ಶುಕ್ರವಾರ, ಅಕ್ಟೋಬರ್ 23, 2020
21 °C
ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿ.ಜಗದೀಶ್‌ ಸೂಚನೆ

ನೊಂದ ಮಹಿಳೆಗೆ ನೆರವಿನ ಜತೆ ಸಾಂತ್ವನ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸಮಾಜದಲ್ಲಿ ನೊಂದ, ನಿರ್ಗತಿಕ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರು ಹಾಗೂ ಮಕ್ಕಳಿಗೆ ಸಾಂತ್ವನ ಹೇಳುವುದರ ಜೊತೆಗೆ ಆಶ್ರಯ ನೀಡಿ ಕಾನೂನು ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು.

ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಾಂತ್ವುನ ಯೋಜನೆ, ಕೌಟುಂಬಿಕ ಹಿಂಸೆ, ಮಹಿಳೆಯರ ರಕ್ಷಣೆ, ಮಹಿಳೆಯರ ಮತ್ತು ಮಕ್ಕಳ ಸಾಗಣೆ ತಡೆ, ಬಾಲ್ಯವಿವಾಹ ನಿಷೇಧ, ಮಾದಕ ವಸ್ತುಗಳ ಸೇವನೆ ನಿಷೇಧ ಹಾಗೂ ‘ಸಖಿ ಒನ್ ಸ್ಟಾಪ್’ ಸೆಂಟರ್‌ಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು ಹಲವು ಕಾನೂನುಗಳಿದ್ದು, ಅವುಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಬೇಕು. ನೊಂದವರಿಗೆ ಸಾಂತ್ವನ ಹೇಳಿ ಆಶ್ರಯ ನೀಡಿ, ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

ಸಾಂತ್ವನ ಕೇಂದ್ರದಲ್ಲಿ ಡಿಸೆಂಬರ್‌ನಿಂದ ಇಲ್ಲಿಯವರೆಗೂ 187 ಪ್ರಕರಣ ದಾಖಲಾಗಿದ್ದು, ಹಳೆಯವು ಸೇರಿ 401 ಪ್ರಕರಣಗಳಿವೆ. ಅವುಗಳಲ್ಲಿ 180 ಇತ್ಯರ್ಥವಾಗಿದ್ದು, 165 ವಿಚಾರಣಾ ಹಂತದಲ್ಲಿವೆ. 56 ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿವೆ. ಬಾಕಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಪೋಕ್ಸೊ ಕಾಯ್ದೆಯಡಿ ಪ್ರಸಕ್ತ ಸಾಲಿನಲ್ಲಿ 33 ಪ್ರಕರಣ ದಾಖಲಾಗಿದ್ದು, 22 ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ. 11 ಪ್ರಕರಣಗಳು ತನಿಖಾ ಹಂತದಲ್ಲಿರುವುದು ಕಂಡುಬಂದಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಮಹಿಳಾ ಮತ್ತು ಮಕ್ಕಳ ಸಾಗಣೆ ತಡೆಗಟ್ಟುವಿಕೆ, ಬಾಲ್ಯವಿವಾಹ ನಿಷೇಧ, ಸಮಗ್ರ ಮಕ್ಕಳ ರಕ್ಷಣೆ ಸಮಿತಿಗಳು 3 ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದರು.

ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಉದ್ಯೋಗ ಹರಸಿ ಬಂದ ಕಾರ್ಮಿಕರು ವಾಸವಿರುವ ಸ್ಥಳಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಎಚ್ಚರ ವಹಿಸಬೇಕು. ಆ ಪ್ರದೇಶಗಳಲ್ಲಿ ಪೊಲೀಸ್ ಬೀಟ್‌ ವ್ಯವಸ್ಥೆ ಹೆಚ್ಚಿಸಬೇಕು. ಹೊರ ದೇಶಗಳಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದಾಗಿ ನಂಬಿಸಿ ವಂಚಿಸುವ ಏಜೆನ್ಸಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದರು.

ವೃತ್ತಿ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ನಡೆಯದಂತೆ ಎಚ್ಚರವಹಿಸಬೇಕು, ಲೈಂಗಿಕ ಕಿರುಕುಳ ನಡೆದರೆ ಯಾರನ್ನು ಸಂಪರ್ಕಿಸಬೇಕು, ಕಾನೂನು ನೆರವು ಪಡೆಯುವುದು ಹೇಗೆ ಎಂಬ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆಯ 29 ಪ್ರಕರಣ ದಾಖಲಾಗಿದ್ದು, 67 ಜನರನ್ನು ಬಂಧಿಸಲಾಗಿದೆ. 207 ಜನರ ಮೇಲೆ ಮಾದಕ ವಸ್ತುಗಳ ಸೇವನೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ. ನವೀನ್ ಭಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಆರ್‌. ಶೇಷಪ್ಪ, ಡಿಎಚ್‌ಒ ಸುಧೀರ್ ಚಂದ್ರ ಸೂಡ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.