ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪುವಿನಲ್ಲಿ ತೇಲುವ ರೆಸ್ಟೋರೆಂಟ್‌

ನಿಯಮಗಳಡಿ ಅನುಮತಿ ನೀಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ
Last Updated 16 ಫೆಬ್ರುವರಿ 2023, 6:39 IST
ಅಕ್ಷರ ಗಾತ್ರ

ಉಡುಪಿ: ಕಾಪು ತಾಲ್ಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಮಾಡಲು ನಿಯಮಗಳಡಿ ಮಂಜೂರಾತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿ, ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಮತ್ತು ವಸತಿ ಗೃಹ ನಿರ್ಮಿಸಲು ಪ್ರಸ್ತಾವ ಸಲ್ಲಿಕೆಯಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಹಾಗೂ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ ಅನುಮತಿ ನೀಡಬೇಕು ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ಯೋಜನೆಗಳ ಅನುಷ್ಠಾನ ಸಂಬಂಧ ಪೊಲೀಸ್ ಇಲಾಖೆ, ಸಿಆರ್‌ಝೆಡ್‌ ಮತ್ತು ಸ್ಥಳೀಯ ಸಂಸ್ಥೆಗಳಿಂದ ನಿರಾಕ್ಷೇಪಣ ಪತ್ರ ಪಡೆಯಲು ಏಕ ಗವಾಕ್ಷಿ ವ್ಯವಸ್ಥೆ ಜಾರಿಯಾಗಬೇಕು. ಕರಾವಳಿ ತೀರಗಳಲ್ಲಿ ಪ್ಯಾರಾ ಮೋಟರಿಂಗ್ ಅಡ್ವೆಂಚರ್ ಕ್ರೀಡೆಗಳನ್ನು ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಸುರಕ್ಷತೆ ವ್ಯವಸ್ಥೆ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ ಅನುಮತಿ ನೀಡಬೇಕು ಎಂದು ನಿರ್ದೇಶಿಸಿದರು.

ತ್ರಾಸಿ, ಮರವಂತೆ ಹಾಗೂ ಕಾಪು ಬೀಚ್‌ನಲ್ಲಿ ಮತ್ಸ್ಯಾಲಯ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಪರಿಶೀಲಿಸಬೇಕು. ಪ್ರವಾಸಿ ತಾಣಗಳ ನಿರ್ವಹಣೆ ಗುತ್ತಿಗೆ ಪಡೆದಿರುವವರು, ಒಪ್ಪಂದದಲ್ಲಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಪ್ರವಾಸಿಗರಿಗೆ ಅನಾನುಕೂಲವಾಗುವಂತೆ ವರ್ತಿಸಿದರೆ ಕ್ರಮ ಜರುಗಿಸಬೇಕು ಎಂದು ಎಚ್ಚರಿಕೆ ನೀಡಿದರು.

ಹೆಬ್ರಿ ತಾಲ್ಲೂಕಿನ ವರಂಗದಲ್ಲಿ ಇಕೋ ಟೂರಿಸಂ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆಸಿ, ಪಡುಬಿದ್ರಿ ಕಡಲತೀರದಿಂದ ಪಡುಕೆರೆ ಕಡಲತೀರದವರೆಗೆ ಸೈಕಲ್ ಸರ್ಕ್ಯೂಟ್ ಹಾಗೂ ಕುಂದಾಪುರ ಕೋಡಿಬೀಚ್‌ನಿಂದ ಕೋಡಿ ತಲೆ ಡೆಲ್ಟಾಪಾಯಿಂಟ್‌ವರೆಗೆ ಸೈಕಲ್ ಟ್ರ‍್ಯಾಕ್ ನಿರ್ಮಾಣ ಮಾಡುವ ಬಗ್ಗೆ ಸಂಸ್ಥೆಗಳನ್ನು ಆಹ್ವಾನಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.

ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಕ್ಷಿಪ್ರಗತಿಯಲ್ಲಿ ಮಾಹಿತಿ ದೊರೆಯಲು ಅನುಕೂಲವಾಗುವಂತೆ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್‌ನಲ್ಲಿ ಮಾಹಿತಿ, ವಿಡಿಯೊ ಮತ್ತು ಛಾಯಾಚಿತ್ರಗಳನ್ನು ಅಪ್ಲೋಡ್ ಮಾಡಬೇಕು. ಪ್ರವಾಸಿ ತಾಣಗಳ ಕುರಿತು ಕಿರು ಪುಸ್ತಕಗಳನ್ನು ಮುದ್ರಿಸಿ, ಪ್ರವಾಸೋದ್ಯಮ ಸಂಘಟನೆಗಳಿಗೆ ವಿತರಿಸಬೇಕು.

ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಯೋಜನೆಗಳನ್ನು ರೂಪಿಸಲು ವಿವಿಧ ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಯೋಜನೆ ಸಿದ್ಧಪಡಿಸಬೇಕು. ಅಧಿಕಾರಿಗಳ ನ್ನೊಳಗೊಂಡ ತಂಡ ಹಾಗೂ ಉಪ ಸಮಿತಿಗಳನ್ನು ರಚಿಸಿಕೊಂಡು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಎನ್‌.ಗುರುಪ್ರಸಾದ್, ನಗರಸಭೆ ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ,
ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ
ಪ್ರವಾಸೋದ್ಯಮ ಸಂಘಟನೆಗಳ ಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT