ಬುಧವಾರ, ಜನವರಿ 20, 2021
21 °C
ಜಿಲ್ಲೆಯಲ್ಲಿ ಲಸಿಕೆ ಹಾಕಲು ಸಂಪೂರ್ಣ ಸಿದ್ದತೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಮೊದಲ ಹಂತ: 19,562 ಮಂದಿಗೆ ಕೋವಿಡ್‌ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಲಸಿಕೆ ಹಾಕಬೇಕಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಶುಕ್ರವಾರ ಉಡುಪಿಯ ಕೂಸಮ್ಮ ಶಂಭುಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕೋವಿಡ್ ಲಸಿಕಾ ತಾಲೀಮು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಕಲಾಗುತ್ತದೆ. ಜಿಲ್ಲೆಯ 105 ಸರ್ಕಾರಿ ಆರೋಗ್ಯ ಸಂಸ್ಥೆಗಳ 5,688 ಸಿಬ್ಬಂದಿ ಹಾಗೂ 762 ಖಾಸಗಿ ಆರೋಗ್ಯ ಸಂಸ್ಥೆಗಳ 13,874 ಸಿಬ್ಬಂದಿ ಸೇರಿ 19,562 ಮಂದಿಗೆ ಲಸಿಕೆ ನೀಡಲಾಗುವುದು. ಎಲ್ಲರೂ ಲಸಿಕೆಗೆ ಆ್ಯಪ್‌ನಲ್ಲಿ ನೋಂದಣಿಮಾಡಿಸಿಕೊಂಡಿದ್ದು, ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಲಸಿಕೆ ನೀಡುವ ಸಿಬ್ಬಂದಿಗೆ ತರಬೇತಿ ಹಾಗೂ ಅಗತ್ಯ ಕೊಠಡಿಗಳ ನಿರ್ಮಾಣ ಮಾಡಲಾಗಿದೆ. ಲಸಿಕೆ ಸಂಗ್ರಹಗಾರದಿಂದ ಲಸಿಕೆಗಳ ಸಾಗಾಟ, ವಿತರಣೆಗೆ ಅಗತ್ಯ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ವಿವರ ನೀಡಿದರು.

ತಾಲೀಮು ಕಾರ್ಯಕ್ರಮವು ಲಸಿಕೆ ವಿತರಣೆ ಸಂದರ್ಭ ಎದುರಾಗಬಹುದಾದ ಸವಾಲುಗಳನ್ನು ಅರಿಯಲು ಹಾಗೂ ಸರಿಪಡಿಸಿಕೊಳ್ಳಲು ಸಹಕಾರಿಯಾಗಿದೆ. ಲಸಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರುವ ಅಪಪ್ರಚಾರ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಮುಕ್ತ ಮನಸ್ಸಿನಿಂದ ಲಸಿಕೆ ಸ್ವೀಕರಿಸಬೇಕು ಎಂದು ತಿಳಿಸಿದರು.

2ನೇ ಹಂತದ ಲಸಿಕೆ ಪಡೆಯುವವರ ನೋಂದಣಿ ಕಾರ್ಯಕ್ರಮ ಜನವರಿ ಅಂತ್ಯದೊಳಗೆ ಮುಗಿಸಲಾಗುವುದು. ಲಸಿಕೆ ವಿತರಣಾ ಕಾರ್ಯಕ್ರಮವನ್ನು ಚುನಾವಣೆಯ ಮಾದರಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಈ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡಾ ಮಾತನಾಡಿ, ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿಯ ಡಾ. ಟಿ.ಎಮ್.ಎ ಪೈ ಆಸ್ಪತೆ, ಆದರ್ಶ ಆಸ್ಪತ್ರೆ ಹಾಗೂ ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರ, ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರ, ಕಾರ್ಕಳ ಸಾರ್ವಜನಿಕ ಆಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಲಸಿಕಾ ಅಧಿಕಾರಿ, ಡಾ. ಎಂ.ಜಿ.ರಾಮ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಕೋವಿಡ್ ನೋಡೆಲ್‌ ಅಧಿಕಾರಿ ಡಾ. ಪ್ರಶಾಂತ ಭಟ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.