ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯವಸ್ಥಿತ ಪರ್ಯಾಯೋತ್ಸವ: ಮೂಲಸೌಕರ್ಯಕ್ಕೆ ಒತ್ತು ನೀಡಿ- ಸಚಿವ ಸುನಿಲ್ ಕುಮಾರ್

ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ
Last Updated 2 ಜನವರಿ 2022, 13:43 IST
ಅಕ್ಷರ ಗಾತ್ರ

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು, ಪರ್ಯಾಯ ಅತ್ಯಂತ ಸುವ್ಯವಸ್ಥಿತವಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಮಠದ ಪರ್ಯಾಯೋತ್ಸವಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ, ವಾಹನಗಳ ಸುಗಮ ಸಂಚಾರ, ವಾಹನ ನಿಲುಗಡೆ ಸೇರಿದಂತೆ ಮತ್ತಿತರ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಕ್ಕೆ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿ ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳನ್ನು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಬೇಕು. ಹೆಚ್ಚುವರಿ ಶೌಚಾಲಯಗಳ ನಿರ್ಮಾಣದ ಜತೆಗೆ, ನೀರಿನ ವ್ಯವಸ್ಥೆ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ರಸ್ತೆ ದುರಸ್ತಿ ಕಾರ್ಯವನ್ನು ಜ.10ರೊಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ವಾಹನಗಳ ಸುಗಮ ಸಂಚಾರ, ನಿಲುಗಡೆಗೆ ಸೂಕ್ತ ಸ್ಥಳಗಳನ್ನು ಗುರುತಿಸಿ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಬೇಕು. ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಎಸ್‌ಪಿಗೆ ವಿಷ್ಣುವರ್ಧನ್‌ ಅವರಿಗೆ ಸಚಿವರು ಸೂಚಿಸಿದರು.

ಪರ್ಯಾಯ ಮೆರವಣಿಗೆಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಟ್ಯಾಬ್ಲೋಗಳು ಇರಬೇಕು. ರಾಜ್ಯ ಹಾಗೂ ಹೊರ ರಾಜ್ಯದ ಸಾಂಸ್ಕೃತಿಕ ಕಲಾತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಮಾಸ್ಕ್ ಧರಿಸುವುದರೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಭಕ್ತರ ಸಂಚಾರಕ್ಕೆ ಸಾರಿಗೆ ವಾಹನಗಳನ್ನು ವ್ಯವಸ್ಥೆ ಮಾಡಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ನಿಗದಿತ ಸ್ಥಳಗಳಲ್ಲಿ ಕೋವಿಡ್ ಲಸಿಕೆಗಳನ್ನು ನೀಡಲು ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ಕೋವಿಡ್ ಪರೀಕ್ಷೆ, ತಪಾಸಣೆ ನಡೆಯಬೇಕು. ಅಗ್ನಿ ಅವಘಡಗಳಾದರೆ ತಕ್ಷಣ ಸ್ಪಂದಿಸಲು ಆಂಬುಲೆನ್ಸ್‌ಗಳು ಸನ್ನದ್ದರಾಗಿರಬೇಕು ಎಂದು ಸೂಚನೆ ನೀಡಿದರು.

ಕೋವಿಡ್ ಸಂದರ್ಭ ಜಿಲ್ಲಾಡಳಿತಕ್ಕೆ ದಾನಿಗಳು ಮತ್ತು ಸಂಘ ಸಂಸ್ಥೆಗಳು ನೀಡಿರುವ 11 ಆಂಬುಲೆನ್ಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಸಹಕಾರಿ ಸಂಘಗಳ ವಹಿಸಿಕೊಳ್ಳಬೇಕು. ಉಸ್ತುವಾರಿಯನ್ನು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂದಕರು ನೋಡಿಕೊಳ್ಳಬೇಕು ಎಂದು ಸೂಚಿಸಿದರು.

14 ವರ್ಷ ಮೇಲ್ಪಟ್ಟವರಿಗೆ ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ವ್ಯವಸ್ಥಿತವಾಗಿ ನಡೆಯಬೇಕು. ಲಸಿಕೆ ಪಡೆದ ನಂತರ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು, ಲಸಿಕೆ ನೀಡುವ ಸಂದರ್ಭದಲ್ಲಿ ಪೋಷಕರು ಹಾಜರಿರಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಾರ್ಡನ್‌ಗಳು ನಿಗಾ ವಹಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಸೂಚಿಸಿದರು.

ಸಭೆಯಲ್ಲಿ ಉಡುಪಿ ಶಾಸಕ ಹಾಗೂ ಪರ್ಯಾಯ ಸಮಿತಿ ಗೌರವಾಧ್ಯಕ್ಷ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT