ಗುರುವಾರ , ಜುಲೈ 29, 2021
21 °C
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್

ಉಡುಪಿ | ಕೋವಿಡ್–19 ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬಂಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಹೆಚ್ಚಿಸಲಾಗುವುದು. ಇದಕ್ಕಾಗಿ ಅಗತ್ಯ ವೈದ್ಯರು, ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಹೇಳಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಆಸ್ಪತ್ರೆಗಳಲ್ಲಿ 2,500 ಹೆಚ್ಚುವರಿ ಹಾಸಿಗೆಗಳ ಸೌಲಭ್ಯಕ್ಕೆ ಸೂಚಿಸಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಜಿಲ್ಲಾಧಿಕಾರಿ ಪ್ರಸ್ತಾವನೆಗ ಸಲ್ಲಿಸಿದರೆ ಸರ್ಕಾರ ಅನುಮತಿ ನೀಡಲಿದೆ ಎಂದರು.

ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವ ಉಪಕರಣಗಳ ಕಾರ್ಯಕ್ಷಮತೆ ಹಾಗೂ ಸಿಬ್ಬಂದಿ ತರಬೇತಿ ಬಗ್ಗೆ ಜಿಲ್ಲಾಧಿಕಾರಿ ಗಮನ ಹರಿಸಬೇಕು. ತಾಲ್ಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವೆಂಟಿಲೇಟರ್ ಸೌಲಭ್ಯದ ವ್ಯವಸ್ಥೆ ಮಾಡಬೇಕು ಹಾಗೂ ಹೆಚ್ಚುವರಿಯಾಗಿ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಹೊರರಾಜ್ಯದಿಂದ ಬಂದವರ ಸಂಪೂರ್ಣ ಮಾಹಿತಿ ಆಯಾ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ‌ಗಳಲ್ಲಿ ಇರಬೇಕು. ಅವರ ಕ್ವಾರೆಂಟೈನ್ ಅವಧಿಯ ಮೇಲೆ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪ್ರಯೋಗಾಲಯದ ಕಾಮಗಾರಿ ಅಂತಿಮ ಹಂತದಲ್ಲಿದ್ದು, 2-3 ದಿನಗಳೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಯೋಗಾಲಯದಲ್ಲಿ ಅಗತ್ಯ ಉಪಕರಣಗಳ ಅಳವಡಿಕೆ ಮಾಡಲಾಗುವುದು. ಶೀಘ್ರವೇ ಗಂಟಲ ದ್ರವ ಪರೀಕ್ಷೆ ಉಡುಪಿಯಲ್ಲಿಯೇ ನಡೆಯಲಿದೆ ಎಂದು ಡಿಸಿ ಜಗದೀಶ್ ತಿಳಿಸಿದರು.

ಬ್ಯಾಂಕರ್‌ಗಳ ಸಭೆ: ಕೋವಿಡ್–19 ಸೋಂಕು ಹಿನ್ನೆಲೆಯಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಹಣಕಾಸು ನೆರವು ಯೋಜನೆ ಜಾರಿಗೆ ಜಿಲ್ಲೆಯಲ್ಲಿ ಕೆಲವು ಖಾಸಗಿ ಬ್ಯಾಂಕುಗಳು ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ದೂರುಗಳಿವೆ. ಈ ಬಗ್ಗೆ ಜಿಲ್ಲೆಯ ಬ್ಯಾಂಕುಗಳ ಜತೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಸೂಚಿಸಿದರು. 

ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಭಾಗಶಃ ಹಾನಿಗೊಳಗಾದ ಮನೆಗಳನ್ನು ಪುನರ್ನಿಮಾಣ ಮಾಡಲು ಅನುದಾನ ಬಿಡುಗಡೆ ವಿಳಂಬದಿಂದ ಕೆಲವೆಡೆ ಮನೆ ನಿರ್ಮಾಣ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಬಿತ್ತನೆ ಬೀಜಕ್ಕೆ ಹೆಚ್ಚು ಬೇಡಿಕೆ ಬರುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಕಂಡುಬಂದಿದೆ. ಜಿಲ್ಲೆಯ ಕೆಲವೆಡೆ ಈಗಾಗಲೇ ಬಿತ್ತನೆ ಚಟುವಟಿಕೆ ಆರಂಭಗೊಂಡಿದೆ ಎಂದು ಕೃಷಿ ಜಂಟಿ ನಿರ್ದೇಶಕ ಕೆಂಪೇಗೌಡ ಸಭೆಗೆ ತಿಳಿಸಿದರು.

ರಾಜ್ಯ ಸರ್ಕಾರ ಹೂ ಬೆಳೆಗಾರರಿಗೆ ಪರಿಹಾರ ನೀಡುವ ಯೋಜನೆಯಲ್ಲಿ ಜಿಲ್ಲೆಯಲ್ಲಿ 4,333 ರೈತರು ಅರ್ಜಿ ಸಲ್ಲಿಸಿದ್ದಾರೆ. ಗರಿಷ್ಠ 2.5 ಎಕರೆಗೆ ₹25,000 ಪರಿಹಾರ ದೊರಕಲಿದೆ. ಇದರೊಂದಿಗೆ ತರಕಾರಿ, ಹಣ್ಣು ಬೆಳೆಗಾರರಿಗೆ ಪರಿಹಾರ ನೀಡಲು ಹೊಸದಾಗಿ ಮಾರ್ಗಸೂಚಿ ಬಂದಿದ್ದು, ಜಿಲ್ಲೆಯಲ್ಲಿ ಕಲ್ಲಂಗಡಿ ಹಾಗೂ ಅನಾನಸು ಬೆಳೆಗಾರರಿಗೆ ಪರಿಹಾರ ದೊರೆಯಲಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು