ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೀಕ್ಷೆ: 3 ಸಾವಿರ ಅಂಗವಿಕಲರ ನೋಂದಣಿ

ಅಂಗವಿಕಲರಿಗೆ ಅಗತ್ಯ ಸವಲತ್ತು: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್
Last Updated 3 ಡಿಸೆಂಬರ್ 2022, 15:32 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಅಂಗವಿಕಲರು ಬಳಸುವ ಸಾಧನ, ಸಲಕರಣೆಗಳನ್ನು ನೀಡಲು ಮತ್ತು ಸರ್ಕಾರದ ಸವಲತ್ತುಗಳನ್ನು ವ್ಯವಸ್ಥಿತವಾಗಿ ಅಂಗವಿಕಲರಿಗೆ ದೊರಕಿಸುವ ಉದ್ದೇಶದಿಂದ ಸಮೀಕ್ಷೆ ನಡೆಸಲಾಗಿದ್ದು, 3 ಸಾವಿರ ಅಂಗವಿಕಲರು ಸಮೀಕ್ಷೆಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ನಗರದ ಅಮ್ಮಣ್ಣಿ ರಾಮಣ್ಣಶೆಟ್ಟಿ ಸಭಾಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಗ್ರಾಮಮಟ್ಟದಲ್ಲಿ ವಿ.ಆರ್.ಡಬ್ಲ್ಯೂ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅಂಗವಿಕಲರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನ ವ್ಯವಸ್ಥಿತವಾಗಿ ಸದ್ಬಳಕೆ ಮಾಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಎಸ್.ಮಾತನಾಡಿ, ಅಂಗವಿಕಲರ ಸಾಧನೆಗಳಿಗೆ ಸಮಾಜ ಪ್ರೋತ್ಸಾಹ ನೀಡಬೇಕು. ಅನುಕಂಪದಿಂದ ನೋಡುವ ಬದಲು ಸ್ವಾಭಿಮಾನದಿಂದ ಬದುಕಲು ಅವಕಾಶ ನೀಡಬೇಕು. ಅಂಗವಿಕಲರಿಗೆ ಅವಮಾನ ಮಾಡುವುದು, ವಂಚಿಸುವುದು, ಸಾಧನಗಳನ್ನು ಹಾಳುಗೆಡುವುದು ಜಾಮೀನು ರಹಿತ ಅಪರಾಧವಾಗಿದ್ದು, 6 ತಿಂಗಳಿಂದ 6 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ವಿಶೇಷ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷೆ ಅಗ್ನೇಸ್ ಕುಂದರ್, ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಹೆಬ್ಬಾರ್, ಜಿಲ್ಲಾ ರೆಡ್‌ಕ್ರಾಸ್ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ಅಂಗವಿಕಲರ ಪಾಲಕರ ಸಂಘದ ಅಧ್ಯಕ್ಷ ಜೈ ವಿಠಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾದ್ಯಾಯ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರತ್ನಾ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ವಾಗ್ಜೋತಿ ವಸತಿ ಶಾಲೆ ಪ್ರಾಂಶುಪಾಲ ರವೀಂದ್ರ ಕಾರ್ಯಕ್ರಮ ನಿರೂಪಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ರಕ್ತದೊತ್ತಡ, ಮಧುಮೇಹ ತಪಾಸಣೆ ಮತ್ತು ಆಭಾ ಕಾರ್ಡ್‌ಗಳ ನೊಂದಣಿ ನಡೆಯಿತು.

ಡೆಫ್ಟ್ ವರ್ಲ್ಡ್ ಕಪ್ 2022ರಲ್ಲಿ ಭಾರತ ತಂಡ ಪ್ರತಿನಿಧಿಸಿದ್ದ ಕ್ರಿಕೆಟರ್ ಪೃಥ್ವಿರಾಜ ಶೆಟ್ಟಿ ಹಂಚಾನಿ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿಶೇಷ ಶಾಲೆ ಮಕ್ಕಳಿಗೆ ಬಹುಮಾನ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಲಾಯಿತು.

ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್ ಹಾಗೂ ಬಳಗದಿಂದ ಅಂಗವೈಕಲ್ಯತೆಗೆ ಕಾರಣ, ಅರಿವು ನೀಡುವ ಯಕ್ಷಗಾನ ಪ್ರದರ್ಶನ ನಡೆಯಿತು. ವಿಶೇಷ ಶಾಲೆ ಮಕ್ಕಳು ಸಿದ್ಧಪಡಿಸಿದ್ದ ಕರಕುಶಲ ವಸ್ತುಗಳ ಪ್ರದರ್ಶನ, ಜಾಥಾ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT