ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.1ರಿಂದ ಹಳ್ಳಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಕಡ್ಡಾಯವಾಗಲಿ

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧಿಕಾರಿಗಳಿಗೆ ಸೂಚನೆ
Last Updated 19 ಅಕ್ಟೋಬರ್ 2020, 13:50 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನ.1ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧವಾಗಬೇಕು. ಪಿಡಿಒಗಳು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪ್ಲಾಸ್ಟಿಕ್ ನಿಷೇಧಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಪ್ಲಾಸ್ಟಿಕ್ ನಿಷೇಧ ಕಾಯ್ದೆ 2016ರಲ್ಲಿ ಜಾರಿಗೆ ಬಂದಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಆದೇಶ ಪಾಲನೆಯಾಗುತ್ತಿಲ್ಲ. ಅಂಗಡಿ, ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ನೀಡಲಾಗುತ್ತಿದೆ. ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳಿದ್ದರೂ ಬಳಕೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ.1ರಿಂದ ಪ್ಲಾಸ್ಟಿಕ್ ಬಳಕೆ ನಿಷೇಧವಾಗಬೇಕು. ಪ‍್ಲಾಸ್ಟಿಕ್‌ ಬಳಸುವವರ ವಿರುದ್ಧ ಗ್ರಾಮ ಪಂಚಾಯಿತಿಗಳು ದಂಡ ವಿಧಿಸಬೇಕು. ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮಗಳ ಕುರಿತು ಈಗಿನಿಂದಲೇ ಜಾಗೃತಿ ಮೂಡಿಸಬೇಕು ಎಂದು ದಿನಕರ ಬಾಬು ಸೂಚಿಸಿದರು.

ತಾರಸಿ ತೋಟ ನಿರ್ವಹಣೆಯ ಕುರಿತು ಜಿಲ್ಲಾ ತೋಟಗಾರಿಕೆ ಇಲಾಖೆಯ ಕಟ್ಟಡದ ಮೇಲಿರುವ ಪ್ರಾತ್ಯಕ್ಷಿಕೆಯ ನಿರ್ವಹಣೆ ಸಮರ್ಪಕವಾಗಿ ನಡೆಸುವ ಮೂಲಕ ಸಾರ್ವಜನಿಕರಿಗೆ ತಾರಸಿ ತೋಟ ನಿರ್ಮಾಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ 15ರಷ್ಟು ಅಧಿಕ ಮಳೆಯಾಗಿದೆ, 4,375 ಮಿ.ಮೀ ವಾಡಿಕೆಗೆ ಪ್ರತಿಯಾಗಿ 5,051 ಮಿ.ಮೀ ಮಳೆ ಬಿದ್ದಿದೆ. 273 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಶೀಘ್ರ ಪರಿಹಾರ ವಿತರಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.

ಮಳೆಯಿಂದಾಗಿ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.8 ಹೆಕ್ಟೇರ್ ಮಟ್ಟುಗುಳ್ಳಕ್ಕೆ ಹಾನಿಯಾಗಿದೆ. ಎಕರೆಗೆ ₹ 20,000ದಂತೆ ಪರಿಹಾರ ವಿತರಣೆ ಮಾಡಲಾಗುವುದು ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು.

ಜಿಲ್ಲೆಯ ಪ್ರಮುಖ ಇಲಾಖೆಗಳಲ್ಲಿ ಅಧಿಕಾರಿಗಳ ಕೊರತೆಯಿದ್ದು, ಕೂಡಲೇ ಅಧಿಕಾರಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು. ಹಿರಿಯ ನಾಗರಿಕರ ಸಹಾಯವಾಣಿ ಸಿಬ್ಬಂದಿಗೆ ವರ್ಷದಿಂದ ವೇತನ ನೀಡದ ಕುರಿತು ಉಪಾಧ್ಯಕ್ಷೆ ಶೀಲಾ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಸಭೆಯಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಯೋಜನಾ ನಿರ್ದೇಶಕ ಗುರುದತ್, ಯೋಜನೆ, ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ರಾಧಾಕೃಷ್ಣ ಅಡಿಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT