ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಕ್ಷಿತ ಸಂಚಾರಕ್ಕೆ ಹೆದ್ದಾರಿಗಳು ಯೋಗ್ಯವಾಗಿರಲಿ: ಡಿಸಿ ಎಂ.ಕೂರ್ಮಾರಾವ್ ಸೂಚನೆ

ಹೆದ್ದಾರಿ ಗುಂಡಿ ಮುಚ್ಚುವಂತೆ ಡಿಸಿ ಎಂ.ಕೂರ್ಮಾರಾವ್ ಸೂಚನೆ
Last Updated 29 ಸೆಪ್ಟೆಂಬರ್ 2021, 15:06 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರ ಕಾಮಗಾರಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ‘ಎ’ ಸಂಬಂಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಹಾದುಹೋಗಿರುವ ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಅಪಘಾತಗಳ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪು ಸಂಗಮ್ ವೃತ್ತದ ಬಳಿ ಮಳೆಯ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಸ್ಥಳೀಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ಸಮನ್ವಯದೊಂದಿಗೆ ಕಾಮಗಾರಿ ಕೈಗೊಳ್ಳಬೇಕು ಎಂದು ಡಿಸಿ ಸೂಚನೆ ನೀಡಿದರು.

ಕುಂದಾಪುರ ಮೇಲ್ಸೇತುವೆ ಬಳಿ ಬಾಕಿ ರಸ್ತೆ ಡಾಂಬರೀಕರಣ, ಬೀದಿ ದೀಪಗಳ ವ್ಯವಸ್ಥೆ, ಸೂಚನಾ ಫಲಕಗಳ ಅಳವಡಿಕೆ, ಪಾದಚಾರಿಗಳಿಗೆ ರಸ್ತೆ ದಾಟಲು ಅನುಕೂಲ, ಮಳೆಯ ನೀರು ಸರಾಗವಾಗಿ ಹೋಗುವ ವ್ಯವಸ್ಥೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಂಡು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಹೆದ್ದಾರಿ ರಸ್ತೆಗಳ ಕಾಮಗಾರಿ ಕೈಗೊಳ್ಳಲು ಜಿಲ್ಲಾಡಳಿತ ಅಗತ್ಯವಿರುವ ಸಹಕಾರ ನೀಡಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ನೆರವು ಬೇಕಾದರೂ ಸಚಿವರ ಮೂಲಕ ಶೀಘ್ರ ಬಗೆಹರಿಸಿ ಕೊಡಲಾಗುವುದು ಎಂದರು.

ಹೆದ್ದಾರಿಗಳ ನಿರ್ವಹಣೆಯನ್ನು ಕಾಲ-ಕಾಲಕ್ಕೆ ಕೈಗೊಳ್ಳುವುದರ ಜೊತೆಗೆ ರಸ್ತೆಯಲ್ಲಿ ಗುಂಡಿಗಳು ಬೀಳದ ಹಾಗೆ ನೋಡಿಕೊಳ್ಳಬೇಕು. ಅವಶ್ಯವಿರುವ ಕಡೆ ಸರ್ವಿಸ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಬೇಕು ಎಂದು ಸೂಚನೆ ನೀಡಿದರು.

ಪರ್ಕಳದಿಂದ ಮಣಿಪಾಲ್‌ವರೆಗಿನ ರಸ್ತೆ ವಿಸ್ತರಣೆ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಹಾಕಲಾಗಿದ್ದು, ದಾವೆಯನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಬೇಕು. ತಕರಾರು ಇಲ್ಲದಿರುವ ಭಾಗದಲ್ಲಿ ಕಾಮಗಾರಿ ಕೂಡಲೇ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಎಸ್‌ಪಿ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಎಂಜಿನಿಯರ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT