ಮಂಗಳವಾರ, ಏಪ್ರಿಲ್ 13, 2021
32 °C
ಪಿಯುಸಿ ಫಲಿತಾಂಶ ಸುಧಾರಣಾ ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್

ದ್ವಿತೀಯ ಪಿಯು ಪರೀಕ್ಷೆ: ಉಡುಪಿ ಅಗ್ರಸ್ಥಾನಿಯಾಗಲಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಸದಾ ಮುಂಚೂಣಿಯಲ್ಲಿಬೇಕು. ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಸ್ಥಾನಿಯಾಗಬೇಕು. ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉತ್ತಮ ಫಲಿತಾಂಶಕ್ಕೆ ಹೆಚ್ಚಿನ ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ನಗರದ ಎಂಜಿಎಂ ಪದವಿಪೂರ್ವ ಕಾಲೇಜು, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಎಂಜಿಎಂ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು.

ಶಿಕ್ಷಕರ ಅವಿರತ ಶ್ರಮದಿಂದ ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿದೆ. ಉಪನ್ಯಾಸಕರ ಉತ್ತಮ ಬೋಧನೆಯಿಂದ ಉತ್ತಮ ಫಲಿತಾಂಶ ಸಿಗುತ್ತಿದೆ. ಕಾಲೇಜು ಪ್ರಾಂಶುಪಾಲರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಹಿನ್ನೆಲೆ ಅರಿತು ಬೋಧನೆ ಮಾಡಬೇಕು. ಕಡಿಮೆ ಫಲಿತಾಂಶ ಬರುವ ಕಾಲೇಜುಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಪರೀಕ್ಷೆಗೆ ಎರಡು ತಿಂಗಳು ಇರುವುದರಿಂದ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಬೇಕು ಎಂದು ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಶೇ 90ರಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಿದ್ದು ಶೇ 10ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗೈರಾದ ವಿದ್ಯಾರ್ಥಿಗಳ ಸಮಸ್ಯೆಯನ್ನು ಗಮನ ಹರಿಸಿ ಪ್ರೋತ್ಸಾಹ ಹಾಗೂ ನೆರವು ನೀಡಬೇಕು. ಕಾಲೇಜಿಗೆ ಬರದ ವಿದ್ಯಾರ್ಥಿಗಳ ಮನೆಗೆ ಹೋಗಿ ಪೋಷಕರಿಗೆ ಮಾಹಿತಿ ನೀಡಬೇಕು. ಪಿಯುಸಿ ಹಂತ ವಿದ್ಯಾರ್ಥಿಗಳಿಗೆ ಬಹಳ ಮುಖ್ಯ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಶಿಕ್ಷಕರು ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಭಗವಂತ ಕಟ್ಟಿಮನಿ ಮಾತನಾಡಿ, ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಸುಧಾರಣೆಯಾಗಬೇಕು. ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ 105 ಕಾಲೇಜುಗಳಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರುವ ಬಗ್ಗೆ ಗಮನಹರಿಸಬೇಕು ಎಂದರು.

ಉಡುಪಿ ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಮಾಧವ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌ವಿಎಸ್‌ ಕಾಲೇಜಿನ ಪ್ರಾಂಶುಪಾಲ ದಯಾನಂದ ಪೈ, ಪ್ರಾಂಶುಪಾಲರ ಸಂಘದ ಖಜಾಂಚಿ ರಮೇಶ್ ಹಾಗೂ ವಿವಿಧ ಕಾಲೇಜು ಪ್ರಾಂಶುಪಾಲರು ಉಪಸ್ಥಿತರಿದ್ಧರು.

ಸಭೆಯಲ್ಲಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಮಾಲತಿದೇವಿ ಸ್ವಾಗತಿಸಿದರು. ಎಸ್‌ವಿಎಚ್ ಪದವಿ ಕಾಲೇಜಿನ ಪ್ರಾಂಶುಪಾಲ ಪುಂಡರಿಕಾಕ್ಷ ಕೊಡಂಚ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು