ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಹತ್ಯೆ: ಲಿಂಗಾನುಪಾತ ಕುಸಿತ

ಹೆಣ್ಣು ಹೊರೆಯಲ್ಲ: ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ
Last Updated 24 ಜನವರಿ 2020, 16:13 IST
ಅಕ್ಷರ ಗಾತ್ರ

ಉಡುಪಿ: ಮಹಿಳೆಯರು ಸ್ವಾವಲಂಬಿಗಳಾಗಲು ಹಾಗೂ ಆರ್ಥಿಕವಾಗಿ ಸಬಲಳಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ ಹೇಳಿದರು.

ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಶಿಕ್ಷಣ ಇಲಾಖೆಯ ಜಂಟಿ ಸಹಯೋಗದಲ್ಲಿ ಮಲ್ಪೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಹೆಣ್ಣು-ಗಂಡುಗಳ ನಡುವಿನ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣು ಭ್ರೂಣ ಹತ್ಯೆ ತಡೆ ಕಾನೂನು ಜಾರಿಗೆ ತರಲಾಗಿದೆ. ಇದು ಹೆಣ್ಣುಭ್ರೂಣ ಹತ್ಯೆ ತಡೆಯುವದರ ಜತೆಗೆ, ಲಿಂಗಾನುಪಾತ ಕುಸಿಯದಂತೆ ತಡೆಯುತ್ತದೆ ಎಂದರು.

ಮಹಿಳೆಯರ ಸ್ವಾವಲಂಬನೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಲಾಭ ಮಧ್ಯವರ್ತಿಗಳ ಪಾಲಾಗದಂತೆ ಹಾಗೂ ಅರ್ಹರಿಗೆ ತಲುಪುವಂತೆ ಇಲಾಖೆಗಳು ಶ್ರಮಿಸುತ್ತಿವೆ. ಮಹಿಳೆಯರು ಯೋಜನೆಗಳ ಬಗ್ಗೆ ಅರಿವು ಹೊಂದುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಾವೇರಿ ಮಾತನಾಡಿ, ‘ಹೆಣ್ಣು ಮಕ್ಕಳ ದಿನಾಚರಣೆ ಆಚರಿಸುವಂತಹ ಪರಿಸ್ಥಿತಿ ಮಹಿಳೆಯರಿಗೆ ಬಂದಿದ್ದು, ಈ ಬಗ್ಗೆ ಯೋಚಿಸಬೇಕಾಗಿದೆ. ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೇರಳ, ಪಶ್ಚಿಮ ಬಂಗಾಳದ ಕೆಲವು ಪ್ರದೇಶ ಹಾಗೂ ಅಸ್ಸಾಂನಲ್ಲಿ ಮಾತ್ರ ಇಂದಿಗೂ ಮಾತೃ ಪ್ರಧಾನ ವ್ಯವಸ್ಥೆ ಇದ್ದು, ಉಳಿದ ಎಲ್ಲೆಡೆ ಪಿತೃ ಪ್ರಧಾನ ವ್ಯವಸ್ಥೆ ಇದೆ.

ವರದಕ್ಷಿಣೆ ಪಿಡುಗಿನಿಂದ ಹೆಣ್ಣೆಂದರೆ ಹೊರೆ ಎನ್ನುವ ಭಾವನೆ ಸಮಾಜದಲ್ಲಿ ಬಲವಾಗಿ ಬೇರೂರಿದ್ದು, ಹೆಣ್ಣು ಭ್ರೂಣ ಹತ್ಯೆಗಳು ನಡೆಯುತ್ತಿದ್ದು, ಹೆಣ್ಣು ಗಂಡಿನ ನಡುವೆ ಲಿಂಗಾನುಪಾತದಲ್ಲಿ ಅಸಮಾನತೆ ಕಂಡು ಬರುತ್ತಿದೆ. ಇದರಿಂದಾಗಿ ಪ್ರಸ್ತುತ ಹೆಣ್ಣು ಮಕ್ಕಳ ದಿನವನ್ನು ಆಚರಿಸುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೆಣ್ಣು ಮತ್ತು ಗಂಡಿನ ಲಿಂಗಾನುಪಾತದ ಅಸಮಾನತೆಯನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಸಮಾಜ ಗಂಡು ಹೆಣ್ಣು ಎಂಬ ತಾರತಮ್ಯ ತೋರಬಾರದು ಎಂದು ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್.ಶೇಷಪ್ಪ ಪ್ರಾಸ್ತಾವಿಕ ಮಾತನಾಡಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವಿನೋದ, ಮಲ್ಪೆ ವಾರ್ಡ್ ನಗರಸಭಾ ಸದಸ್ಯೆ ಎಡ್ಲಿನ್ ಕರ್ಕಡ, ಕೊಳ ವಾರ್ಡ್‌ ಸದಸ್ಯೆ ಲಕ್ಷ್ಮಿ ಮಂಜುನಾಥ್, ಮುಖಂಡರಾದ ವಿಜಯ ಕುಮಾರ ಕೊಡವೂರು, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನಾಗರತ್ನ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT