ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯವ ನೀರಿನ ಸಮಸ್ಯೆ ತಲೆದೋರಬಾರದು

ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಗೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ
Last Updated 7 ಏಪ್ರಿಲ್ 2020, 16:17 IST
ಅಕ್ಷರ ಗಾತ್ರ

ಉಡುಪಿ: ನೆರೆಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದು, ಜಿಲ್ಲೆಯ ಗಡಿ ಪ್ರದೇಶವನ್ನು ಮತ್ತಷ್ಟು ಬಿಗಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ಇತರೆ ಸಮಸ್ಯೆಗಳ ಕುರಿತು ವಿಡಿಯೋ ಸಂವಾದ ನಡೆಸಿದ ಸಚಿವರು, ಕೊರೋನಾ ನಿಯಂತ್ರಣ ಸಂಬಂಧ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಗಳ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ನೆರೆಯ ಜಿಲ್ಲೆಗಳಿಂದ ಅವಶ್ಯಕ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಅನಗತ್ಯ ಸಂಚರಿಸುವ ವಾಹನಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಸಚಿವರು ಎಸ್‌ಪಿಗೆ ಸೂಚನೆ ನೀಡಿದರು.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ ಕಾರ್ಯಕರ್ತರು ಗ್ರಾಮ ಹಾಗೂ ನಗರಗಳಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಬೇಕು. ಈ ಕಾರ್ಯಕ್ಕೆ ಸ್ಥಳೀಯ ಸಂಸ್ಥೆಗಳ ನೆರವು ಪಡೆಯಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು ಎಂಬ ಸಚಿವರ ಸೂಚನೆಗೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್‌, ‘ಈಗಾಗಲೇ ಸಮಸ್ಯೆ ಇರುವಗ್ರಾಮಗಳನ್ನು ಗುರುತಿಸಿ, ನೀರು ಪೂರೈಕೆಗೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. 2 ದಿನಗಳಿಗೊಮ್ಮೆ ಗ್ರಾಮ ಪಂಚಾಯಿತಿ ಸಭೆ ನಡೆಸಲಾಗುತ್ತಿದೆ. ಪ್ರಸ್ತುತ ನೀರಿನ ಸಮಸ್ಯೆ ಇಲ್ಲ‌’ ಎಂದು ತಿಳಿಸಿದರು.

ರೈತರು ಬೆಳೆದ ಕಲ್ಲಂಗಡಿ, ಮಟ್ಟುಗುಳ್ಳ, ಅನಾನಸ್ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳನ್ನು ಸಾಗಿಸಲು ವ್ಯವಸ್ಥೆ ಮಾಡಲಾಗಿದೆ. ಕೀಟನಾಶಕ, ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಭತ್ತದ ಕಟಾವು ನಡೆಯುತ್ತಿದ್ದು, ಎಪಿಎಂಸಿ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಸ್‌ಪಿ ವಿಷ್ಣುವರ್ಧನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‍ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕೊರೊನಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT