ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಸ್ಥಳದಲ್ಲೇ ಸಾಲ ಮಂಜೂರಾತಿ

ರಾಜ್ಯ ಮಟ್ಟದ ಸಹಕಾರ ಸಪ್ತಾಹದಲ್ಲಿ ಎಂ.ಎನ್‌ ರಾಜೇಂದ್ರ ಕುಮಾರ್‌
Last Updated 18 ನವೆಂಬರ್ 2019, 14:10 IST
ಅಕ್ಷರ ಗಾತ್ರ

ಉಡುಪಿ: ‘ತ್ವರಿತವಾಗಿ ಸಾಲ ನೀಡುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಿರುವ ಭೂಮಿ ತಂತ್ರಾಂಶವನ್ನು ಅಳವಡಿಸಿಕೊಂಡು ರೈತರಿಗೆ ಸ್ಥಳದಲ್ಲೇ ಸಾಲ ಮಂಜೂರು ಮಾಡಲಾಗುವುದು’ ಎಂದು ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ರಾಜ್ಯದ ಎಲ್ಲಾ ಸಹಕಾರ ಶೃಂಗ ಸಂಸ್ಥೆಗಳು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೋಮವಾರ ನಡೆದ 66ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಶೇ 100ರಷ್ಟು ಸಾಲ ಮರುಪಾವತಿ ಆಗುತ್ತಿರುವುದು ಹೆಮ್ಮೆಯ ವಿಚಾರ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಮ್ಮಲ್ಲಿ ಠೇವಣಿ ಇಡಲು ಹಿಂದೇಟು ಹಾಕುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಸಹಕಾರಿ ಸಂಘಗಳು ಜನರ ನಾಡಿಮಿಡಿತವನ್ನು ಅರ್ಥೈಸಿಕೊಂಡು ಕೆಲಸ ಮಾಡುತ್ತಿವೆ. ಹಾಗಾಗಿ ಸಹಕಾರಿ ಸಂಘಗಳ ಮೂಲಕ ಸರ್ಕಾರದ ಸವಲತ್ತುಗಳನ್ನು ಜನರಿಗೆ ಸುಲಭವಾಗಿ ಮುಟ್ಟಿಸಲು ಸಾಧ್ಯವಿದೆ. ವಾಣಿಜ್ಯ ಬ್ಯಾಂಕ್‌ಗಳಿಂದ ಈ ಕಾರ್ಯ ಅಸಾಧ್ಯ. ಹೆಚ್ಚಿನ ಸಹಕಾರಿ ಸಂಸ್ಥೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಜನರ ವಿಶ್ವಾಸ ಗಳಿಸಿವೆ. ನಾವು ವಾಣಿಜ್ಯ ಬ್ಯಾಂಕ್‌ಗಳಂತೆ ಸಾಲ ಮಾತ್ರ ನೀಡುತ್ತಿಲ್ಲ. ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದೇವೆ’ ಎಂದರು.

‘ಸಹಕಾರ ವಾರ ಪತ್ರಿಕೆ’ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್‌. ಗಂಗಣ್ಣ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೂತನ ಆರ್ಥಿಕ ನೀತಿಗಳಿಂದ ಸಹಕಾರಿ ಕ್ಷೇತ್ರ ಸಂಕಷ್ಟಕ್ಕೆ ಒಳಗಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ನಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಸರ್ಕಾರ ನೆರವು ನೀಡುತ್ತದೆ. ಆದರೆ ಸಹಕಾರಿ ಬ್ಯಾಂಕ್‌ಗಳ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಈ ಮೂಲಕ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ’ ಎಂದು ಕಿಡಿಕಾರಿದರು.

ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು, ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಸಹಕಾರಿಗಳಾದ ಬೆಳಪು ದೇವಿಪ್ರಸಾದ್‌ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಸರಳಾ ಕಾಂಚನ್‌, ಕೆ.ಕೆ.ಸರಳಾಯ, ಗೋಪಿಕೃಷ್ಣ ರಾವ್‌, ಅಲೆವೂರು ಹರೀಶ್‌ ಕಿಣಿ, ಶಿವಕುಮಾರ್‌ ಗೌಡ ಪಾಟೀಲ್‌, ಪ್ರಕಾಶ್ಚಂದ್ರ ಶೆಟ್ಟಿ, ಕೆಎಂಎಫ್‌ ಉಪಾಧ್ಯಕ್ಷ ಅಶೋಕ್‌ ಕುಮಾರ್‌ ಬಲ್ಲಾಳ್‌, ಸ್ಕ್ಯಾಡ್ಸ್‌ ಮಂಗಳೂರು ಅಧ್ಯಕ್ಷ ರವೀಂದ್ರ ಕಂಬಳಿ, ಕೆಎಂಎಫ್‌ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ಸುದರ್ಶನ್‌ ಜೈನ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಎಸ್.ಕೆ. ಮಂಜುನಾಥ್, ಪ್ರಮುಖರಾದ ಎಚ್.ಎಸ್.ಪೂರ್ಣಿಮಾ, ಬೆಳ್ಳಿಪ್ಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಬಿ.ಎಸ್‌.ಹರೀಶ್‌, ಎಸ್‌.ಎನ್‌.ಅರುಣ್‌ ಕುಮಾರ್‌, ನುಸ್ರತ್‌ ಮುವಾಹಿದ್‌ ಬೇಗಂ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್‌ ಬಿ.ನಾಯಕ್‌, ಪ್ರಭಾರ ಉಪನಿಬಂಧಕಿ ಚಂದ್ರಪ್ರತಿಮಾ, ಬಿ. ರವೀಂದ್ರ, ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್‌.ಪಿ.ಪುರುಷೋತ್ತಮ್ ವಂದಿಸಿದರು. ವಾಲ್‌ಸ್ಟನ್‌ ಶಂಕರಪುರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT