ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ ಕಂಠ ಗಾಯನ: ಉಡುಪಿಯ 5 ಲಕ್ಷ ಮಂದಿ ಭಾಗಿ

ರಾಜ್ಯದ 10,000 ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆ: ಸಚಿವ ಸುನೀಲ್ ಕುಮಾರ್
Last Updated 15 ಅಕ್ಟೋಬರ್ 2022, 14:25 IST
ಅಕ್ಷರ ಗಾತ್ರ

ಉಡುಪಿ: ಅ.28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಉಡುಪಿ ಜಿಲ್ಲೆಯ 5 ಲಕ್ಷ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ
ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಅ.28ರಂದು ಬೆಳಿಗ್ಗೆ 11 ಗಂಟೆಗೆ ಏಕಕಾಲದಲ್ಲಿ ರಾಜ್ಯದ 10,000 ಸ್ಥಳದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರು, ಸಂಘ ಸಂಸ್ಥೆಗಳು ಅ.20ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಮೊದಲು ‘ನಾಡ ಗೀತೆ’, ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ‘ಬಾರಿಸು ಕನ್ನಡ ಡಿಂಡಿಮವ’, ‘ವಿಶ್ವ ವಿನೂತನ ವಿದ್ಯಾಚೇತನ’, ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಲಾಗುವುದು.

ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 5 ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಬೇಕು, ಆಟೋ ಚಾಲಕರು, ಪೌರ ಕಾರ್ಮಿಕರು, ಗೇರು ಬೀಜ ಕಾರ್ಖಾನೆ ಸಿಬ್ಬಂದಿ, ಮೀನುಗಾರರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.

ಒಂದು ಪ್ರದೇಶದಲ್ಲಿ ಕನಿಷ್ಠ 100 ಮಂದಿ ಸೇರಿ ಹಾಡಬೇಕು. ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಸಿಬ್ಬಂದಿ, ಕಾರ್ಖಾನೆ ಕಾರ್ಮಿಕರು, ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ನಗರಸ್ಥಳೀಯ ಸಂಸ್ಥೆಗಳಲ್ಲೂ ಸಿಬ್ಬಂದಿ ಭಾಗವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಕಾರ್ಯಕ್ರಮಕ್ಕೆ ಹೊರ ರಾಜ್ಯ ಮತ್ತು ವಿದೇಶಗಳಲ್ಲಿರುವ ಕನ್ನಡಿಗರೂ ಸ್ಪಂದಿಸಿದ್ದು, ನೆಲೆಸಿರುವ ಸ್ಥಳಗಳಿಂದಲೇ ಕನ್ನಡ ಗೀತೆಗಳನ್ನು ಹಾಡಲಿದ್ದಾರೆ. ಸೇನೆಯಲ್ಲಿರುವ ಕನ್ನಡಿಗ ಯೋಧರೂ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.‌

ಸಭೆಯಲ್ಲಿ ವಿವಿಧ ಸಂಘಟನೆಗಳು ಮುಖಂಡರು ಭಾಗವಹಿಸಿ ಸಹಕಾರ ನೀಡುವುದಾಗಿ ತಿಳಿಸಿದರು. ಕೋಟಿಕಂಠ ಗಾಯನ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ದೊರೆಯಲಿದೆ. ಗಾಯನದ ಕೊನೆಯಲ್ಲಿ ಕನ್ನಡ ನಾಡು ನುಡಿಯ ಕುರಿತು ಸಂಕಲ್ಪ ಸ್ವೀಕಾರ ನಡೆಯಲಿದೆ ಎಂದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್, ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಸನ್ನ, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT