ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಲ್ಕೊರೆತ: ₹100 ಕೋಟಿಗೆ ಕೇಂದ್ರಕ್ಕೆ ಪ್ರಸ್ತಾವ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬಸವರಾಜ ಬೊಮ್ಮಾಯಿ
Last Updated 28 ಜೂನ್ 2021, 14:21 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ₹100 ಕೋಟಿ ವಿಶೇಷ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ತೌತೆ ಚಂಡಮಾರುತ ಹಾಗೂ ಪ್ರಾಕೃತಿಕ ವಿಕೋಪದಿಂದ 9,115 ಮೀಟರ್ ಸಮುದ್ರ ಕೊರೆತ ಸಂಭವಿಸಿದ್ದು, ಅಂದಾಜು ₹ 90 ಕೋಟಿಗಿಂತ ಹೆಚ್ಚು ಹಾನಿ ಸಂಭವಿಸಿದೆ. ಕಡಲ್ಕೊರತ ಸಮಸ್ಯೆ ಶಾಶ್ವತ ಪರಿಹಾರಕ್ಕೆ ₹ 100 ಕೋಟಿ ವಿಶೇಷ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ತಡೆಗೆ ಎಸ್‌ಡಿಆರ್‌ಎಫ್ ತಂಡವನ್ನು ಜಿಲ್ಲೆಗೆ ಮಂಜೂರು ಮಾಡಲಾಗುವುದು. ಪ್ರಾಕೃತಿಕ ವಿಕೋಪದಿಂದ ಮನೆ ಹಾನಿಯಾದರೆ 2 ದಿನದಲ್ಲಿ ಪರಿಹಾರ ವಿತರಿಸಬೇಕು ಎಂದರು.

ಕೋವಿಡ್ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ 2.40 ಲಕ್ಷ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯುತ್ತಿದ್ದು, ಆ.15ರೊಳಗೆ ಪೂರ್ಣಗೊಳಿಸಬೇಕು. ಪ್ರತಿ ಗ್ರಾಮದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ, ಅಪೌಷ್ಟಿಕತೆ ಕಂಡುಬರುವ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್‌ ಹಾಗೂ ಔಷಧ ವಿತರಿಸಿ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಿ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಸೌಲಭ್ಯಗಳಿಲ್ಲದಿದ್ದರೆ ಖಾಸಗಿ ಆಸ್ಪತ್ರೆಗಳಿಗೆ ಮಕ್ಕಳನ್ನು ದಾಖಲಿಸಿ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಕೊಡಿಸಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಆಯುಷ್ಮಾನ್ ಯೋಜನೆಗೆ ತಿದ್ದುಪಡಿ ತರಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು. ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಪೋಷಕರು ಹಾಗೂ ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಲಾಗುವುದು ಎಂದರು.

ಜಿಲ್ಲೆಗೆ ಪ್ರತಿದಿನ 10,000 ಕೋವಿಡ್ ಲಸಿಕೆ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಲಸಿಕೆಯನ್ನು ಅದೇ ದಿನ ಬಳಸಿ, ತಿಂಗಳಿಗೆ 2.5 ಲಕ್ಷ ಲಸಿಕೆ ನೀಡಬೇಕು. 4 ತಿಂಗಳಲ್ಲಿ ಇಡೀ ಜಿಲ್ಲೆಯಲ್ಲಿ ಲಸಿಕೆ ಗುರಿ ಸಾಧಿಸಬೇಕು. ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು, ಗೊಂದಲಗಳಾಗದಂತೆ ಎಲ್ಲ ವಿದ್ಯಾರ್ಥಿಗಳಿಗೆ ಜುಲೈ ಅಂತ್ಯದೊಳಗೆ ಲಸಿಕೆ ಹಾಕಬೇಕು ಎಂದರು.

ಉಡುಪಿಯ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಆಡಳಿತ ಮಂಡಳಿ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಆಸ್ಪತ್ರೆಯನ್ನು ಸರ್ಕಾರವೇ ನಡೆಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಆಸ್ಪತ್ರೆಯಲ್ಲಿ 70 ಬೆಡ್ ಸಾಮರ್ಥ್ಯಕ್ಕೆ ಅಗತ್ಯವಿರುವ ಸಿಬ್ಬಂದಿ ನೇಮಕವಾಗಿದ್ದು, ಕೋವಿಡ್ 3ನೇ ಅಲೆ ಎದುರಿಸುವಲ್ಲಿ ಜಿಲ್ಲಾಡಳಿತಕ್ಕೆ ಆಸ್ಪತ್ರೆ ನೆರವಾಗಲಿದೆ ಎಂದರು.

ಕೋವಿಡ್ 2ನೇ ಅಲೆ ನಿಯಂತ್ರಣದಲ್ಲಿ ವೈದ್ಯರು, ಆರೋಗ್ಯ ಇಲಾಖೆಯ ಸಹಾಯಕ ಸಿಬ್ಬಂದಿ ಜಿಲ್ಲಾಡಳಿತದೊಂದಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಖಾಸಗಿ ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದು, ಆಮ್ಲಜನಕ ನಿರ್ವಹಣೆ, ರೆಮಿಡಿಸಿವರ್ ಬಳಕೆಯಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಸಚಿವರು ಅಭಿನಂದನೆ ಸಲ್ಲಿಸಿದರು.

ಕೋವಿಡ್ 3ನೇ ಅಲೆ ಸಮರ್ಥವಾಗಿ ತಡೆಯಲು ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸಹಿತ 50 ಮಕ್ಕಳ ಬೆಡ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಆಮ್ಲಜನಕ ಸಾಂಧ್ರಕಗಳನ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಕಾರ್ಯಾರಂಭ ಮಾಡಲು ಅಗತ್ಯ ಕ್ರಮಗಳನ್ನು ಕೈಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಹೆಚ್ಚುವರಿ ಜಿಲ್ಲಾದಿಕಾರಿ ಸದಾಶಿವ ಪ್ರಭು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT