ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯರ ಅನುಭವ ಸಮಾಜಕ್ಕೆ ದಾರಿದೀಪ

ಹಿರಿಯ ಜೀವಗಳಿಗೆ ನೆಮ್ಮದಿ, ಸಾಂತ್ವನ ಕೊಡಿ: ಶಾಸಕ ರಘುಪತಿ ಭಟ್
Last Updated 1 ಅಕ್ಟೋಬರ್ 2022, 14:07 IST
ಅಕ್ಷರ ಗಾತ್ರ

ಉಡುಪಿ: ಹಿರಿಯ ನಾಗರಿಕರ ಜೀವನದ ಅನುಭವಗಳ ಪಾಠ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯಗಳನ್ನು ಮಾಡುವ ಮುನ್ನ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ರೂಢಿಯಲ್ಲಿದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರಿಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಹಿರಿಯ ನಾಗರಿಕರು ಸಲಹೆ, ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಮನವಿ ಮಾಡಿದರು.

ಹಿರಿಯ ನಾಗರಿಕರನ್ನು ಗೌರವಿಸುವ ಮನಸ್ಥಿತಿ ಎಲ್ಲರಲ್ಲೂ ಮೂಡಬೇಕಿದೆ. ಹಿರಿಯ ನಾಗರಿಕರಿಗೆ ಮುಪ್ಪಿನಲ್ಲಿ ಸಾಂತ್ವನ ಹಾಗೂ ನೆಮ್ಮದಿಯ ಜೀವನ ಅಗತ್ಯವಿದ್ದು ಮಕ್ಕಳು ಹಾಗೂ ಸಮಾಜ ಇವುಗಳನ್ನು ನೀಡಬೇಕು ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಮಸ್ಯೆಗಳ ಬಗ್ಗೆ ನಿಯಮಿತವಾಗಿ ಸಭೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸಹಾಯವಾಣಿಗೆ ಬರುವ ದೂರುಗಳ ಬಗ್ಗೆ ತಕ್ಷಣ ಸ್ಪಂದಿಸಿ ಬಗೆಹರಿಸಲಾಗುತ್ತಿದೆ. ನೆರವಿನ ಅಗತ್ಯವಿದ್ದವರು ಉಚಿತ ಸಹಾಯವಾಣಿ ಸಂಖ್ಯೆ 1090ಕ್ಕೆ ಕರೆ ಮಾಡಬಹುದು ಎಂದರು.

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್‌ ಲಿಮಿಟೆಡ್ ಅಧ್ಯಕ್ಷ ಕೆ.ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ, ವಕೀಲರ ಸಂಘದ ಅಧ್ಯಕ್ಷ ನಾಗರಾಜ್, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾವ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ರತ್ನ, ಹಿರಿಯ ನಾಗರಿಕ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿದರು. ರವೀಂದ್ರ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಹೆಗಡೆ ವಂದಿಸಿದರು.

ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT