ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ದುಷ್ಕೃತ್ಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಕ್ಕೆ ಪ್ರತಿಯಾಗಿ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ನಿಂದ ನಗರದ ಹುತಾತ್ಮರ ಸ್ಮಾರಕದ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅದಾನಿ ಕಂಪೆನಿಯಲ್ಲಿ ಹೂಡಿಕೆ ಮಾಡಬಾರದು ಎಂಬ ಎಚ್ಚರಿಕೆ ಇದ್ದರೂ ಕಡೆಗಣಿಸಿ ಸಾವಿರಾರು ಕೋಟಿ ಸರ್ಕಾರದ ಹಣವನ್ನು ಅದಾನಿ ಕಂಪೆನಿಯಲ್ಲಿ ಹೂಡಿಕೆ ಮಾಡಲಾಗಿದೆ.
ವಿಮಾನ ನಿಲ್ದಾಣ, ರೈಲು ನಿಲ್ದಾಣ, ಸ್ಟೇಡಿಯಂ, ಸಾರ್ವಜನಿಕ ಸಂಸ್ಥೆಗಳನ್ನು ಅದಾನಿ ಮಾಲೀಕತ್ವದ ಕಂಪೆನಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಲಾಕ್‌ಡೌನ್‌ನಲ್ಲಿ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದರೆ ಅದಾನಿಯ ಶ್ರೀಮಂತಿಕೆ ಮಾತ್ರ ಗಗನಕ್ಕೇರಿದೆ.
ಅದಾನಿ ಕಂಪೆನಿಯ ಷೇರು ಮೌಲ್ಯವನ್ನು ತಿರುಚಲಾಗಿದೆ ಎಂದು ಹಿಂಡೆನ್‌ಬರ್ಗ್ ಕಂಪೆನಿ ಆರೋಪದ ಬಗ್ಗೆ ತನಿಖೆ ಮಾಡುವ ಬದಲು ಕೇಂದ್ರ ಸರ್ಕಾರ ಮೌನಕ್ಕೆ ಜಾರಿದೆ. ಆದರೆ, ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹತೆಗೊಳ್ಳುತ್ತಿದ್ದಂತೆ ನ್ಯಾಯಾಲಯದ ಆದೇಶ ಪ್ರತಿ ತಲುಪುವ ಮುನ್ನವೇ ಕ್ರಮ ಜರುಗಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಅದಾನಿ ಹಾಗೂ ಪ್ರಧಾನಿ ಮೋದಿ ನಡುವಿನ ನಂಟು ಪ್ರಶ್ನಿಸಿದ್ದಕ್ಕೆ ರಾಹುಲ್ ಗಾಂಧಿ ವ್ಯಕ್ತಿತ್ವ ಹರಣ ಮಾಡಲಾಗುತ್ತಿದೆ. ವ್ಯವಸ್ಥಿತ ಷಡ್ಯಂತ್ರ ನಡೆಸಿ ಸಂಸತ್ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಅಮೃತ್ ಶೆಣೈ ದೂರಿದರು.
ರಾಹುಲ್ ಅವರನ್ನು ಅನರ್ಹಗೊಳಿಸಬಹುದೇ ವಿನಾ ಹೋರಾಟದಿಂದ ಹಿಂದೆ ಸರಿಯುವಂತೆ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೆ ಜಯ ಸಿಗುವುದು ನಿಶ್ಚಿತ. ದೇಶದ ಜನರಿಗೆ ಸತ್ಯದ ಅರಿವಾಗಲಿದೆ ಎಂದರು.
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು ಬಿಜೆಪಿಯ ಭಾವನಾತ್ಮಕ ವಿಚಾರಗಳಿಗೆ ಮತದಾರರು ಮನ್ನಣೆ ಕೊಡಬಾರದು, ಹಿಂದುತ್ವ, ಗೋಮಾತೆ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ವಿಫಲಗೊಳಿಸಿ.
ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಜನಾಭಿಪ್ರಾಯ ಮೂಡಿಸಿ ಎಂದು ಅಮೃತ್ ಶೆಣೈ ಕರೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ.ಎ.ಗಪೂರ್, ವೆರೊನಿಕಾ ಕರ್ನೆಲಿಯೋ, ಮುರಳಿ ಶೆಟ್ಟಿ, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕುಶಾಲ್ ಶೆಟ್ಟಿ, ರಮೇಶ್ ಕಾಂಚನ್, ಪ್ರಖ್ಯಾತ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಸಾಯಿರಾಜ್, ನಾಗೇಶ್ ಕುಮಾರ್ ಉದ್ಯಾವರ, ಸುರೇಶ್ ಶೆಟ್ಟಿ ಬನ್ನಂಜೆ, ಸೌರವ್ ಬಲ್ಲಾಳ್, ಸಂಜಯ ಆಚಾರ್ಯ, ಯತೀಶ್ ಕರ್ಕೆರಾ, ಇಸ್ಮಾಯಿಲ್ ಅತ್ರಾಡಿ, ಪ್ರಸಾದ್ ರಾಜ್ ಕಾಂಚನ್, ಕೀರ್ತಿ ಶೆಟ್ಟಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.