ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿದುಳು ಜ್ವರ ತಡೆಗೆ ಜೆಇ ಲಸಿಕೆ ಹಾಕಿಸಿ

ಸೋಂಕು ಮಾರಣಾಂತಿಕ; ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗುವ ಅಪಾಯ: ಜಿಲ್ಲಾಧಿಕಾರಿ ಕೂರ್ಮಾರಾವ್
Last Updated 5 ಡಿಸೆಂಬರ್ 2022, 13:21 IST
ಅಕ್ಷರ ಗಾತ್ರ

ಉಡುಪಿ: 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಮಿದುಳು ಜ್ವರ ಬಾಧಿಸದಂತೆ ತಡೆಯಲು ಜೆಇ ಲಸಿಕೆ ಪಡೆಯುವುದು ಅತಿ ಅವಶ್ಯಕವಾಗಿದ್ದು, ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಜೆಇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಸೋಮವಾರ ನಡೆದ ಮಿದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಗಗಳು ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗಗಳು ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಗತ್ಯ ಲಸಿಕೆಗಳನ್ನು ಪಡೆಯವುದು ಉತ್ತಮ. ಮಿದುಳು ಜ್ವರವು 1 ರಿಂದ 15 ವರ್ಷದೊಳಗಿನ ಮಕ್ಕಳನ್ನು ಹೆಚ್ಚು ಭಾಧಿಸುವುದರಿಂದ ಜೆಇ ಲಸಿಕೆ ಹಾಕಿಸಬೇಕು.

ಮಿದುಳು ಜ್ವರದಿಂದ ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಬರಬಹುದು. ಮರಣ ಸಂಭವಿಸುವ ಅಪಾಯವೂ ಹೆಚ್ಚಾಗಿರುತ್ತದೆ. ಪೋಷಕರು ಮಕ್ಕಳಿಗೆ ಜೆ.ಇ ಲಸಿಕೆ ಕೊಡಿಸಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲ ಎಂದರು.

ಜಿಲ್ಲೆಯಲ್ಲಿ ಲಸಿಕಾ ಅಭಿಯಾನದಡಿ 2,18,324 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. ಲಸಿಕಾಕರಣಕ್ಕೆ 1,932 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಮುದಾಯ ಮಟ್ಟದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೋಗ್ಯ ಇಲಾಖೆ ಸಿಬ್ಬಂದಿ ಅಭಿಯಾನದಲ್ಲಿ ಭಾಗವಹಿಸಲಿದ್ದು ಶೇ100 ಗುರಿ ಸಾಧಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಡಾ.ವೀಣಾ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ.ಕೀರ್ತಿನಾಥ್ ಬಲ್ಲಾಳ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವೀಣಾ ವಿವೇಕಾನಂದ, ಬೋರ್ಡ್ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯನಿ ಶಾಂತಿ ಪೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ವಂದಿಸಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಂ.ಜಿ.ರಾಮ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT