ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರ: ಮಾನವೀಯ ದೃಷ್ಟಿ ಇರಲಿ

ಕೋವಿಡ್‌ ಸೋಂಕು ತಡೆಗೆ ಪರೀಕ್ಷೆ ಹೆಚ್ಚುಮಾಡಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ
Last Updated 11 ಆಗಸ್ಟ್ 2020, 16:08 IST
ಅಕ್ಷರ ಗಾತ್ರ

ಉಡುಪಿ: ನೆರೆ ಪರಿಹಾರ ಕಾರ್ಯ ಹಾಗೂ ಕೋವಿಡ್ ಸೋಂಕು ನಿಯಂತ್ರಣ ಕಾರ್ಯವನ್ನು ಸವಾಲಾಗಿ ಸ್ವೀಕರಿಸಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವರೂ ಆದ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಳೆಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು,ನೆರೆ ಪರಿಹಾರ ಕಾರ್ಯಗಳಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಯುವ ಸ್ವಯಂ ಸೇವಕರನ್ನೊಳಗೊಂಡ ತಂಡಕ್ಕೆ ತರಬೇತಿ ನೀಡಿ ವಿಪತ್ತು ನಿರ್ವಹಣಾ ಯೋಜನೆ ರೂಪಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಮಿತಿಯ ಮೇಲಸ್ತುವಾರಿಯನ್ನು ತಾಲ್ಲೂಕು ಪಂಚಾಯಿತಿ ಇಒಗಳು, ಜಿಲ್ಲಾ ಮಟ್ಟದಲ್ಲಿ ಉಪ ಕಾರ್ಯದರ್ಶಿಗಳು ನಿರ್ವಹಿಸಿ ಪ್ರತಿದಿನ ವರದಿ ಸಿದ್ಧಪಡಿಸಬೇಕು ಎಂದರು.

ಗ್ರಾಮ ಪಂಚಾಯಿತಿಗಳು ಭೌಗೋಳಿಕವಾಗಿ ವಿಭಿನ್ನವಾಗಿದ್ದು ಅದರನ್ವಯ ಯೋಜನೆ ರೂಪಿಸಿ ಸಾವು ನೋವುಗಳಾಗದಂತೆ, ಆಸ್ತಿಗೆ ಹಾನಿಯಾಗದಂತೆ ಕ್ರಮ ವಹಿಸಬೇಕು ಎಂದರು.

ಮಳೆ ಹಾನಿ ಹಾಗೂ ಗಾಳಿಯ ಅಬ್ಬರದಿಂದ ಅನಾಹುತಗಳು ಹೆಚ್ಚುತ್ತಿದ್ದು, ಈ ಬಗ್ಗೆ ಹೆಚ್ಚು ಗಮನಹರಿಸಬೇಕು. ಅತಿಯಾದ ಮಳೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ನಾಶವಾಗುತ್ತಿವೆ. ಮಣ್ಣಿನ ಸವಕಳಿ ಆಧರಿಸಿ ಪ್ರಾಥಮಿಕ ಸರ್ವೇ ಮಾಡಿದಾಗ ಸರಿಯಾದ ನಷ್ಟ ಪರಿಹಾರ ನೀಡಲು ಸಾಧ್ಯ. ಇದರನ್ವಯ ಗ್ರಾಮ ಲೆಕ್ಕಿಗರು, ಪಿಡಿಒಗಳು ಹಾಗೂ ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ನಡೆಸಿದರೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಡಿ ಹೆಚ್ಚು ಪರಿಹಾರ ನೀಡಲು ಸಾಧ್ಯ ಎಂದರು.

ಜಿಲ್ಲೆಯಲ್ಲಿ 2,115 ಮೀಟರ್ ಸಮುದ್ರ ಕೊರೆತ ಸಂಭವಿಸಿದ್ದು, ₹ 18.95 ಕೋಟಿ ನಷ್ಟವಾಗಿದ್ದು, ಅಂದಾಜು ಪಟ್ಟಿ ಸಲ್ಲಿಸಿದರೆ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು.

ಶಾಸಕ ರಘುಪತಿ ಭಟ್ ಮಾತನಾಡಿ, ಮನೆ ಹಾನಿ ಪರಿಹಾರ ಹಣದ ಬಾಕಿ ಕಂತು ಬಿಡುಗಡೆಗೆ ಹಾಗೂ ಜಿಲ್ಲಾ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.

ಕಾರ್ಕಳ ಶಾಸಕ ಸುನೀಲ್ ಕುಮಾರ್ ಮಾತನಾಡಿ, ‘94 ಸಿ ಅಡಿ ಮನೆ ಮಂಜೂರಾಗಿ, ಹಕ್ಕುಪತ್ರ ದೊರೆಯದವ ಮನೆಗಳಿಗೆ ಮಳೆಯಿಂದ ಹಾನಿಯಾದರೆ ಪರಿಹಾರಕ್ಕೆ ಪರಿಗಣಿಸುವಂತೆ ಮನವಿ ಮಾಡಿದರು.

ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಸಿಇಒ ಪ್ರೀತಿ ಗೆಹ್ಲೋಟ್‌, ಎಸ್‌ಪಿ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT