ಭಾನುವಾರ, ಮಾರ್ಚ್ 7, 2021
31 °C
ಜ.30ರಂದು ಕಾರ್ಯಕ್ರಮ ಅನುಷ್ಠಾನ– ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ: ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು

ಗ್ರಾಮ ವಾಸ್ತವ್ಯ: ಜಿಲ್ಲೆಯಲ್ಲಿ ಪೈಲಟ್‌ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಮಹತ್ವಾಕಾಂಕ್ಷಿ ಯೋಜನೆ ಜಿಲ್ಲೆಯಲ್ಲಿ ಪೈಲಟ್‌ ಯೋಜನೆಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲ ತಹಶೀಲ್ದಾರ್‌ ಹಾಗೂ ತಾಲ್ಲೂಕು ಪಂಚಾಯಿತಿ ಇಒಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ.30ರಂದು ಬ್ರಹ್ಮಾವರ ತಾಲ್ಲೂಕಿನ ನೆಂಚಾರು ಹಾಗೂ ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಲಿದ್ದು, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಪೈಲಟ್ ಕಾರ್ಯಕ್ರಮವಾಗಿ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ಎಡಿಸಿ ಹೇಳಿದರು.

ಕಂದಾಯ ಇಲಾಖೆ ಅಧಿಕಾರಿಗಳು 3 ದಿನ ಮುಂಚಿತ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮ ವಾಸ್ತವ್ಯದ ದಿನ ಫಲಾನುಭವಿಗಳ ಅರ್ಜಿ ಇತ್ಯರ್ಥ ಸಂಬಂಧ ಸಂಬಂಧಪಟ್ಟ ತಹಶೀಲ್ದಾರ್‌, ತಾಲ್ಲೂಕು ಪಂಚಾಯಿತಿ ಇಒಗಳು ಹಾಗೂ ಅಧಿಕಾರಿಗಳು ವಾಸ್ತವ್ಯ ಕಾರ್ಯಕ್ರಮದಲ್ಲಿ ಹಾಜರಿರಬೇಕು ಎಂದು ಎಡಿಸಿ ಸೂಚಿಸಿದರು.

ಗ್ರಾಮಗಳಿಗೆ ಭೇಟಿನೀಡಿದ ಸಂದರ್ಭ ಪಹಣಿಯಲ್ಲಿನ ಲೋಪದೋಷ ಮತ್ತು ಆಕಾರ್ ಬಂದ್ ತಾಳೆ ಹೊಂದುವ ಕುರಿತು ಖಚಿತಪಡಿಸಿಕೊಳ್ಳಬೇಕು. ಪೌತಿ ಹೊಂದಿದ ಖಾತೆದಾರರ ಹೆಸರನ್ನು, ನೈಜ ವಾರಿಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲಸಿ, ಬಿಟ್ಟುಹೋದ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಬೇಕು ಎಂದರು.

ಗ್ರಾಮಗಳಲ್ಲಿ ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಜಮೀನು ಕಾಯ್ದಿರಿಸಲು ಕ್ರಮ, ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ತೆರವು, ಆಧಾರ್ ಕಾರ್ಡ್ ಬಗ್ಗೆ ಅರಿವು, ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗ್ರತಾ ಕ್ರಮ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿನೀಡಿ ಪರಿಶೀಲನೆ, ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಖಾತ್ರಿ ಪಡಿಸಿಕೊಳ್ಳುವಿಕೆ, ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕ್ರಮ, ಗುಡಿಸಲು ವಾಸದ ಮನೆಗಳನ್ನು ಪತ್ತೆ ಹಚ್ಚಿ ಸರ್ಕಾರದ ವಿವಿಧ ಯೋಜನೆಗಳಡಿ ಮನೆ ಕಟ್ಟಿಸಿಕೊಳ್ಳಲು ಅನುದಾನ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸದಾಶಿವ ಪ್ರಭು ಸೂಚಿಸಿದರು.

ಗ್ರಾಮ ವಾಸ್ತವ್ಯ ಸಂದರ್ಭ ಪಿಡಿಒಗಳು ಮತ್ತು ಪಂಚಾಯಿತಿ ಆಡಳಿತಾಧಿಕಾರಿಗಳು, ಕಂದಾಯ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಕುಟುಂಬದ ವ್ಯಕ್ತಿ ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಪಡೆದು ಪೌತಿ ಖಾತೆ ಬದಲಾವಣೆ ಮಾಡಿಕೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಯಗಳಡಿ ಪಿಂಚಣಿ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಲ್ಲಿ ಮಾಹಿತಿ ನೀಡಬೇಕು. ಮೃತರ ಹೆಸರಿನಲ್ಲಿ ಬೇರೆಯವರು ಪಿಂಚಣಿ ಪಡೆದರೆ, ಮೊತ್ತವನ್ನು ವಸೂಲಿ ಮಾಡಲಾಗುವುದು ಎಂದು ಎಡಿಸಿ ಎಚ್ಚರಿಸಿದರು.

ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಸಭೆಯಲ್ಲಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು