ಸೋಮವಾರ, ಆಗಸ್ಟ್ 15, 2022
27 °C
ಬಿಜೆಪಿ ಕಚೇರಿಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನ ಕಾರ್ಯಕ್ರಮ

‘ತುರ್ತು ಪರಿಸ್ಥಿತಿ: ಪ್ರಜಾಪ್ರಭುತ್ವದ ಕಗ್ಗೊಲೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: 1975ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕತ್ತುಹಿಸುಕಿ ಹೀನಾಯ ರಾಜಕಾರಣಕ್ಕೆ ನಾಂದಿ ನಾಡಿದರು. ಕಾಂಗ್ರೆಸ್‌ನ ಕರಾಳ ತುರ್ತು ಪರಿಸ್ಥಿತಿಯ ಕಾಲಘಟ್ಟವನ್ನು ಇಂದಿನ ತಲೆಮಾರಿಗೆ ತಿಳಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿದರು.

ಶನಿವಾರ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್‌ ಸರ್ವಾಧಿಕಾರ ಹೇರಿದ ತುರ್ತು ಪರಿಸ್ಥಿತಿಯ ಕರಾಳ ದಿನಕ್ಕೆ 45 ವರ್ಷಗಳು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1947ರಲ್ಲಿ ಹಲವು ಮಹನೀಯರ ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಹೋರಾಟದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಅಂದಿನ ಪ್ರಧಾನಿ ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರುವ ಮೂಲಕ ಹರಣ ಮಾಡಿದರು.

21 ತಿಂಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಹಾಗೂ ಪತ್ರಿಕಾ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿತ್ತು. ಸ್ವಾತಂತ್ರ್ಯದ ವಿರುದ್ಧ ಪ್ರಶ್ನೆ ಮಾಡಿದವರನ್ನು ನಿರ್ಧಾಕ್ಷಿಣ್ಯವಾಗಿ ಜೈಲಿಗೆ ನೂಕಲಾಯಿತು. ಆರ್‌ಎಸ್‌ಎಸ್‌ ಹಾಗೂ ಜನಸಂಘದ ಹೋರಾಟಗಾರರ ಹೋರಾಟವನ್ನು ಹತ್ತಿಕ್ಕಲಾಯಿತು ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ‘1975ರ ಸಂದರ್ಭ ‌ದೇಶದಲ್ಲಿ ಬರಗಾಲ ಇರಲಿಲ್ಲ, ಯುದ್ಧಗಳು ಇರಲಿಲ್ಲ, ನೆರೆ, ಆಂತರಿಕ ಕ್ಷೋಭೆಗಳು ಉಂಟಾಗಲಿಲ್ಲ. ಆದರೂ ಅಧಿಕಾರ ಲಾಲಸೆಯಿಂದ ಇಂದಿರಾಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಮಾಡಿದರು ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ ಕೂಡಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ಇದೆ ಎಂದು ಹೇಳಿಕೆ ನೀಡಿದರು. ಅವರು ಹಿಂದಿನ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಮರೆತಂತಿದೆ ಎಂದು ವ್ಯಂಗ್ಯವಾಡಿದರು.

ತುರ್ತು ಪರಿಸ್ಥಿತಿ ಹೇರಿದ್ದರ ಪ್ರತಿಫಲವಾಗಿ ಮುಂದಿನ ಚುನಾವಣೆಯಲ್ಲಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ಧೂಳಿಪಟವಾಗಬೇಕಾಯಿತು. ಜನತಾಪಕ್ಷ ಅಧಿಕಾರ ಹಿಡಿಯಿತು ಎಂದು ಕುಯಿಲಾಡಿ ಹೇಳಿದರು.

ಭಾರತೀಯ ಜನಸಂಘದ ಸಕ್ರಿಯ ಸದಸ್ಯರಾಗಿದ್ದ ತುರ್ತು ಪರಿಸ್ಥಿತಿಯ ಹೋರಾಟಗಳಲ್ಲಿ ಭಾಗವಹಿಸಿದ್ದ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ರಮಾಕಾಂತ್ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಕಾರ್ಯಕರ್ತರು ಇದ್ದರು.

ಕಾರ್ಯಕ್ರಮದ ಜಿಲ್ಲಾ ಸಂಚಾಲಕಿ ರೇಶ್ಮಾ ಉದಯ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಸಹ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು