ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿದಿನ 4 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ಮಾಡಿ-ಎಂ.ಟಿ.ರೇಜು

ಜಿಲ್ಲೆಯಲ್ಲಿ ಎರಡನೇ ಅಲೆ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಟಿ.ರೇಜು
Last Updated 9 ಏಪ್ರಿಲ್ 2021, 15:27 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಕೋವಿಡ್ ಪರೀಕ್ಷಾ ಪ್ರಮಾಣ ಹೆಚ್ಚಿಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಪಾಸಿಟಿವಿಟಿ ಪ್ರಮಾಣ ಕಡಿಮೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ.ರೇಜು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿ, ಕೋವಿಡ್‌ ಎರಡನೇ ಅಲೆಯಲ್ಲಿ ಯುವ ಜನಾಂಗ ಹಾಗೂ ಶಾಲಾ ವಿದ್ಯಾರ್ಥಿಗಳಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಇದರಿಂದ ಕುಟುಂಬದ ಹಿರಿಯ ನಾಗರಿಕರಿಗೆ ಸೋಂಕು ಹರಡುವ ಅಪಾಯಗಳಿದ್ದು, ಈ ಬಗ್ಗೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸರ್ಕಾರ ನಿಗದಿ ಪಡಿಸಿರುವಂತೆ ಪ್ರತಿದಿನ 4,000 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಬೇಕು. ಸೋಂಕಿತರನ್ನು ಶೀಘ್ರವಾಗಿ ಪತ್ತೆ ಹಚ್ಚಿ, ಸೋಂಕು ಹರಡುವಿಕೆಗೆ ಕಡಿವಾಣ ಹಾಕಬೇಕು ಎಂದು ಡಾ.ರೇಜು ಸೂಚಿಸಿದರು.

ಪ್ರಸ್ತುತ ಸೋಂಕಿತರಲ್ಲಿ ರೋಗದ ಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಅಂಥವರನ್ನು ಹೋಂ ಐಸೋಲೇಷನ್‌ಗೆ ಒಳಪಡಿಸಬೇಕು. ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆಯಾಗದಂತೆ ಹಾಗೂ ಲಸಿಕೆ ಕೊರತೆಯಾಗದಂತೆ ಎಚ್ಚರವಹಿಸಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟವ ಹೆಚ್ಚಿನವರಿಗೆ ಲಸಿಕೆ ಹಾಕುವ ಮೂಲಕ ಅಪಾಯ ತಪ್ಪಿಸಬೇಕು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲೂ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಬೇಕು. ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣ ಕ್ರಮಗಳು ಪಾಲನೆಯಾಗುತ್ತಿರುವ ಕುರಿತು ಪರಿಶೀಲಿಸಿ ಸರ್ಕಾರದ ಸೂಚನೆಯಂತೆ ಮಾಸ್ಕ್ ಧರಿಸದ ಹಾಗೂ ಅಂತರ ಕಾಯ್ದುಕೊಳ್ಳದವರ ವಿರುದ್ಧ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್‌ ಭಟ್, ಎಎಸ್‌ಪಿ ಕುಮಾರಚಂದ್ರ, ಡಿಎಚ್‌ಒ ಡಾ.ಸುದೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್‌ ಡಾ.ಮಧುಸೂದನ್‌ ನಾಯಕ್, ಕೋವಿಡ್ ವಿಶೇಷಾಧಿಕಾರಿ ಡಾ.ಪ್ರೇಮಾನಂದ ಹಾಗೂ ಆರೋಗ್ಯಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT