ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಪ್‌ನಲ್ಲಿ ಕಸಾಪ ಚುನಾವಣೆಗೆ ಚಿಂತನೆ: ರಾಜ್ಯ ಘಟಕದ ಅಧ್ಯಕ್ಷ ಡಾ.ಮಹೇಶ್‌ ಜೋಶಿ

Last Updated 20 ಡಿಸೆಂಬರ್ 2021, 15:37 IST
ಅಕ್ಷರ ಗಾತ್ರ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್‌ಗೆ ಪಾರದರ್ಶಕ ಹಾಗೂ ವೆಚ್ಚರಹಿತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆ್ಯಪ್‌ನಲ್ಲಿ (ಒಟಿಪಿ ಆಧಾರಿತ) ಮತದಾನಕ್ಕೆ ಅವಕಾಶ ನೀಡುವ ಚಿಂತನೆ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ.ಮಹೇಶ್ ಜೋಶಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಅಧಿಕಾರ ಸ್ವೀಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಕಸಾಪ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಒಮ್ಮೆ ಆಯ್ಕೆಯಾದವರು ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರದಂತೆ ತಿದ್ದುಪಡಿ ತರಲಾಗುವುದು ಮಹೇಶ್ ಜೋಶಿ ಹೇಳಿದರು.

ಕಸಾಪ ಅಜೀವ ಸದಸ್ಯತ್ವ ಶುಲ್ಕವನ್ನು ₹ 500 ರಿಂದ ₹ 250ಕ್ಕೆ ಇಳಿಸಲಾಗುವುದು. ಸದ್ಯ 3.40 ಲಕ್ಷ ಮಂದಿ ಇರುವ ಕಸಾಪ ಸದಸ್ಯತ್ವವನ್ನು 1 ಕೋಟಿಗೆ ಹೆಚ್ಚಿಸುವ ಗುರಿ ಇದ್ದು, ಮುಂದೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಸದಸ್ಯತ್ವ ಪಡೆಯಬಹುದು ಎಂದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ‘ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಶೀಘ್ರ ಕನ್ನಡ ಭವನ ನಿರ್ಮಾಣ ಮಾಡಲು ಬದ್ಧನಾಗಿದ್ದೇನೆ. ಚುನಾವಣೆಯಲ್ಲಿ ಗೆಲ್ಲಿಸಿದವರ ಆಶಯಕ್ಕೆ ಚ್ಯುತಿ ಬಾರದಂತೆ ಎಚ್ಚರಿಕೆಯ ಹೆಜ್ಜೆಗಳನ್ನಿಟ್ಟು ಪ್ರಾದೇಶಿಕ ಮತ್ತು ಸಾಮಾಜಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಾರ್ತಾ ಮತ್ತು ಪ್ರಸಾರ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಂಜುನಾಥ್, ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಕೋಟೇಶ್ವರ, ನರೇಂದ್ರ ಕುಮಾರ್ ಕೋಟ, ಸಿಂಚನಾ ಇದ್ದರು.

ಕಾರ್ಯಕ್ರಮದಲ್ಲಿ ಉದ್ಯಮಿ ವಿಶ್ವನಾಥ್ ಶೆಣೈ ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕಾಗಿ ₹ 1 ಲಕ್ಷ ದೇಣಿಗೆ ನೀಡುವುದಾಗಿ ಸಭೆಯಲ್ಲಿ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT