ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುನರ್‌ನಿರ್ಮಾಣ ಕಾಮಗಾರಿ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Published 14 ಆಗಸ್ಟ್ 2024, 4:39 IST
Last Updated 14 ಆಗಸ್ಟ್ 2024, 4:39 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಮೂಲಸೌಕರ್ಯಗಳಿಗೆ ಹಾನಿಯುಂಟಾಗಿದ್ದು, ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಶೇ  41 ರಷ್ಟು ಹೆಚ್ಚುವರಿ ಮಳೆ ಸುರಿದಿದ್ದು, ರಸ್ತೆ, ಮೇಲ್ಸೇತುವೆ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌, ಶಾಲೆ, ಅಂಗನವಾಡಿ ಕಟ್ಟಡಗಳಿಗೆ ಹಾನಿಯುಂಟಾಗಿ ಅಂದಾಜು ₹183 ಕೋಟಿಗಳಷ್ಟು ನಷ್ಟ ಉಂಟಾಗಿದೆ. ಇವುಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ಮಳೆಗಾಲದಲ್ಲಿ ಸಂಭವಿಸುವ ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನಚ್ಚರಿಕೆ ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭೂಕುಸಿತ ಪ್ರದೇಶಗಳನ್ನು ನಿಖರವಾಗಿ ಗುರುತಿಸಲಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಡೆಂಗಿ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಸಮುದ್ರ ಸೇರಿದಂತೆ ಜಿಲ್ಲೆಯ ಯಾವುದೇ ಭಾಗದ ನೀರಿಗೆ ತೈಲ ಹಾಗೂ ರಾಸಾಯನಿಕ ಸೋರಿಕೆಯಾದರೆ ಅವುಗಳ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತೈಲ ಸೋರಿಕೆ ವಿಪತ್ತು ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಕಾರ್ಯಗಳಿಗೆ ಈಗಾಗಲೇ ಪಿ.ಡಿ ಖಾತೆಯಲ್ಲಿ ₹16.93 ಕೋಟಿ  ಅನುದಾನ ಲಭ್ಯವಿದೆ. ತಾಲ್ಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ ₹2.61 ಕೋಟಿ  ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದರು.

ಸಹಾಯಕ ಆಯುಕ್ತ ಮಹೇಶ್ಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT