ಸೋಮವಾರ, ಆಗಸ್ಟ್ 8, 2022
21 °C
ಸಕಾಲದಲ್ಲಿ ಸೇವೆ ಒದಗಿಸಿ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ಬಿ.ಎಸ್‌.ಪಾಟೀಲ್ ಸೂಚನೆ

ಸಾರ್ವಜನಿಕರ ಅರ್ಜಿ ವಿಲೇವಾರಿಯಲ್ಲಿ ವಿಳಂಬ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿ ವಿಳಂಬವಾಗಬಾರದು, ಸೂಕ್ತ ಕಾರಣಗಳಿಲ್ಲದೆ ಅರ್ಜಿ ತಿರಸ್ಕಾರ ಮಾಡಬಾರದು, ಅರ್ಹರಿಗೆ ಸಿಗಬೇಕಾದ ಸೌಲಭ್ಯಗಳು ಸಿಗಬೇಕು. ಆಡಳಿತದಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆಗೆ ಹೆಚ್ಚು ಒತ್ತು ನೀಡಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್ ಸೂಚಿಸಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಪ್ರಕರಣಗಳ ಪರಿಶೀಲನೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು. ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಒತ್ತು ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರನ್ನು ಪ್ರೋತ್ಸಾಹಿಸಿ, ಕರ್ತವ್ಯದಲ್ಲಿ ದಕ್ಷತೆಗೆ ಆದ್ಯತೆ ಕೊಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಉಪ ಲೋಕಾಯುಕ್ತರು ನಿರ್ದೇಶನ ನೀಡಿದರು.

ಕೆರೆ, ರಸ್ತೆಗಳ ಅತಿಕ್ರಮಣ ತೆರವುಗೊಳಿಸಿ, ಲೋಕಾಯುಕ್ತ ಕಚೇರಿಗೆ ವಿವರವಾದ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸಲ್ಲಿಸಿ. ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ಹಾಗೂ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗ ಷರತ್ತುಗಳ ಪಾಲನೆಯ ಕುರಿತು ಕಟ್ಟಡ ನಿರ್ಮಾಣ ಹಂತದಲ್ಲಿಯೇ ಪರಿಶೀಲಿಸಿ ನಿಯಮ ಉಲ್ಲಂಘಿಸಿದ್ದರೆ ನೋಟಿಸ್ ನೀಡಬೇಕು.

ಕಟ್ಟಡ ಮುಕ್ತಾಯವಾದ ಬಳಿಕ ಉಲ್ಲಂಘನೆಯ ನೋಟಿಸ್ ನೀಡಿದರೆ ಪ್ರಕರಣಗಳ ವಿಲೇವಾರಿ ತ್ವರಿತವಾಗಿ ಮಾಡಲು ಸಾಧ್ಯವಿಲ್ಲ. ಭೂ ಸ್ವಾಧೀನ ಸಂದರ್ಭದಲ್ಲಿ ನಿಯಮಗಳ ಪಾಲನೆ ಅಗತ್ಯ. ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯಿತಿಗಳ ಪಿಡಿಒ, ಕಾರ್ಯದರ್ಶಿಗಳ ವಿರುದ್ದ ಆಡಿಟ್ ಅಕ್ಷೇಪಣೆ ಹಾಗೂ ದೂರುಗಳು ದಾಖಲಾಗಿದ್ದು, ಆಡಿಟ್ ವರದಿಯಲ್ಲಿ ನಷ್ಟದ ಬಾಬ್ತು ವಸೂಲಿಗೆ ಸೂಚನೆ ನೀಡಿದ್ದರೂ ವಸೂಲಾತಿ ನಡೆಯುತ್ತಿಲ್ಲ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಉಪ ಲೋಕಾಯುಕ್ತರು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿ ಶನಿವಾರ, ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ಆಡಿಟ್ ಆಕ್ಷೇಪಣೆಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಪಂಚಾಯಿತಿಗಳ ಮೂಲಕ ವಿಚಾರಣೆ ನಡೆಸಲಾಗುತ್ತಿದ್ದು, ಸಂಬಂಧಪಟ್ಟ ಪಿಡಿಒ ಮತ್ತು ಕಾರ್ಯದರ್ಶಿಗಳಿಂದ ನಷ್ಟದ ಬಾಬ್ತು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್ ತಿಳಿಸಿದರು.

ನೆರೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ವಿತರಿಸುವಾಗ ಅವ್ಯವಹಾರಗಳಿಗೆ ಆಸ್ಪದ ನೀಡಬೇಡಿ. ಹಾನಿಯಾದ ಕಿಂಡಿ ಅಣೆಕಟ್ಟುಗಳ ಛಾಯಾಚಿತ್ರ ಸಹಿತ ವಿವರ, ಅಂದಾಜು ವೆಚ್ಚ ಮತ್ತು ದುರಸ್ತಿಗೆ ಬಿಡುಗಡೆಯಾದ ಅನುದಾನ, ಕೈಗೊಂಡ ದುರಸ್ತಿ ಕಾರ್ಯಗಳ ಕುರಿತು ಸಂಪೂರ್ಣ ವಿವರಗಳನ್ನು ಲೋಕಾಯುಕ್ತ ಕಚೇರಿಗೆ ಸಲ್ಲಿಸಬೇಕು ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಸೇವೆಗಳನ್ನು ನೀಡುವಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವುದು ಹಾಗೂ ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು, ಪೌತಿ ಖಾತೆ ಅದಾಲತ್, ಮನೆ ಬಾಗಿಲಿಗೆ ತೆರಳಿ 4,000 ಮಂದಿಗೆ ಪಿಂಚಣಿ ಸೌಲಭ್ಯ ಒದಗಿಸಿರುವ ಬಗ್ಗೆ  ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಎಲ್ಲ ಕಚೇರಿಗಳಲ್ಲಿ ಕಡತಗಳನ್ನು ಸೂಕ್ತವಾಗಿ ಸಿದ್ಧಪಡಿಸಿಕೊಂಡಿರಬೇಕು. ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದ ಸಂದರ್ಭ ಕಾಲಮಿತಿಯಲ್ಲಿ ವರದಿ ಪಡೆದು ಪ್ರಕರಣ ಇತ್ಯರ್ಥಪಡಿಸಲು ಇದರಿಂದ ನೆರವಾಗಲಿದೆ ಎಂದು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಎಸ್‌ಪಿ ವಿಷ್ಣುವರ್ಧನ್‌, ಮಂಗಳೂರು ಲೋಕಾಯುಕ್ತ ಎಸ್‌ಪಿ ಕುಮಾರಸ್ವಾಮಿ, ಡಿಎಫ್‌ಒ ಆಶೀಶ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.