ಗುರುವಾರ , ನವೆಂಬರ್ 14, 2019
19 °C
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ

ಡಿಸಿ ಮನ್ನಾ ಭೂಮಿ ಒತ್ತುವರಿ ತೆರವುಗೊಳಿಸಿ

Published:
Updated:
Prajavani

ಉಡುಪಿ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಡಿಸಿ ಮನ್ನಾ ಭೂಮಿಯನ್ನು ಕೂಡಲೇ ತೆರವುಗೊಳಿಸಬೇಕು ಎಂದು ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ದಲಿತರಿಗೆ ಮೀಸಲಾಗಿರುವ ಡಿಸಿ ಮನ್ನಾ ಭೂಮಿಯನ್ನು ಹಲವು ಕಡೆ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಸಭೆಯಲ್ಲಿ ದಲಿತ ಮುಖಂಡರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ಒತ್ತುವರಿ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಡಿಸಿ ಮನ್ನಾ ಭೂಮಿ ಅನ್ಯರ ಪಾಲಾಗಲು ಜಿಲ್ಲಾಡಳಿತ ಬಿಡುವುದಿಲ್ಲ. ಅಕ್ರಮವಾಗಿ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ದಲಿತರಿಗೆ ಸಾಲ ಸಿಗುತ್ತಿಲ್ಲ ಎಂಬ ದೂರಿಗೆ ಸ್ಪಂದಿಸಿದ ಡಿಸಿ, ಲೀಡ್ ಬ್ಯಾಂಕ್ ಮೂಲಕ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಾಲ ನೀಡುವಂತೆ ಸೂಚನೆ ನೀಡಲಾಗುವುದು. ಲೀಡ್ ಬ್ಯಾಂಕ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ, ಜಿಲ್ಲಾ ಪಂಚಾಯತ್ ಸಿಇಒ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮರಳು ದಿಬ್ಬ ತೆರವು ಮಾಡಲು ಸಾಂಪ್ರದಾಯಿಕವಾಗಿ ಮರಳು ತೆಗೆಯುವವರಿಗೆ ಮತ್ತು ಪರಿಶಿಷ್ಟ ಪಂಗಡಕ್ಕೆ ಅವಕಾಶ ಕೊಡಬೇಕು ಎಂಬ ಬೇಡಿಕೆಗೆ ಸ್ಪಂದಿಸಿ, ಈಗಾಗಲೇ ಜಿಲ್ಲೆಯಲ್ಲಿ 170 ಮಂದಿಗೆ ಪರವಾನಗಿ ನೀಡಲಾಗಿದ್ದು, ಅದರಲ್ಲಿ 16 ಮಂದಿ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಿದ್ದಾರೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಬದಲಾಗಿ ಬೇರೆಯವರು ತೆಗೆಯುತ್ತಿದ್ದರೆ ತನಿಖೆ ನಡೆಸಿ, ಪರವಾನಗಿ ರದ್ದು ಮಾಡುವುದಾಗಿ ಡಿಸಿ ತಿಳಿಸಿದರು.

ದಲಿತರಿಗೆ ಮೀಸಲಿಟ್ಟ ಅನುದಾನ ದುರುಪಯೋಗ ಕುರಿತ ದೂರಿಗೆ ಪ್ರತಿಕ್ರಿಯಿಸಿ, ಅಂತಹ ದೂರುಗಳನ್ನು ಪರಿಶೀಲಿಸಿ ವರದಿ ನೀಡುವಂತೆ ತಾಲ್ಲೂಕು ಪಂಚಾಯ್ತಿ ಇಒಗಳಿಗೆ ಸೂಚಿಸಿದರು.

ಇಎಸ್ಐ ಆಸ್ಪತ್ರೆಯಲ್ಲಿ ಸ್ಪಂದನ ಸಿಗುತ್ತಿಲ್ಲ, ನಾಲ್ಕೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಲುಷಿತ ನೀರು ಸರಬರಾಜು, ಕುಂದಾಪುರದ ಖಾಸಗಿ ಶಾಲೆಯಲ್ಲಿ ಡೊನೇಷನ್ ಹಾವಳಿ, ಆರೂರು ಗ್ರಾಮ ಪಂಚಾಯತ್‌ನಲ್ಲಿ ಅಕ್ರಮ ಕಲ್ಲುಕ್ವಾರಿ, ಜಿಲ್ಲಾ ಅಂಬೇಡ್ಕರ್ ಭವನ ನಿರ್ಮಾಣ, ಏಲಂ ಮೀಸಲಾತಿ ಉಲ್ಲಂಘನೆ, ಕುಕ್ಕೆಹಳ್ಳಿಯ ಮೀನು ಸಂಸ್ಕರಣಾ ಘಟಕದಿಂದ ತೊಂದರೆ, ಹಂಗಾರಕಟ್ಟೆಯ ಫಿಶ್ ಕಟಿಂಗ್ ಫ್ಯಾಕ್ಟರಿಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯ ಕುರಿತು ಸಭೆಯಲ್ಲಿ ಚರ್ಚೆಯಾಯಿತು.

ಕುಂದುಕೊರತೆ ಸಭೆ ಕಾಟಾಚಾರಕ್ಕೆ ನಡೆಯಬಾರದು. ದೂರುಗಳು ದಾಖಲಾದ ಕೂಲಡೇ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಾರ್ಕಳ ವಿಭಾಗದ ಎಎಸ್‌ಪಿ  ಕೃಷ್ಣಕಾಂತ್, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಎಸ್‌ಪಿ ಕುಮಾರ ಸ್ವಾಮಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಉಪಸ್ಥಿತರಿದ್ದರು.‌

ಪ್ರತಿಕ್ರಿಯಿಸಿ (+)