ಉಡುಪಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು.
ಬೈಂದೂರಿನ ಶಿರೂರು ಗೇಟ್‌ನಿಂದ ಕಾಪು ತಾಲ್ಲೂಕಿನ ಹೆಜಮಾಡಿ ಸೇತುವೆಯವರೆಗೆ (107 ಕಿ.ಮೀ.) ಶಾಲಾ–ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕೈ ಕೈ ಹಿಡಿದು ಮಾನವ ಸರಪಳಿ ರಚಿಸಿದರು.
ಜಿಲ್ಲಾ ಮಟ್ಟದ ಕಾರ್ಯಕ್ರಮ ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ನಡೆಯಿತು. ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಚೆಂಡೆ ಬಡಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿನ ಭದ್ರ ಬುನಾದಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ 500 ಮೀಟರ್ ಉದ್ದದ ಹಾಗೂ 3 ಮೀಟರ್ ಅಗಲದ ಬೃಹತ್ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜವನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಸಾರ್ವಜನಿಕರು ಧ್ವಜದ ಎರಡೂ ಬದಿಯನ್ನು ಹಿಡಿದುಕೊಂಡು ಬಿಸಿಲನ್ನೂ ಲೆಕ್ಕಿಸದೆ ನಿಂತಿದ್ದರು.
ಚಂಡೆ ಮೇಳ, ಕಂಗೀಲು, ಯಕ್ಷಗಾನ ವೇಷಗಳು ಹಾಗೂ ವಿವಿಧ ಕಲಾ ತಂಡಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದವು.
ಮಾನವ ಸರಪಳಿಯಲ್ಲಿ ಭಾಗವಹಿಸಿದವರು ಸಂವಿಧಾನದ ಪೀಠಿಕೆ ಭಾಗವನ್ನು ಓದಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಪ್ರಕಟಿಸಿರುವ ಪ್ರಜಾಪ್ರಭುತ್ವ ಆಶಯದ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಡಿ.ಎಫ್.ಒ ಗಣಪತಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಸ್ವಾತಂತ್ರ್ಯ ಹೋರಾಟಗಾರ ಮಲ್ಪೆ ರಾಘವೇಂದ್ರ ಇದ್ದರು.
ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಯ 1,48,322 ಮಂದಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು.
ನಮ್ಮ ಜವಾಬ್ದಾರಿಗಳನ್ನು ಅರ್ಥೈಸಿಕೊಂಡಾಗ ಮಾತ್ರ ನಮ್ಮ ಹಕ್ಕುಗಳಿಗೆ ಅರ್ಥ ಬರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣನವರ್ ಹೇಳಿದರು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾಗರಿಕನ ಜವಾಬ್ದಾರಿಯುತ ನಡವಳಿಕೆಯಿಂದ ದೇಶದ ಶಾಂತಿ ಸುವ್ಯವಸ್ಥೆ ಚೆನ್ನಾಗಿರುತ್ತದೆ. ಸಂವಿಧಾನದ ಆಶಯಗಳನ್ನು ನಮ್ಮ ನಡವಳಿಕೆಯಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ವಿಚಾರಗಳನ್ನು ನಿತ್ಯ ಜೀವನದಲ್ಲಿ ಪಾಲಿಸಿದಾಗ ಸ್ವಾತಂತ್ರ‍್ಯ ತಂದುಕೊಟ್ಟ ಮಹಾತ್ಮರ ಬಲಿದಾನಗಳಿಗೆ ಅರ್ಥ ಬರುತ್ತದೆ ಎಂದರು. ಪ್ರತಿ ಪ್ರಜೆಯನ್ನು ನಮ್ಮ ಸಂವಿಧಾನ ಪ್ರಭು ಎಂದು ಒಪ್ಪಿಕೊಂಡಿದೆ. ಸಂವಿಧಾನವನ್ನು ನಿರ್ವಹಿಸುವ ಜನರು ಎಷ್ಟು ಉತ್ತಮವಾಗಿರುತ್ತಾರೋ ಸಂವಿಧಾನವು ಅಷ್ಟೇ ಉತ್ತಮವಾಗಿರುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.