ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಂತರ ಸೋಂಕಿನ ಬಗ್ಗೆ ಎಚ್ಚರ ಇರಲಿ

ಕೇರಳ, ಮುಂಬೈನಿಂದ ಬಂದವರಿಗೆ ಕೋವಿಡ್ ವರದಿ ಪರಿಶೀಲನೆ ಕಡ್ಡಾಯಗೊಳಿಸಿ: ಶೋಭಾ ಕರಂದ್ಲಾಜೆ
Last Updated 22 ಫೆಬ್ರುವರಿ 2021, 14:57 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ರೂಪಾಂತರ ಸೋಂಕು ಹರಡದಂತೆ ಎಚ್ಚರ ವಹಿಸಬೇಕು, ಕೇರಳ ಹಾಗೂ ಮುಂಬೈಯಿಂದ ಜಿಲ್ಲೆಗೆ ಬರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ವರದಿ ಪರಿಶೀಲನೆ ಕಡ್ಡಾಯಗೊಳಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಅವರು, ರೂಪಾಂತರ ವೈರಸ್ ಹರಡುವಿಕೆ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಹಿಂದೆ ಕೋವಿಡ್ ಚಿಕಿತ್ಸೆಗೆ ಗುರುತಿಸಲಾಗಿದ್ದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯ ಉಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಿ ಎಂದರು.

ಜಿಲ್ಲೆಯಲ್ಲಿ ಇದುವರೆಗೆ 3,59,039 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, 3,35,501 ನೆಗೆಟಿವ್ ಬಂದಿದೆ. 23,538 ಮಂದಿಗೆ ಪಾಸಿಟಿವ್ ಬಂದಿದ್ದು, 189 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಮಾಣ ಹೆಚ್ಚಿದ್ದರೂ ಜಿಲ್ಲೆಯಲ್ಲಿ ಮರಣ ಪ್ರಮಾಣ ರಾಜ್ಯದಲ್ಲೇ ಅತಿ ಕಡಿಮೆ ಇದೆ. ಇದಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಯ ಶ್ರಮ ಕಾರಣ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 51,000 ಮಾನವ ದಿನಗಳ ಸೃಜನೆಯ ಗುರಿಗೆ 51,200 ಸಾಧನೆ ಮಾಡಿರುವುದು ಶ್ಲಾಘನೀಯ. ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ನರೇಗಾದಲ್ಲಿ ಕೈಗೊಳ್ಳಬಹುದಾದ ಕಾರ್ಯಗಳ ಕುರಿತು ವಿವರವಾದ ಮಾಹಿತಿ ನೀಡಿ. ಕೆರೆ ಹಾಗೂ ತೋಡುಗಳನ್ನು ಹೊಳೆತ್ತಲು ಕ್ರಮ ಕೈಗೊಳ್ಳಿ ಎಂದರು.

ಜಿಲ್ಲೆಯ ರಾಷ್ಟ್ರೀಕತ ಬ್ಯಾಂಕ್ ಗಳಲ್ಲಿ ಸ್ವಸಹಾಯ ಸಂಘಗಳಿಗೆ ಸಾಲ ನೀಡುತ್ತಿಲ್ಲ ಹಾಗೂ ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಬ್ಯಾಂಕ್‌ಗಳಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ನೀಡಿರುವ ಸಾಲದ ವಿವರಗಳನ್ನು ನೀಡಬೇಕು ಎಂದು ಲೀಡ್‌ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

ರಸ್ತೆ ಮತ್ತು ಕುಡಿಯುವ ನೀರು ಯೋಜನೆಗಳನ್ನು ಮಳೆಗಾಲದ ಮುನ್ನ ಮುಕ್ತಾಯಗೊಳಿಸಬೇಕು. ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ನೀಡಬೇಕಾದ ಗ್ರಾಮಗಳಲ್ಲಿ ಶಾಶ್ವತ ಕುಡಿಯುವ ನೀರಿನ ಕಾಮಗಾರಿ ನಡೆಸಿ ಎಂದು ಸೂಚಿಸಿದರು.

ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಸಿಇಒ ಡಾ.ನವೀನ್ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT