ಉಡುಪಿ: ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಸುವ ಪ್ರಮುಖ ವಲಯಗಳಲ್ಲಿ ಒಂದಾದ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪ್ರವಾಸೋದ್ಯಮ ನೀತಿ 2024-29 ರ ಮೂಲಕ ಪ್ರವಾಸೋದ್ಯಮ ವಲಯದಲ್ಲಿ ಹೂಡಿಕೆಗೆ ಅನುಕೂಲ ಕಲ್ಪಿಸಲು ಸಹಾಯಧನವನ್ನು ಒದಗಿಸಲಾಗುವುದು ಎಂದರು.
ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಶಾಸಕರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.