ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನ್ನಡ ಭಾಷೆ ಜನರ ಉಸಿರಾಗಲಿ: ಸುಗುಣೇಂದ್ರತೀರ್ಥ ಸ್ವಾಮೀಜಿ

ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿದ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ
Published : 14 ಸೆಪ್ಟೆಂಬರ್ 2024, 6:16 IST
Last Updated : 14 ಸೆಪ್ಟೆಂಬರ್ 2024, 6:16 IST
ಫಾಲೋ ಮಾಡಿ
Comments

ಉಡುಪಿ: ‘ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಜನರ ಉಸಿರಾಗಲಿ’ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದಲ್ಲಿ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗಾಗಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಪಡೆಯುವುದಕ್ಕಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಮಕ್ಕಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಮಾತನಾಡಿ, ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯಲಿರುವ ಬಹು ಸಂಸ್ಕೃತಿ ಉತ್ಸವಕ್ಕೆ ಪೂರಕವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ರಾಷ್ಟ್ರೀಯ ಹಬ್ಬಗಳು, ಆಚಾರ- ವಿಚಾರ, ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ದೇಶದ ಸುಸಂಸ್ಕೃತ ಪ್ರಜೆಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ ₹3,000, ದ್ವಿತೀಯ ಬಹುಮಾನ ₹2,000, ತೃತೀಯ ಬಹುಮಾನ ₹1,000 ಹಾಗೂ 5 ಸಮಾಧಾನಕರ ಬಹುಮಾನಗಳನ್ನು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ಮಂಗಳೂರು ವಲಯ ಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫೋರಂ ವತಿಯಿಂದ ವಿಜೇತ ಮಕ್ಕಳಿಗೆ ನಗದು ಬಹುಮಾನ ವಿತರಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಆರ್ಟಿಸ್ಟ್ ಫೋರಂ ಉಡುಪಿ ಕಾರ್ಯದರ್ಶಿ ಸಕು ಪಾಂಗಾಳ, ಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಪ್ರಾಸ್ತಾವಿಕ ಮಾತನಾಡಿದರು. ಕೃಷ್ಣಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT