ಮಂಗಳವಾರ, ಮೇ 24, 2022
31 °C
ಜನ ಸ್ವರಾಜ್ ಸಮಾವೇಶದಲ್ಲಿ ಬಿಜೆಪಿ ನಾಯಕರಿಂದ ಮತದಾರರಿಗೆ ಕರೆ

ಪರಿಷತ್‌ ಚುನಾವಣೆಯಲ್ಲಿ ಭಾರಿ ಮತಗಳಿಂದ ಕೋಟ ಗೆಲುವು: ಶೋಭಾ ಕರಂದ್ಲಾಜೆ ಭವಿಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯ 155 ಪಂಚಾಯಿತಿಗಳ ಪೈಕಿ 117ರಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಚುಕ್ಕಾಣಿ ಹಿಡಿದಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜ್ಯದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದರು.

ನಗರದ ಪುರಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಪರಿಷತ್‌ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹತೆ ಪಡೆದಿರುವ ಜಿಲ್ಲೆಯ 2,368 ಮತದಾರರ ಪೈಕಿ 1,500ಕ್ಕೂ ಹೆಚ್ಚು ಮಂದಿ ಬಿಜೆಪಿ ಬೆಂಬಲಿತರಾಗಿದ್ದು, ಕೋಟ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಫೆಬ್ರುವರಿಯಲ್ಲಿ ಉತ್ತರ ಪ್ರದೇಶದ ಚುನಾವಣೆ ನಡೆಯಲಿದ್ದು, ಪೂರ್ವಭಾವಿಯಾಗಿ ದಕ್ಷಿಣ ಭಾರತದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ದೇಶದ ಗಮನ ಸೆಳೆದಿದೆ. 25 ಪರಿಷತ್ ಸ್ಥಾನಗಳ ಪೈಕಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದರು.

ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್‌ಗೆ ಸೂಕ್ತ ಹಾಗೂ ಸಮರ್ಥ ಸಭಾ ನಾಯಕ. ಸದನದಲ್ಲಿ ಮಂತ್ರಿಗಳು ಗೈರಾದರೆ, ಸಚಿವರು ಉತ್ತರಿಸಲು ತಡವರಿಸಿದರೆ ತಕ್ಷಣ ಬೆಂಬಲಕ್ಕೆ ನಿಲ್ಲುವ ಚಾಕಚಕ್ಯತೆ ಹೊಂದಿರುವಂತಹ ನಾಯಕ ಕೋಟ ಶ್ರೀನಿವಾಸ ಪೂಜಾರಿ. ಕೋಟ ಅವರಂಥವರು ಪರಿಷತ್‌ನಲ್ಲಿರಬೇಕು ಎಂದು ಅಭಿಪ್ರಾಯಪಟ್ಟರು.

ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಮಾತನಾಡಿ, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನ ಪರಿಷತ್‌ನಿಂದ ಗೆದ್ದು ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಬಾರಿಯೂ ವಿಧಾನ ಪರಿಷತ್‌ಗೆ ಆಯ್ಕೆಯಾಗಬೇಕು. ನೂತನ ಸಚಿವರು ವಿಧಾನ ಪರಿಷತ್ ಪ್ರವೇಶಿಸಿದಾಗ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಂಬಲಕ್ಕೆ ನಿಂತು ವಿರೋಧ ಪಕ್ಷಗಳ ಸದಸ್ಯರ ಟೀಕೆಗಳಿಗೆ ಪ್ರತ್ಯುತ್ತರ ನೀಡಿದರು. ಕೋಟ ಅವರಂಥವರು ಪರಿಷತ್‌ನಲ್ಲಿ ಇರಲೇಬೇಕು ಎಂದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಮಾತನಾಡಿ, ಪರಿಷತ್‌ನಲ್ಲಿ ಬಿಜೆಪಿಗೆ ಅಗತ್ಯ ಸ್ಥಾನಗಳ ಕೊರೆತೆ ಇದ್ದು, ಈ ಬಾರಿಯ ಚುನಾವಣೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ವಿಧಾನ ಪರಿಷತ್‌ನಲ್ಲಿ ಆಡಳಿತ ಪಕ್ಷದ ಧ್ವನಿಯಾಗಿ, ಗ್ರಾಮ ಪಂಚಾಯಿತಿ ಸದಸ್ಯರ ಪರವಾಗಿ ಕೋಟ ಸಾಕಷ್ಟು ಕೆಲಸ ಮಾಡಿದ್ದಾರೆ. ಚುನಾವಣೆಯ ಹೊತ್ತಿನಲ್ಲಿ ಆಸೆ ಆಮಿಷಗಳಿಗೆ ಕಟ್ಟುಬೀಳದೆ ಮತದಾರರು ಕೋಟ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮೀನುಗಾರಿಕಾ ಸಚಿವ ಎಸ್‌.ಅಂಗಾರ, ಶಾಸಕರಾದ ಕೆ.ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಉಮಾನಾಥ್ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಸಂಚಾಲಕ ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್‌, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶಂಕರ್ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ವೇದಿಕೆಯಲ್ಲಿದ್ದರು

‘ಬಿಜೆಪಿಗೆ ಅಭ್ಯರ್ಥಿಗೆ ಎಲ್ಲ ಮತ’

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 2,368 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದು, 1,501 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದು, ಕಾಂಗ್ರೆಸ್‌ಗಿಂತ ಎರಡು ಪಟ್ಟು ಹೆಚ್ಚು ಬೆಂಬಲಿತರಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವಿಗೆ ಯಾವ ಅಡ್ಡಿಯೂ ಇಲ್ಲ. ಆದರೆ, ಗೆಲುವಿನ ಅಂತರ ಹೆಚ್ಚಾಗಿರಬೇಕು. ಮತದಾರರು ವಿಚಲಿತರಾಗಬಾರದು. ಒಂದು ಮತವೂ ಆಚೀಚೆ ಆಗಬಾರದು. ಇದು ಪಕ್ಷದ ಗೌರವ ಪ್ರಶ್ನೆಯಾಗಿದ್ದು, ಎಲ್ಲ ಮತಗಳೂ ಬಿಜೆಪಿ ಅಭ್ಯರ್ಥಿಗೇ ಹಾಕಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಹೇಳಿದರು.

‘ಕಾಂಗ್ರೆಸ್ ಬುರುಡೆ ಪಕ್ಷ’

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಹೆಚ್ಚಿನ ಸದಸ್ಯರು ಕಾಂಗ್ರೆಸ್‌ ಬೆಂಬಲಿತರು ಎಂದು ಕೈ ಪಕ್ಷ ಬುರುಡೆ ಬಿಡುತ್ತಿದೆ. ಉಡುಪಿಯ ಸಮಾವೇಶ ಕಾಂಗ್ರೆಸ್‌ಗೆ ಸತ್ಯದ ಅರಿವಾಗುವಂತೆ ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳನ್ನು 100ರಿಂದ 150ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರದಿಂದ ಗ್ರಾಮ ಪಂಚಾಯಿತಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹೇಳಿದರು.

‘ತೆಲೆಕೆಳಗಾದ ಲೆಕ್ಕಾಚಾರ’

2008ರಲ್ಲಿ ಪರಿಷತ್‌ ಚುನಾವಣೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ ಎಂದು ರಾಜಕೀಯ ಪಂಡಿತರು ಭವಿಷ್ಯ ನುಡಿದಿದ್ದರು. ಆದರೆ, ಅವರ ಲೆಕ್ಕಾಚಾರಗಳೆಲ್ಲ ತಲೆಕೆಳಗಾಗಿ 350 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಮೆಲುಕು ಹಾಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು