ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳನ್ನು ದುಡಿಸಿಕೊಂಡರೆ ಕಠಿಣ ಕಾನೂನು ಕ್ರಮ

ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಸ್‌.ಶರ್ಮಿಳಾ ಎಚ್ಚರಿಕೆ
Last Updated 1 ಜುಲೈ 2022, 13:49 IST
ಅಕ್ಷರ ಗಾತ್ರ

ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಕಡ್ಡಾಯವಾಗಿ ಸಿಗಬೇಕು. ಶಿಕ್ಷಣ ಮೊಟಕುಗೊಳಿಸಿ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ ಕಾರ್ಮಿಕ ಪದ್ಧತಿ ಕಂಡುಬಂದರೆ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್‌.ಶರ್ಮಿಳಾ ಎಚ್ಚರಿಕೆ ನೀಡಿದರು.

ಮಲ್ಪೆಯ ಓಷಿಯನ್ ಫ್ರೆಶ್ ಎಕ್ಸ್‌ಪೋರ್ಟ್‌ ಸಂಸ್ಥೆಯಲ್ಲಿ ಈಚೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಬಾಲ ಕಾರ್ಮಿಕರನ್ನು ದುಡಿಸಿಕೊಂಂಡರೆ 6 ತಿಂಗಳಿನಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹ 20,000 ದಿಂದ ₹ 50,000ದವರೆಗೆ ದಂಡ ವಿಧಿಸಬಹುದು ಎಂದರು.

ಬಾಲ ಕಾರ್ಮಿಕರನ್ನು ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಮಾತನಾಡಿ, ಬಾಲ ಕಾರ್ಮಿಕರ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಡಿ, ಜಿಲ್ಲೆಯಲ್ಲಿ ನಿರಂತರ ಯೋಜಿತ ಹಾಗೂ ಅನಿರೀಕ್ಷಿತ ದಾಳಿ ನಡೆಸಲಾಗುತ್ತಿದ್ದು, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಕೆಲಸದಿಂದ ಬಿಡುಗಡೆಗೊಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿವಾಕರ ಕುಮಾರ್, ಓಷಿಯನ್ ಫ್ರೆಶ್ ಎಕ್ಸ್‌ಪೋರ್ಟ್‌ ಪಾಲುದಾರ ರಾಮಚಂದ್ರ ಕುಂದರ್ ಉಪಸ್ಥಿತರಿದ್ದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತಾ ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT