ಭಾನುವಾರ, ಜುಲೈ 25, 2021
22 °C
ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ

ಮುಲಾಜಿಲ್ಲದೆ ಪ್ರಕರಣ ದಾಖಲಿಸಿ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ 1,547 ಮಂದಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದರೂ 8 ಮಂದಿಯ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಮೊದಲ ಬಾರಿ ಎಚ್ಚರಿಕೆ ಕೊಟ್ಟು ಎರಡನೇ ಬಾರಿ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ 1,236 ಮಂದಿಗೆ ಕೇವಲ ಎಚ್ಚರಿಕೆ ನೀಡಿ, ಒಂದಕ್ಕಿಂತ ಹೆಚ್ಚುಬಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸದೆ ನಿರ್ಲಕ್ಷ್ಯ ತೋರಿರುವುದು ಸರಿಯಲ್ಲ’.

‘ಸರ್ಕಾರದ ನಿಯಮ ಪಾಲಿಸದಿದ್ದರೆ ಪ್ರಕರಣ ದಾಖಲಿಸಿ, ವರದಿ ನೀಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಬೇಕಾಗುತ್ತದೆ’ ಎಂದು ತಹಶೀಲ್ದಾರ್‌ಗಳಿಗೆ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಿಯಮ ಉಲ್ಲಂಘನೆ ಪ್ರಕರಣಗಳ ಬಗ್ಗೆ ನಿತ್ಯ ವರದಿ ನೀಡಬೇಕು. ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸುವ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಪ್ರಕರಣ ದಾಖಲಿಸುವಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಪೂರಕ ವಾತಾವರಣವಿದ್ದು, ಅಧಿಕಾರಿಗಳು ಸರ್ಕಾರದ ಸೂಚನೆಗಳನ್ನು ಸಮರ್ಪಕ ಅನುಷ್ಠಾನ ಮಾಡಬೇಕಿದೆ. ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದ್ದು, ಸನ್ಮಾನ, ಸಮಾರಂಭ ಆಯೋಜನೆ ಮಾಡುವವರ ವಿರುದ್ಧ ಹಾಗೂ ಬಸ್‌ಗಳಲ್ಲಿ ಅಂತರ ಇಲ್ಲದಿದ್ದರೆ ಪ್ರಕರಣ ದಾಖಲಿಸಿ ಎಂದು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಸಾರ್ವಜನಿಕರು ಕಾನೂನು ಪಾಲನೆಯ ವಿಚಾರದಲ್ಲಿ ಮಾದರಿಯಾಗಿದ್ದಾರೆ. ಸ್ಲಂಗಳು ಇಲ್ಲದಿರುವುದರಿಂದ ಅಂತರ ಕಾಯ್ದುಕೊಳ್ಳುವುದು ಕಷ್ಟವೇನಲ್ಲ. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕಷ್ಟೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್‌ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು