ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಮೇಲೆ ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಎಸ್.ಅಂಗಾರ ಸೂಚನೆ

ನೀರು ಸರಾಗ ಹರಿಯಲು ರಸ್ತೆ ಬದಿಯ ಚರಂಡಿ ಸ್ವಚ್ಛಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ
Last Updated 23 ಮೇ 2022, 13:20 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಎಲ್ಲ ರಸ್ತೆಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ನೀರು ಸರಾಗವಾಗಿ ಹರಿದುಹೋಗಲು ಅನುಕೂಲವಾಗುವಂತೆ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾನ್ಸೂನ್ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಕುಂದಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ರಸ್ತೆ ನಿರ್ಮಾಣ ಮಾಡುವಾಗ ರೂಪಿಸಿದ್ದ ಯೋಜನೆಯಂತೆ ಅವೈಜ್ಞಾನಿಕ ಕಾಮಗಾರಿ ತೆರವುಗೊಳಿಸಿ ಮಳೆ ನೀರು ಹರಿದುಹೋಗಲು ವ್ಯವಸ್ಥೆ ಮಾಡಬೇಕು.

ಕುಂದಾಪುರ ತಹಶೀಲ್ದಾರ್, ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದ ಸಚಿವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯಿಂದಾಗಿ ಅವಘಡಗಳು ಸಂಭವಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ 2 ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಮಳೆ ನೀರು ಹರಿವಿಗೆ ಖಾಸಗಿ ಜಾಗದಲ್ಲಿ ತಡೆ ಹಾಕಿದ್ದರೆ ಮುಲಾಜಿಲ್ಲದೆ ತೆರವುಗೊಳಿಸಿ. ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸಿದರೆ ಪ್ರಾಕೃತಿಕ ವಿಕೋಪ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿ ಎಂದು ಎಚ್ಚರಿಕೆ ನೀಡಿದರು.

ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಪಟ್ಟಿ ಮಾಡಿ ತೆರವಿಗೆ ಅರಣ್ಯ ಇಲಾಖೆಗೆ ವರದಿ ಸಲ್ಲಿಸಬೇಕು. ಅರಣ್ಯ ಇಲಾಖೆ ಆದ್ಯತೆ ಮೇರೆಗೆ ಸ್ಪಂದಿಸಬೇಕು. ಗಾಳಿ ಮಳೆಗೆ ರಸ್ತೆಗೆ ಮರಗಳು ಬಿದ್ದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ತಕ್ಷಣ ತೆರವುಗೊಳಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಾಕೃತಿಕ ವಿಕೋಪಗಳು ಎದುರಾದರೆ ಸಾರ್ವಜನಿಕರ ರಕ್ಷಣೆಗೆ ಅಗತ್ಯ ರಕ್ಷಣಾ ಪರಿಕರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಅಗತ್ಯವಿದ್ದರೆ ಮೀನುಗಾರಿಕೆ ಇಲಾಖೆಯಿಂದ ಬೋಟ್‌ಗಳನ್ನು ಪಡೆಯಬೇಕು ಎಂದು ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆ ಅಧಿಕಾರಿಗಳಿಗೆ ಸಚಿವ ಅಂಗಾರ ಸೂಚನೆ ನಿರ್ದೇಶಿಸಿದರು.

ಮಳೆಗಾಲದಲ್ಲಿ ಡೆಂಗಿ, ಮಲೇರಿಯಾ ಉಲ್ಬಣವಾಗದಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು. ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ಹಾಗೂ ಸೊಳ್ಳೆಗಳ ಬೆಳವಣಿಗೆ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ವಲಸೆ ಕಾರ್ಮಿಕರು ವಾಸವಾಗಿರುವ ಜಾಗಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಸಭೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸಿಇಒ ಎಚ್‌.ಪ್ರಸನ್ನ, ಕರಾವಳಿ ಕಾವಲು ಪಡೆ ಎಸ್‌ಪಿ ಅಂಶುಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ಕುಂದಾಪುರ ಡಿಎಫ್‌ಒ ಆಶೀಶ್ ರೆಡ್ಡಿ, ಕಾರ್ಕಳ ಡಿಎಫ್‌ಒ ಗಣಪತಿ, ಎಎಸ್‌ಪಿ ಸಿದ್ಧಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT