ಬುಧವಾರ, ಮಾರ್ಚ್ 3, 2021
30 °C
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತ ರಕ್ಷಣಾ ಸಮಿತಿ ಆಗ್ರಹ

ಕಳೆದ ವರ್ಷ ಬೋಧಿಸಿದ ಎಲ್ಲರನ್ನೂ ಮುಂದುವರಿಸಿ: ಉಪನ್ಯಾಸಕರ ಹಿತರಕ್ಷಣಾ ಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: 2019–20ನೇ ಸಾಲಿನಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು 2020–21ನೇ ಶೈಕ್ಷಣಿಕ ಸಾಲಿನಲ್ಲಿ ಮುಂದುವರಿಸಬೇಕು. ಸರ್ಕಾರ ನಿರ್ಲಕ್ಷ್ಯ ತೋರಿದರೆ ಸಂಕಷ್ಟದಲ್ಲಿ ಸಿಲುಕಿರುವ ಅತಿಥಿ ಉಪನ್ಯಾಸಕರು ಬೀದಿಗೆ ಬೀಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತ ರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಮಂಜಪ್ಪ ಗೋಣಿ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಗುತ್ತಿರುವ ಗೌರವ ವೇತನ ಬಹಳ ಕಡಿಮೆ. 10 ತಿಂಗಳ ಅವಧಿಗೆ ನೇಮಕ ಮಾಡಿಕೊಂಡು ಕೇವಲ ₹ 13,000 ವೇತನ ನೀಡಲಾಗುತ್ತಿದೆ. 3 ತಿಂಗಳಿಗೆ, 6 ತಿಂಗಳಿಗೆ ವೇತನ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ವರ್ಷ ಮಾರ್ಚ್‌ನಿಂದ ಆಗಸ್ಟ್‌ವರೆಗೂ ವೇತನ ನೀಡಿರಲಿಲ್ಲ. ಸಮಿತಿಯ ಗೌರವಾಧ್ಯಕ್ಷ ಆಯನೂರು ಮಂಜುನಾಥ್‌ ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಆಗಸ್ಟ್‌ವರೆಗಿನ ವೇತನ ಬಿಡುಗಡೆ ಮಾಡಿತು. ನಂತರದ 4 ತಿಂಗಳ ವೇತನ ಬಿಡುಗಡೆ ಮಾಡಿಲ್ಲ. ಆರ್ಥಿಕ ಸಂಕಷ್ಟದಿಂದ ಜೀವನ ನಿರ್ವಹಣೆ ಮಾಡಲಾಗದೆ ಅತಿಥಿ ಉಪನ್ಯಾಸಕರು ಅನ್ಯ ಉದ್ಯೋಗಗಳತ್ತ ಮುಖ ಮಾಡಿದ್ದಾರೆ. ಕೆಲವರು ಖಿನ್ನತೆಗೆ ಜಾರಿದ್ದು, ಒಂದು ವರ್ಷದಲ್ಲಿ 24 ಅತಿಥಿ ಉಪನ್ಯಾಸಕರು ಮೃತಪಟ್ಟಿದ್ದಾರೆ. ನೂರಾರು ಮಂದಿ ಮಾರಣಾಂತಿಕ ಕಾಯಿಲೆಗಳಿಂದ ನರಳುತ್ತಿದ್ದಾರೆ ಎಂದು ನೋವು ತೋಡಿಕೊಂಡರು.

ರಾಜ್ಯದ ಕಾಲೇಜು ಶಿಕ್ಷಣ ವ್ಯವಸ್ಥೆ ನಿಂತಿರುವುದು ಅತಿಥಿ ಉಪನ್ಯಾಸಕರ ಮೇಲೆ. 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,183 ಅತಿಥಿ ಉಪನ್ಯಾಸಕರು ದುಡಿಯುತ್ತಿದ್ದಾರೆ. ಎಂಫಿಲ್‌, ನೆಟ್‌, ಸ್ಲೆಟ್‌, ಪಿಎಚ್‌.ಡಿ ಪಡೆದು ಅತಿ ಕಡಿಮೆ ವೇತನಕ್ಕೆ ಬೋಧಿಸುತ್ತಿದ್ದಾರೆ. ಇಎಸ್‌ಐ, ಪಿಎಫ್‌, ರಜಾ ಸೌಲಭ್ಯಗಳಿಲ್ಲ. ಕನಿಷ್ಠ ಸೌಲಭ್ಯಗಳಿಲ್ಲದೆ ದುಡಿಯುತ್ತಿರುವ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ ಎಂದು ಅಳಲು ತೋಡಿಕೊಂಡರು.

ಕಳೆದ ವರ್ಷ ಕಾರ್ಯ ನಿರ್ವಹಿಸಿದ 14,183 ಅತಿಥಿ ಉಪನ್ಯಾಸಕರ ಪೈಕಿ ಶೇ 50ರಷ್ಟು ಉಪನ್ಯಾಸಕರನ್ನು ಮಾತ್ರ 2021ರ ಅವಧಿಗೆ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ನಿರ್ಧಾರದಿಂದ 8,000ಕ್ಕೂ ಹೆಚ್ಚು ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಅವಲಂಬಿತ ಕುಟುಂಬಗಳು ಬೀದಿಗೆ ಬೀಳಲಿವೆ. ಅಮಾನವೀಯ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಮಂಜಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರಫಿಕ್‌ ಖಾನ್‌ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು