ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿ ಮುಗಿಸಿ: ಮನೋಜ್ ಜೈನ್

Last Updated 6 ಡಿಸೆಂಬರ್ 2022, 13:57 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡಿರುವ ಯೋಜನೆಗಳು, ಅಭಿವೃದ್ಧಿ ಕಾರ್ಯ, ಕಾರ್ಯಕ್ರಮಗಳು ನಿಗದಿತ ಅವಧಿಯೊಳಗೆ ಗರಿಷ್ಠ ಅನುದಾನ ಬಳಕೆಯೊಂದಿಗೆ ಅನುಷ್ಠಾನಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹೇಳಿದರು.

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಜನಪರ ಯೋಜನೆ, ಕಾರ್ಯಕ್ರಮ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ರೂಪಿಸಿ ಅನುದಾನ ಒದಗಿಸಿದೆ. ಸಂಬಂಧಪಟ್ಟ ಇಲಾಖೆಗಳು ಭೌತಿಕ, ಆರ್ಥಿಕ ಗುರಿ ಸಾಧಿಸಬೇಕು. ಪ್ರಾಕೃತಿಕ ವಿಕೋಪದಡಿ ನೀಡಿರುವ ಮೂಲಸೌಕರ್ಯಗಳ ಅಭಿವೃದ್ಧಿ ಅನುದಾನ ಬಳಕೆ ಕಾಮಗಾರಿ ಕಾಲಮಿತಿಯಲ್ಲಿ ನಡೆಯಬೇಕು ಎಂದರು.

ಕಂದಾಯ ಇಲಾಖೆ ಅಡಿಯಲ್ಲಿ ವಿವಿಧ ಸವಲತ್ತುಗಳು, ಭೂ ದಾಖಲೆಗಳ ಬದಲಾವಣೆ, ಸರ್ವೇ, ಜಮೀನು ಕೋರಿ ಸಲ್ಲಿಕೆಯಾಗುವ ಅರ್ಜಿ, ಅಕ್ರಮ ಸಕ್ರಮ ಕೋರಿ ಬಂದ ಅರ್ಜಿಗಳನ್ನು ನಿಯಮಾನುಸಾರ ವಿಳಂಬವಿಲ್ಲದೆ ವಿಲೇವಾರಿ ಮಾಡಬೇಕು.

ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸುರಿಯುವುದರಿಂದ ಮಳೆಗಾಲದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿದು ಜನರ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ಅವಶ್ಯಕತೆಗನುಗುಣವಾಗಿ ಕಾಲು ಸಂಕಗಳ ನಿರ್ಮಾಣ ಆದ್ಯತೆಯ ಮೇಲೆ ನಡೆಯಬೇಕು ಎಂದು ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತರು ಚಿಕಿತ್ಸೆಗೆ ಆಸ್ಪತ್ರೆಗಳಿಗೆ ಬಂದರೆ ಆರೋಗ್ಯ ಮಿತ್ರ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡಬೇಕು.

ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಕಾಯ್ದಿರಿಸಿರುವ ಬೆಡ್‌ಗಳು ಯೋಜನೆಯಡಿ ಉಪಯುಕ್ತವಾಗುವಂತೆ ಮೇಲ್ವಿಚಾರಣೆ ನಡೆಸಬೇಕು. ಜನಸಾಮಾನ್ಯರಿಗೆ ಅನುಕೂಲವಾಗಲು ಸಹಾಯವಾಣಿ ಆರಂಭಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೈಗೊಂಡಿರುವ ಜಲ ಜೀವನ್ ಮಿಷನ್ ಯೋಜನೆಯಡಿ ನಳ್ಳಿ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ನಗರ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವ ಅಮೃತ್ ಹಾಗೂ ನಗರೋತ್ಥಾನ ಯೋಜನೆಗಳ ಅನುದಾನಗಳ ಸಮರ್ಪಕ ಬಳಕೆಯೊಂದಿಗೆ ಕಾಮಗಾರಿ ಪೂರ್ಣಗೊಳಿಸಿ ಜನಸಾಮಾನ್ಯರಿಗೆ ಯೋಜನೆಗಳ ಪ್ರಯೋಜನ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ, ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್‌.ವೀಣಾ,ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT