ಗುರುವಾರ , ಡಿಸೆಂಬರ್ 3, 2020
23 °C
ಆಹಾರ ಸುರಕ್ಷತೆಯ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್

ಆಹಾರ ಪದಾರ್ಥ ಮಾರಾಟಕ್ಕೆ ಪರವಾನಗಿ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಮಾರಿಣಾಮ ಬೀರುವ ಕಲಬೆರೆಕೆ ಉತ್ಪನ್ನಗಳ ತಯಾರಿಕೆ, ಮಾರಾಟಗಾರರ ವಿರುದ್ಧ ಕಾನೂನಿನಡಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ,  ಮಾರುಕಟ್ಟೆಯಲ್ಲಿ ಕಲಬೆರಕೆ ಉತ್ಪನ್ನಗಳ ಮಾರಾಟದ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ರಾಸಾಯನಿಕ ಮಿಶ್ರಣದ ಆಹಾರ ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಕಲಬೆರಕೆ ದಂಧೆಯನ್ನು ಮಟ್ಟಹಾಕಬೇಕು ಎಂದು ಸೂಚನೆ ನೀಡಿದರು.

ಆಹಾರ ತಯಾರಿಸುವ ಉದ್ಯಮಿಗಳು ಎಫ್‌ಎಸ್‌ಎಸ್‌ಐ ಅಡಿಯಲ್ಲಿ ನೋಂದಣಿ ಮಾಡಿಸಿ ಪರವಾನಿಗೆ ಪಡೆದಿರಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಿ. ಕಾಂಡಿಮೆಂಟ್ಸ್‌ಗಳಲ್ಲಿ ಸಿಹಿ ಪದಾರ್ಥಗಳ ಮೇಲೆ ತಯಾರಿಕೆ ದಿನಾಂಕ ಹಾಗೂ ಬಳಕೆ ಅವಧಿ ಮುಗಿಯುವ ದಿನಾಂಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಪ್ರಸಾದ ವಿನಿಯೋಗ ಮಾಡುವ ದೇಗುಲಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿ ಪರವಾನಿಗೆ ಪಡೆಯಬೇಕು. ಪ್ರಸಾದ ತಯಾರಿಕಾ ಕೋಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಯಾಗಿರಬೇಕು. ಅನಧಿಕೃತ ವ್ಯಕ್ತಿಗಳು ಅಡುಗೆ ಕೋಣೆ ಪ್ರವೇಶಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಿಂದ ರಫ್ತಾಗುವ, ಆಮದಾಗುವ ಮೀನುಗಳು ಕೆಡದಂತೆ ರಾಸಾಯನಿಕ ಬಳಸುತ್ತಿರುವ ಬಗ್ಗೆ ಆರೋಪಗಳಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಅಂಗನವಾಡಿಯಲ್ಲಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಹ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್‌ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ವಾಸುದೇವ, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.