ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕೋವಿಡ್ ನಿಯಂತ್ರಣಕ್ಕೆ ಜ್ವರ ಸರ್ವೆ

ಸೋಂಕಿತರ ಪತ್ತೆ ಹಚ್ಚಿ ಪ್ರತ್ಯೇಕಿಸಿ ಚಿಕಿತ್ಸೆ ನೀಡಿ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್
Last Updated 14 ಸೆಪ್ಟೆಂಬರ್ 2021, 15:20 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ನಿಯಂತ್ರಿಸಲು ಸೋಂಕಿತರನ್ನು ಶೀಘ್ರ ಪತ್ತೆ ಹಚ್ಚಿ, ಪ್ರತ್ಯೇಕಿಸಿ, ಚಿಕಿತ್ಸೆ ನೀಡುವುದು ಅಗತ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಜ್ವರ ಸರ್ವೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸೆ.20 ರಿಂದ 22ರವರೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಭೇಟಿ ಕಾರ್ಯಕ್ರಮ ಆಯೋಜಿಸಬೇಕು. ಜ್ವರ ಇರುವ ಮಕ್ಕಳು, ವೃದ್ದರು ಹಾಗೂ ಸಾರ್ವಜನಿಕರ ಮಾಹಿತಿ ಸಂಗ್ರಹಿಸಬೇಕು. ಜ್ವರ ಇದ್ದವರಿಗೆ ಕೋವಿಡ್ ಪರೀಕ್ಷೆಗೊಳಪಡಿಸಿ, ಸೋಂಕು ಇದ್ದರೆ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಸಾರ್ವಜನಿಕರು ಸರ್ವೆ ಸಮಯದಲ್ಲಿ ಅಗತ್ಯ ಮಾಹಿತಿ ನೀಡಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.

ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು, ರೋಗ ಲಕ್ಷಣ ಇರುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಿ. ಹೋಂ ಐಸೋಲೇಶನ್‌ನಲ್ಲಿರುವವರು, ಹಾಗೂ ಅವರ ಪ್ರಾಥಮಿಕ ಸಂಪರ್ಕಿತರು ಕಂಟೈನ್‌ಮೆಂಟ್‌ ವಲಯದ ಹೊರಗೆ ತಿರುಗಾಡದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಾಸಿಟಿವ್ ವ್ಯಕ್ತಿಯ ಸಂಪೂರ್ಣ ವಿವರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಂಗ್ರಹಿಸಬೇಕು. ಪರೀಕ್ಷಿಸಿದ ದಿನಾಂಕ, ರೋಗದ ಲಕ್ಷಣ, ಆರೋಗ್ಯದ ಸ್ಥಿತಿಗತಿ, ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಗೆ ದಾಖಲಿಸಿದ ವಿವರ, ಗುಣಮುಖರಾದ ದಿನಾಂಕ ಸೇರಿದಂತೆ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಬೇಕು ಎಂದರು.

ಪ್ರತಿ ಗ್ರಾಮ ಹಾಗೂ ವಾರ್ಡ್‌ಗಳಲ್ಲಿ ಲಸಿಕೆ ಪಡೆಯಲು ಬಾಕಿ ಇರುವವರು ಮಾಹಿತಿ ಸಂಗ್ರಹಿಸಿ, ಲಸಿಕೆ ಹಾಕಲು ಯೋಜನೆ ರೂಪಿಸಿ. ಲಸಿಕಾ ಅಭಿಯಾನಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ವಸಹಾಯ ಸಂಘಗಳ ನೆರವು ಪಡೆದು ಗುರಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿದಿನ ವರದಿಯಾಗುವ ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಮಾಹಿತಿ ಸಂಗ್ರಹಿಸಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಿ. ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ. ಔಷಧ ಅಂಗಡಿಗಳಿಂದ ಕೋವಿಡ್ ಲಕ್ಷಣಗಳಿಗೆ ಔಷಧ ಖರೀದಿಸುವವರ ಮಾಹಿತಿ ಸಂಗ್ರಹಿಸಿ, ಅವರಿಗೂ ಕೋವಿಡ್‌ ಪರೀಕ್ಷೆ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಕೋವಿಡ್‌ ಸಂಬಂಧಿ ದೂರುಗಳ ಪರಿಹಾರಕ್ಕೆ ಹೆಲ್ಪ್‌ಲೈನ್‌ ಸಂಖ್ಯೆಯ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕು. ಲಸಿಕಾ ಅಭಿಯಾನಕ್ಕೆ, ಹೋಂ ಐಸೋಲೇಶನ್‌ ಪ್ರಕ್ರಿಯೆ ಕಂಟೈನ್ ಮೆಂಟ್ ವಲಯಗಳನ್ನು ರಚಿಸುವಾಗ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್‌ಗಳ ನೆರವು ಪಡೆಯುವಂತೆ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT