ಮಂಗಳವಾರ, ಆಗಸ್ಟ್ 16, 2022
30 °C
ಚಿಕಿತ್ಸೆಗೆ ಬರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಜಿಲ್ಲಾಧಿಕಾರಿ ಜಗದೀಶ್‌

ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದರೆ ₹ 50,000 ಬಹುಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಶೀತ, ಕೆಮ್ಮು, ಜ್ವರ ಹಾಗೂ ಐಎಲ್‌ಐ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ತಪ್ಪಿದಲ್ಲಿ ಖಾಸಗಿ ಆಸ್ಪತ್ರೆಗಳ ನೋಂದಣಿ ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದರು.

ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಾ ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈಚೆಗೆ ಸಾರ್ವಜನಿಕರು ಕೋವಿಡ್ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪರಿಣಾಮ ಎರಡನೇ ಅಲೆ ಪ್ರಾರಂಭ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ತಪ್ಪದೆ ಕೋವಿಡ್ ಪರೀಕ್ಷೆ ಮಾಡಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿ ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯ. ಮಾಡಿಸದೆ ಚಿಕಿತ್ಸೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಂಶ ಪಾರಂಪರ್ಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲೋಪಥಿ ಮೆಡಿಸನ್ ನೀಡುವುದು ಕೂಡ ಅಪರಾಧ. ಇಂತಹ ಪ್ರಕರಣಗಳು ಕಂಡುಬಂದರೆ ಕಾನೂನು ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಪ್ರಾಧಿಕಾರಕ್ಕೆ ಅಗತ್ಯ ದಾಖಲೆಗಳೊಂದಿಗೆ ಕ್ಲಿನಿಕ್ ಅಥವಾ ನರ್ಸಿಂಗ್ ಹೋಂಗಳನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ನಿಯಮಾನುಸಾರ ಶೀಘ್ರ ಪರವಾನಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಬಯೋ ಮೆಡಿಕಲ್ ತ್ಯಾಜ್ಯಗಳನ್ನು 48 ಗಂಟೆಗಳ ಒಳಗೆ ಶೇಖರಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಶೇಖರಣೆಯ ಬಗ್ಗೆ ಬಾರ್‌ಕೋಡ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗಬೇಕು. ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು. ಚಿಕಿತ್ಸೆ ನೀಡುವಾಗ ನಿರ್ಲಕ್ಷದಿಂದ ರೋಗಿಗಳಿಗೆ ತೊಂದರೆಯಾದ ಬಗ್ಗೆ ದೂರುಗಳು ಬಂದರೆ ವಿಳಂಬ ಮಾಡದೆ ಇತ್ಯರ್ಥ ಪಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಡಿಎಚ್‌ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ನಣ್ಯ ಶೇರಿಗಾರ್ ಇದ್ದರು.

₹ 50,000 ಬಹುಮಾನ
ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ನೀಡಿದವರಿಗೆ ₹ 50,000 ಬಹುಮಾನ ನೀಡಲಾಗುವುದು. ಜಿಲ್ಲೆಯಲ್ಲಿ ಗಂಡು ಹಾಗೂ ಹೆಣ್ಣು ಅನುಪಾತದಲ್ಲಿ ಅಸಮತೋಲನ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ 1,000 ಗಂಡು ಮಕ್ಕಳಿಗೆ, 956 ಹೆಣ್ಣು ಮಕ್ಕಳಿದ್ದಾರೆ. ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವುದು ಸಾಬೀತಾದರೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಸ್ಕ್ಯಾನಿಂಗ್ ಸೆಂಟರ್‌ಗಳು ಸರ್ಕಾರದ ನಿಯಮಾನುಸಾರ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದ ಸಮಿತಿಗಳು ಆಗಾಗ, ಅನಿರೀಕ್ಷಿತ ಭೇಟಿನೀಡಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು