ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕೇರಳದಿಂದ ಬಂದವರಿಗೆ 7 ದಿನ ಕ್ವಾರಂಟೈನ್‌

ಜಿಲ್ಲೆಯಲ್ಲಿ ಸೆ.6ರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿ: ಜಿಲ್ಲಾಧಿಕಾರಿ ಕೂರ್ಮಾರಾವ್
Last Updated 3 ಸೆಪ್ಟೆಂಬರ್ 2021, 14:29 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಸೆ.3ರಿಂದ (ಶುಕ್ರವಾರ) ರಾತ್ರಿ 9 ರಿಂದ ಸೆ.6ರ ಬೆಳಿಗ್ಗೆ 5ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಕಡಿಮೆ ಇದ್ದರೂ ನೆರೆಯ ಕೇರಳದಲ್ಲಿ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಹಾಗೂ ಕೇರಳದಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಾಗಿ ಜಿಲ್ಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಕೇರಳ ಹಾಗೂ ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವವರು 72 ಗಂಟೆಗಳ ಮುಂಚಿತ ಕೋವಿಡ್ ನೆಗೆಟಿವ್ ವರದಿ ಹಾಜರುಪಡಿಸಬೇಕು. ಕೇರಳದಿಂದ ಬಂದವರು ಮಾತ್ರ 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಬೇಕು. ಬಳಿಕ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ಪ್ರಸರಣೆ ತಡೆಗೆ ಈ ಕ್ರಮ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.

ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗೆ ಹಾಗೂ ಸಾರ್ವಜನಿಕ ಪಡಿತರ ವಿತರಣೆಗೆ ಬೆಳಿಗ್ಗೆ 5 ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಇದೆ. ಇದೇ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ಕೊಂಡೊಯ್ಯಲು ಮಾತ್ರ ಅನುಮತಿ ಇದೆ. ಹಾಲಿನ ಬೂತ್‌ಗಳು ರಾತ್ರಿ 8ರವರೆಗೆ ಕಾರ್ಯನಿರ್ವಹಿಸಬಹುದು ಎಂದರು.

ಎಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಹಾಗೂ ಕೋವಿಡ್ ತುರ್ತು ಸೇವೆಯಲ್ಲಿರುವವರಿಗೆ ಕಾರ್ಯ ನಿರ್ವಹಿಸಲು ಅವಕಾಶವಿದೆ. ಈ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಗುರುತಿನ ಚೀಟಿಯೊಂದಿಗೆ ಮುಕ್ತ ಸಂಚಾರಕ್ಕೆ ಅನುಮತಿ ಇದೆ ಎಂದರು.

ರೋಗಿಗಳು ಹಾಗೂ ಅವರ ಪರಿಚಾರಕರಿಗೆ, ಕೋವಿಡ್ ಲಸಿಕೆ ಹಾಕಿಸಿಕೊಳ್ಳುವವರು ಸಂಚರಿಸಲು ಅಡ್ಡಿ ಇಲ್ಲ. ದಿನಸಿ ಆಹಾರ, ಹಣ್ಣು ತರಕಾರಿ, ಮಾಂಸ, ಮೀನು ಹಾಗೂ ಪ್ರಾಣಿಗಳ ಮೇವನ್ನು ಮಾರಾಟ ಮಾಡುವವರು ಬೆಳಿಗ್ಗೆ 5ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅಂಗಡಿಗಳನ್ನು ತೆರೆಯಬಹುದು. ಹೋಂ ಡೆಲಿವರಿಗೂ ಅವಕಾಶವಿದೆ.

ರೆಸ್ಟೊರೆಂಟ್‌ಗಳು, ಹೋಟೆಲ್‌ಗಳಲ್ಲಿ ಗ್ರಾಹಕರು ಕುಳಿತು ತಿನ್ನಲು ಅವಕಾಶವಿಲ್ಲ. ಬದಲಾಗಿ, ಪಾರ್ಸೆಲ್ ತೆಗೆದುಕೊಂಡು ಹೋಗಬಹುದು. ಮದುವೆ ಮತ್ತು ಕೌಟುಂಬಿಕ ಸಮಾರಂಭಗಳಲ್ಲಿ ಗರಿಷ್ಠ 400 ಜನ ಮೀರುವಂತಿಲ್ಲ. ಸಮಾರಂಭ ಆಯೋಜಿಸಸಲು ಸಂಬಂಧಪಟ್ಟ ತಹಶೀಲ್ದಾರ್‌ ಅವರಿಂದ ಅನುಮತಿ ಪಡೆಯುವುದು ಅಗತ್ಯ. ಎಲ್ಲ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳಲ್ಲಿ ಗುಂಪುಗೂಡುವಿಕೆಗೆ ಅವಕಾಶ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಎಸ್‌ಪಿ ಎನ್‌ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
‘ಮುನ್ನೆಚ್ಚರಿಕಾ ಕ್ರಮವಾಗಿ ವೀಕೆಂಡ್ ಕರ್ಫ್ಯೂ’

ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ಚುರುಕಾಗಿದ್ದು, ಶೇ 78ರಷ್ಟು ಮಂದಿಗೆ ಮೊದಲ ಡೋಸ್ ಲಸಿಕೆ ಹಾಕಲಾಗಿದೆ. ಕಾವ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಶೇ 100ರಷ್ಟು ಲಸಿಕಾಕರಣವಾಗಿದೆ. ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗಿದ್ದು ಕಳೆದ ಒಂದು ವಾರದಲ್ಲಿ ಪ್ರತಿದಿನ 6,967 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಲಸಿಕೆ ನೀಡುವಲ್ಲಿಯೂ ಜಿಲ್ಲೆ ಮುಂಚೂಣಿಯಲ್ಲಿದೆ. ಆದರೆ, ಕೇರಳದೊಂದಿಗೆ ಉಡುಪಿ ಹೆಚ್ಚು ನಂಟು ಹೊದಿರುವ ಕಾರಣದಿಂದ ವಾರಾಂತ್ಯ ಕರ್ಫ್ಯೂ ಜಾರಿ ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.

‘ಗುಂಪು ಗೂಡುವಿಕೆ ತಡೆಗೆ ಕರ್ಫ್ಯೂ ಜಾರಿ‘

ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ವಾರಾಂತ್ಯದ ಸಂದರ್ಭ ಹೆಚ್ಚು ಜನಜಂಗುಳಿ ಇರುತ್ತದೆ. ಇದರಿಂದ ಸೋಂಕು ಸುಲಭವಾಗಿ ಸಮುದಾಯಕ್ಕೆ ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡುವಿಕೆ ತಡೆಯಲು ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್ ಹೇಳಿದರು.
‘ಹೆಚ್ಚುವರಿ 6 ಚೆಕ್‌ಪೋಸ್ಟ್ ನಿರ್ಮಾಣ’

ಕೇರಳ ಹಾಗೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರ ತಪಾಸಣೆಗೆ ಜಿಲ್ಲೆಯಲ್ಲಿ ಈಗಾಗಲೇ 8 ಚೆಕ್‌ಪೋಸ್ಟ್‌ ರಚಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಸಂದರ್ಭ ಹೆಚ್ಚುವರಿ 6 ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದ, ಕೋವಿಡ್ ಮಾರ್ಗಸೂಚಿ ಪಾಲಿಸದವರಿಗೆ ದಂಡ ಹಾಕಲಾಗುತ್ತಿದೆ ಎಂದು ಎಸ್‌ಪಿ ಎನ್‌.ವಿಷ್ಣುವರ್ಧನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT