ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಡ ಹಾಕಲು ಮಾರ್ಷಲ್‌ಗಳ ನೇಮಕ: ಜಿಲ್ಲಾಧಿಕಾರಿ ಜಿ.ಜಗದೀಶ್

ಸಭೆ ಸಮಾರಂಭಗಳಿಗೆ ಬಂದು ಪರಿಶೀಲನೆ: ಜಿಲ್ಲಾಧಿಕಾರಿ ಜಿ.ಜಗದೀಶ್
Last Updated 2 ಮಾರ್ಚ್ 2021, 13:42 IST
ಅಕ್ಷರ ಗಾತ್ರ

ಉಡುಪಿ: ಇನ್ಮುಂದೆ ಸಭೆ ಸಮಾರಂಭಗಳಲ್ಲಿ ಅಂತರ ಪಾಲನೆ ಮಾಡದಿದ್ದರೆ, ಮಾಸ್ಕ್ ಧರಿಸದಿದ್ದರೆ ಮಾರ್ಷಲ್‌ಗಳು ಬಂದು ದಂಡ ಹಾಕಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪರಿಣಿತ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ಸುರಕ್ಷತಾ ಕ್ರಮಗಳ ಪಾಲನೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಅಸಡ್ಡೆ ನಿವಾರಣೆಗೆ ಜಿಲ್ಲಾಡಳಿತ ಮಾರ್ಷಲ್‌ಗಳ ನೇಮಕ ಮಾಡಲಿದೆ. ಸಮಾರಂಭಗಳು ನಡೆಯುವ ಜಾಗಕ್ಕೆ ಬರುವ ಮಾರ್ಷಲ್‌ಗಳು ನಿಯಮ ಉಲ್ಲಂಘಿಸುವ ಸಾರ್ವಜನಿಕರಿಗೆ ದಂಡ ಹಾಗೂ ಕಟ್ಟಡ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಕಾಣುತ್ತಿದ್ದು, ಪರಿಣಿತ ಸಲಹಾ ಸಮಿತಿ ಅಭಿಪ್ರಾಯದಂತೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌, ಸ್ಯಾನಿಟೈಸರ್ ಬಳಕೆ ಮಾಡಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್ ಸುರಕ್ಷತಾ ನಿಯಮಗಳ ಪಾಲನೆ ಕಂಡುಬರುತ್ತಿಲ್ಲ. ನಿಯಮ ಉಲ್ಲಂಘಿಸುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಕೇರಳ ಮತ್ತು ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ನೀಡಬೇಕು. ವರದಿ ಇಲ್ಲದಿದ್ದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಗೆ ವಿದೇಶ ಹಾಗೂ ಹೊರ ರಾಜ್ಯಗಳಿಂದ ಬರುವವರ ವಿವರಗಳನ್ನು ಸಾರ್ವಜನಿಕರು ಸಮೀಪದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕಿತರ ಪ್ರಾಥಮಿಕ ವಿವರ ಸಂಗ್ರಹಿಸಿ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಬೇಕು ಎಂದರು.

ಆರೋಗ್ಯ ಇಲಾಖೆ ಪರೀಕ್ಷೆ ಸಂಖ್ಯೆ ಹೆಚ್ಚುಮಾಡಬೇಕು, ಪ್ರಾಥಮಿಕ ಸಂಪರ್ಕಿತರ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್ ಹೇಳಿದರು.

ಸಭೆಯಲ್ಲಿ ಡಿಎಚ್‌ಒ ಡಾ.ಸುದೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಕೋವಿಡ್ ವಿಶೇಷಾಧಿಕಾರಿ ಡಾ. ಪ್ರೇಮಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT