ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ ಘರ್ ತಿರಂಗ ಅಭಿಯಾನ ಯಶಸ್ವಿಗೊಳಿಸಿ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕರೆ
Last Updated 1 ಆಗಸ್ಟ್ 2022, 16:03 IST
ಅಕ್ಷರ ಗಾತ್ರ

ಉಡುಪಿ: ದೇಶದ 75ನೇ ಸ್ವಾಂತತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಬೇಕು ಹಾಗೂ ಜಿಲ್ಲೆಗೆ 25 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅವಲೋಕಿಸುವ ಕಾರ್ಯಕ್ರಮಗಳನ್ನು ಆಯೋಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಹರ್ ಘರ್ ತಿರಂಗ ಹಾಗೂ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ, ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾಂತಂತ್ರ್ಯೋತ್ಸವದ ಅಮೃತ ಅಮೃತ ಮಹೋತ್ಸವ ಅಂಗವಾಗಿ ಆ.13 ರಿಂದ 15 ರವರೆಗೆ 3 ದಿನ ಜಿಲ್ಲೆಯಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಪ್ರೇಮ ಹಾಗೂ ರಾಷ್ಟ್ರಭಕ್ತಿಯನ್ನು ಇಮ್ಮಡಿಗೊಳಿಸಲು ಅಭಿಯಾನ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 2,72,000 ಮನೆಗಳು, 1 ಲಕ್ಷಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ 4 ಲಕ್ಷಕ್ಕೂ ಹೆಚ್ಚು ಕಟ್ಟಡಗಳಿವೆ. ಪ್ರತಿ ಕಟ್ಟಡಗಳ ಮೇಲೆಯೂ ತ್ರಿವರ್ಣ ಧ್ವಜ ಹಾರಿಸಲು ಸಾರ್ವಜನಿಕರಿಗೆ ತ್ರಿವರ್ಣ ಧ್ವಜಗಳು ಲಭ್ಯವಾಗುವಂತೆ ಕ್ರಮ ವಹಿಸಬೆಬೇಕು ಎಂದು ಸೂಚಿಸಿದರು.

ಆ.25ಕ್ಕೆ ಉಡುಪಿ ಜಿಲ್ಲೆಯಾಗಿ ರೂಪುಗೊಂಡು 25 ವರ್ಷಗಳು ತುಂಬುತ್ತಿದ್ದು ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸುವುದರ ಜತೆಗೆ ಅಂದಿನ ಉಡುಪಿ ಹಾಗೂ ಇಂದಿನ ಉಡುಪಿಯ ಚಿತ್ರಣ ತೆರದಿಡಬೇಕಿದೆ. ಜಿಲ್ಲೆಯಲ್ಲಿ ಆಗಿರುವ ಅಭಿವೃದ್ದಿ ಕಾರ್ಯಗಳ ಪುನರಾವಲೋಕನ ಹಾಗೂ ಮುಂಬರುವ ದಿನಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತ ಸಾಧಕ ಭಾದಕಗಳು, ಜನಸಾಮಾನ್ಯರ ಆಶೋತ್ತರಗಳನ್ನು ಕ್ರೂಢೀಕರಿಸಬೇಕು. ಇದರೊಂದಿಗೆ ಜಿಲ್ಲೆಯ ಅಭಿವೃದ್ದಿಗೆ ಭದ್ರ ಬುನಾದಿ ಹಾಕಬೇಕು ಎಂದರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಮಾತನಾಡಿ, 3 ದಿನ ರಾಜ್ಯದಾದ್ಯಂತ ಕೋಟಿಗೂ ಹೆಚ್ಚು ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ ದೇಶಪ್ರೇಮ ಮೆರೆಯುವ ಹರ್ ಘರ್ ತಿರಂಗ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಯುವ ಜನರಲ್ಲಿ ಸದೃಢ ಭಾರತ ನಿರ್ಮಾಣ ಕುರಿತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ ಮಂಡಲಗಳ ಸಹಭಾಗಿತ್ವದಲ್ಲಿ ಆಯೋಜಿಸಬೇಕು ಎಂದರು.

ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ, ಎಸ್‌ಪಿ ಎನ್. ವಿಷ್ಣುವರ್ಧನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT