ಸೋಮವಾರ, ಸೆಪ್ಟೆಂಬರ್ 26, 2022
24 °C
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಉದ್ಘಾಟಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ

ಜಂತುಹುಳ ನಿವಾರಣೆಗೆ ಸ್ವಚ್ಛತೆ ಅತ್ಯಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಶುಚಿತ್ವ ಇಲ್ಲದಿರುವುದು ಮಕ್ಕಳಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಲು ಕಾರಣವಾಗುತ್ತದೆ. ಆದ್ದರಿಂದ ಸ್ವಚ್ಛತೆಯನ್ನು ರೂಢಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್‌.ವೀಣಾ ಸಲಹೆ ನೀಡಿದರು.

ಉಡುಪಿಯ ಸರ್ಕರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಲಯನ್ಸ್ ಕ್ಲಬ್ ಉಡುಪಿ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಓದಿನ ಕಡೆ ಹೆಚ್ಚು ಗಮನ ಹರಿಸಲು ಆರೋಗ್ಯ ಬಹಳ ಮುಖ್ಯ. ಜಂತುಹುಳದ ಸಮಸ್ಯೆಯಿಂದ ಮಕ್ಕಳಲ್ಲಿ ರಕ್ತ ಹೀನತೆ ಉಂಟಾಗಿ ಅಪೌಷ್ಟಿಕತೆ ಕಾಣಿಸಿಕೊಳ್ಳುತ್ತದೆ. ಇದರಿಂದ ಮಕ್ಕಳ ಬೆಳವಣೆಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಶಿಕ್ಷಣದ ಜತೆಗೆ ಆರೋಗ್ಯದ ಕಾಳಜಿಯೂ ಬಹಳ ಮುಖ್ಯ ಎಂದು ಕಿವಿಮಾತು ಹೇಳಿದರು.

ಜಂತು ಹುಳದ ಬಾಧೆ ನಿವಾರಣೆಗೆ ಸ್ವಚ್ಛತೆ ಬಹಳ ಪ್ರಾಮುಖ್ಯವಾಗಿದ್ದು ವಿದ್ಯಾರ್ಥಿಗಳು ಕೈ ಕಾಲುಗಳನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಕೈ ತೊಳೆಯದೆ ಆಹಾರ ಸೇವನೆ ಮಾಡುವ ದುರಭ್ಯಾಸಗಳನ್ನು ನಿಲ್ಲಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ಹಾಗೂ ಸ್ವಸ್ಥ ಭಾರತ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಕೆ. ಶಿವರಾಜ್ ಮಾತನಾಡಿ ಉತ್ತಮ ಆರೋಗ್ಯ ಇಲ್ಲದಿದ್ದರೆ ಸಂಪತ್ತು ಇದ್ದರೂ ನಿಷ್ಪ್ರಯೋಜಕವಾಗುತ್ತದೆ. ಆರೋಗ್ಯವೇ ಭಾಗ್ಯ ಎಂಬಂತೆ ಸದಾ ಆರೋಗ್ಯದ ಕಾಳಜಿಯನ್ನು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳ ಬಾಧೆ ನಿವಾರಣೆ ಮಾತ್ರೆಗಳನ್ನು ವಿತರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿ.ವೈ.ಪಿ.ಸಿ ಸಮಗ್ರ ಶಿಕ್ಷಣ ಇಲಾಖೆಯ ಚಂದ್ರನಾಯ್ಕ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೀಲಾ ಭಟ್, ಪೌಢಶಾಲಾ ಮುಖ್ಯೋಪಧ್ಯಾಯೆ ಶಾಂತಿ ಪೈ, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾತ್ವಿಕ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು