಿದ್ದರೆ ಬಡವರು ಎಲ್ಲಿಗೆ ಹೋಗಬೇಕು. ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹಾಕಿ ಬಡವರಿಗೆ ಚಿಕಿತ್ಸೆ ಸಿಗುವಂತೆ ಮಾಡಬೇಕು ಎಂದು ವೆರೊನಿಕಾ ಆಗ್ರಹಿಸಿದರು.

ಮುಖಂಡ ರಮೇಶ್ ಕಾಂಚನ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಇದುವರೆಗೂ 10,000ಕ್ಕೂ ಹೆಚ್ಚು ಹೆರಿಗೆಗಳು ನಡೆದಿವೆ. ರಾಜ್ಯಕ್ಕೆ ಮಾದರಿಯಾಗಿದ್ದ ಆಸ್ಪತ್ರೆ ಸಮಸ್ಯೆಯ ಸುಳಿಗೆ ಸಿಲುಕಿದೆ. ಪರಿಸ್ಥಿತಿಯ ಲಾಭ ಪಡೆದು ಆಸ್ಪತ್ರೆ ಮುಚ್ಚುವ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 300ಕ್ಕೂ ಹೆಚ್ಚು ಸಿಬ್ಬಂದಿಗೆ ವೇತನ ಬಿಡುಗಡೆ ಮಾಡಬೇಕು. ಆಸ್ಪತ್ರೆಯನ್ನು ಮುಚ್ಚಲು ಅವಕಾಶ ಕೊಡಬಾರದು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಅಮೃತ್ ಶೆಣೈ, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೆರಾ, ಸುಕೇಶ್ ಕುಂದರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು