15ರೊಳಗೆ ಮರಳು ತೆಗೆಯದಿದ್ದರೆ ಹೋರಾಟ: ಮಟ್ಟಾರು ರತ್ನಾಕರ ಹೆಗ್ಡೆ

7

15ರೊಳಗೆ ಮರಳು ತೆಗೆಯದಿದ್ದರೆ ಹೋರಾಟ: ಮಟ್ಟಾರು ರತ್ನಾಕರ ಹೆಗ್ಡೆ

Published:
Updated:

ಉಡುಪಿ: ಅಕ್ಟೋಬರ್ 15ರೊಳಗೆ ಜಿಲ್ಲೆಯಲ್ಲಿ ಮರಳು ತೆಗೆಯುವ ಪ್ರಕ್ರಿಯೆಗೆ ಚಾಲನೆ ಸಿಗದಿದ್ದರೆ, 16ರಂದು ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಚರ್ಚಿಸಿ ಹೋರಾಟ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಿಆರ್‌ಜೆಡ್ ಹಾಗೂ ನಾನ್‌ ಸಿಆರ್‌ಜೆಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಿ ಮರಳು ತೆಗೆಯಲು ಅವಕಾಶ ನೀಡುವುದಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಹಿಂದೆ ಭರವಸೆ ನೀಡಿತ್ತು. ಇದುವರೆಗೂ ಭರವಸೆ ಈಡೇರಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸಿಆರ್‌ಜೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯಲಾಗುತ್ತಿದೆ. ಆದರೆ, ಉಡುಪಿಯಲ್ಲಿ ಮಾತ್ರ ವಿಳಂಬ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಆದೇಶ ಮಾಡಿದ ಮೇಲೂ ಮರಳು ತೆಗೆಯಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿರುವುದು ಏಕೆ ಎಂದು ಮಟ್ಟಾರು ಪ್ರಶ್ನಿಸಿದರು.

ಜಿಲ್ಲಾಡಳಿತ ನಿಯಮಗಳನ್ನು ಗಾಳಿಗೆ ತೂರುವುದು ಬೇಡ. ರಾಷ್ಟ್ರೀಯ ಹಸಿರು ಪೀಠದ ನಿಯಮಗಳಿಗೆ ಬದ್ಧವಾಗಿಯೇ ಮರಳು ತೆಗೆಯಲು ಕ್ರಮ ಕೈಗೊಳ್ಳಲಿ. ಹಿಂದಿನಂತೆ, ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ನೀಡಲಿ ಎಂದು ಆಗ್ರಹಿಸಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಕಣಕ್ಕಿಳಿದಿದ್ದಾರೆ. ಈ ಬಾರಿ ಬೈಂದೂರು ಕ್ಷೇತ್ರದಿಂದ ಅತಿ ಹೆಚ್ಚಿನ ಮತಗಳು ಬಿಜೆಪಿಗೆ ಸಿಗಲಿದ್ದು, ಗೆಲುವು ಖಚಿತ ಎಂದು ಮಟ್ಟಾರು ವಿಶ್ವಾಸ ವ್ಯಕ್ತಪಡಿಸಿದರು. 

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸುಕುಮಾರ ಶೆಟ್ಟಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. 7 ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಪೈಕಿ 5ರಲ್ಲಿ ಬಿಜೆಪಿ ಸದಸ್ಯರಿದ್ದಾರೆ. ತಾಲ್ಲೂಕು ಪಂಚಾಯ್ತಿಯಲ್ಲೂ ಬಿಜೆಪಿ ಸದಸ್ಯರು ಹೆಚ್ಚಾಗಿದ್ದಾರೆ. ಪರಿಸ್ಥಿತಿ ಬಿಜೆಪಿ ಗೆಲುವಿಗೆ ಪೂರಕವಾಗಲಿದೆ ಎಂದರು.

ಇದೇ 15ರಂದು ಶಿವಮೊಗ್ಗದಲ್ಲಿ ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದು, ಜಿಲ್ಲೆಯಿಂದ 500ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದಾರೆ. ಇದೇ ತಿಂಗಳು ಬೈಂದೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗ ಕ್ಷೇತ್ರದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸಾದ್ಯವಾಗಿಲ್ಲ. ಬಳ್ಳಾರಿ, ಮಂಡ್ಯದಲ್ಲೂ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ. ಇದನ್ನು ನೋಡಿದರೆ ಯಾವ ಕ್ಷೇತ್ರದ ಮೇಲೂ ಕಾಂಗ್ರೆಸ್‌–ಜೆಡಿಎಸ್‌ಗೆ ಹಿಡಿತ ಇಲ್ಲದಿರುವುದು ಕಾಣುತ್ತಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರಭಾಕರ ಪೂಜಾರಿ, ಯಶಪಾಲ್ ಸುವರ್ಣ ಅವರೂ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !